ಕುಮಟಾ: ರಾತ್ರಿ ವೇಳೆ ರಸ್ತೆಯಲ್ಲಿ ಮಲಗಿದ್ದ ದನವೊಂದನ್ನು ಕಾರಿನಲ್ಲಿ ಹಾಕಿಕೊಂಡು ಕಳವು ಮಾಡಿದ ಆರೋಪದ ಮೇಲೆ ಕುಮಟಾ ಪೊಲೀಸರು ಓರ್ವನನ್ನು ಬಂಧಿಸಿ, ಕೃತ್ಯಕ್ಕೆ ಬಳಸಿದ್ದ ಕಾರನ್ನು ವಶಪಡಿಸಿಕೊಂಡಿದ್ದಾರೆ. ಇನ್ನಿಬ್ಬರು ಆರೋಪಿಗಳು ತಲೆಮರೆಸಿಕೊಂಡಿದ್ದು, ಅವರ ಪತ್ತೆಗೆ ಪೊಲೀಸರು ಕಾರ್ಯಾಚರಣೆ ಮುಂದುವರಿಸಿದ್ದಾರೆ.
ಸೆ.10ರಂದು ಬೆಳಗಿನ ಜಾವ 2.14ರ ಸುಮಾರಿಗೆ ಬಿಳಿ ಬಣ್ಣದ ಕಾರಿನಲ್ಲಿ ಬಂದ ಆರೋಪಿತರು ಕುಮಟಾ ಪಟ್ಟಣದ ರೈಸ್ ಮಿಲ್ ಪಕ್ಕದ ರಸ್ತೆಯಲ್ಲಿ ಮಲಗಿದ್ದ ದನವೊಂದನ್ನು ಹಿಡಿದು ಕಾರಿನಲ್ಲಿ ಹಾಕಿಕೊಂಡು ಕಳವು ಮಾಡಿಕೊಂಡು ಹೋಗಿರುವ ಕುರಿತು ಕುಮಟಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.
ಆರೋಪಿಗಳ ಪತ್ತೆಗಾಗಿ ನುರಿತ ಅಧಿಕಾರಿ ಹಾಗೂ ಸಿಬ್ಬಂದಿಗಳ ತಂಡ ರಚಿಸಲಾಗಿತ್ತು. ತನಿಖೆ ನಡೆಸಿದ ಪೊಲೀಸರು 60ಕ್ಕೂ ಅಧಿಕ ಸಿಸಿ ಕ್ಯಾಮೆರಾಗಳ ದೃಶ್ಯಗಳನ್ನು ಪರಿಶೀಲಿಸಿ, ತಾಂತ್ರಿಕ ಸಾಕ್ಷ್ಯಾಧಾರಗಳ ಜಾಡು ಹಿಡಿದು ಆರೋಪಿಯನ್ನು ಪತ್ತೆಹಚ್ಚಿದ್ದಾರೆ.
ಬಂಧಿತನನ್ನು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು, ಬೈಕಂಪಾಡಿ, ತೋಕೂರು ನಿವಾಸಿ ಮಹಮ್ಮದ್ ಶಬೀರ @ ಸಮೀರ @ ಗುರ್ಕಾ ಸಮೀರ್ (30) ಎಂದು ಗುರುತಿಸಲಾಗಿದೆ. ಈತನನ್ನು ದಕ್ಷಿಣ ಕನ್ನಡ ಜಿಲ್ಲೆಯ ಬಜಪೆಯಲ್ಲಿ ವಶಕ್ಕೆ ಪಡೆಯಲಾಗಿದ್ದು, ಕೃತ್ಯಕ್ಕೆ ಬಳಸಿದ್ದ ಮಾರುತಿ ಸುಜುಕಿ ಎರ್ಟಿಗಾ ಕಾರು (KA-20/MC-4268) ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಪ್ರಕರಣದಲ್ಲಿ ಭಾಗಿಯಾಗಿರುವ ಇನ್ನಿಬ್ಬರು ಆರೋಪಿಗಳು ತಲೆಮರೆಸಿಕೊಂಡಿದ್ದು, ಅವರ ಪತ್ತೆಗಾಗಿ ತನಿಖೆ ಮುಂದುವರಿದಿದೆ.
ಪೊಲೀಸ್ ಅಧೀಕ್ಷಕ ದೀಪನ್ ಎಂ.ಎನ್., ಹೆಚ್ಚುವರಿ ಪೊಲೀಸ್ ಅಧೀಕ್ಷಕ-1 ಕೃಷ್ಣಮೂರ್ತಿ ಹಾಗೂ ಭಟ್ಕಳ ಉಪವಿಭಾಗದ ಸಹಾಯಕ ಪೊಲೀಸ್ ಅಧೀಕ್ಷಕ ರಾನು ಗುಪ್ತ ಅವರ ಮಾರ್ಗದರ್ಶನದಲ್ಲಿ ಕುಮಟಾ ಪೊಲೀಸ್ ನಿರೀಕ್ಷಕ ಯೋಗೇಶ ಕೆ.ಎಂ. ನೇತೃತ್ವದಲ್ಲಿ ಪಿಎಸ್‌ಐಗಳಾದ ಖಾದರ್ ಬಾಷಾ, ರವಿ ಗುಡ್ಡಿ ಹಾಗೂ ವಿಠಲ ಮಲವಡಕರ, ಸಿಬ್ಬಂದಿಗಳಾದ ಗಣೇಶ ನಾಯ್ಕ, ದಯಾನಂದ ನಾಯ್ಕ, ಗುರು ನಾಯಕ, ಕಿರಣ ನಾಯ್ಕ ಹಾಗೂ ಉಡುಪಿ ಜಿಲ್ಲೆಯ ಅಪರಾಧ ವಿಭಾಗದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
ಕಾರ್ಯಾಚರಣೆಯಲ್ಲಿ ಭಾಗವಹಿಸಿದ ಅಧಿಕಾರಿ ಮತ್ತು ಸಿಬ್ಬಂದಿಯ ಕಾರ್ಯವನ್ನು ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು ಅಭಿನಂದಿಸಿದ್ದಾರೆ.