ಕಾರವಾರ: ಬಿಜೆಪಿ ಆಡಳಿತದ ಅವಧಿಯಲ್ಲಿ ವಿವಿಧ ಕಾರಣಗಳಿಂದ ಮುಖ್ಯಮಂತ್ರಿಗಳು ಹಾಗೂ ಸಚಿವರು ರಾಜೀನಾಮೆ ನೀಡಬೇಕಾದ ಸಂದರ್ಭಗಳನ್ನು ರಾಜ್ಯದ ಜನತೆ ನೋಡಿದ್ದಾರೆ. ಹೀಗಿರುವಾಗ ಮಾಜಿ ಸಚಿವ ನಾಗೇಂದ್ರ ಅವರ ವಿಚಾರ ಮುಂದಿಟ್ಟುಕೊಂಡು ಬಿಜೆಪಿ ನಾಯಕರು ಪ್ರತಿಭಟನೆ ನಡೆಸುತ್ತಿರುವುದು ಎಷ್ಟು ಸರಿ ಎಂಬುದನ್ನು ಅವರೇ ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಲಕ್ಷ್ಮಣ ಸವದಿ ತೀವ್ರ ವಾಗ್ದಾಳಿ ನಡೆಸಿದರು.
ಕಾರವಾರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಬಿಜೆಪಿ ನಾಯಕರು ನಡೆದುಕೊಂಡಿರುವ ವಿಚಾರಗಳ ಇತಿಹಾಸವೇ ಅವರ ಮುಂದಿರುವಾಗ, ಇದೀಗ ಭ್ರಷ್ಟಾಚಾರದ ಬಗ್ಗೆ ಮಾತನಾಡಲು ಬಿಜೆಪಿಗೆ ಯಾವುದೇ ನೈತಿಕ ಹಕ್ಕಿಲ್ಲ ಎಂದರು.
ಬೆಳಗಾವಿ 18 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ದೊಡ್ಡ ಜಿಲ್ಲೆಯಾಗಿದೆ. ಈ ಹಿಂದೆ ಜಿಲ್ಲೆಗೆ ಹಲವು ಸಚಿವ ಸ್ಥಾನಗಳನ್ನು ನೀಡಿದ ಉದಾಹರಣೆಗಳಿವೆ. ಹೀಗಾಗಿ ಪ್ರಸ್ತುತ ಖಾಲಿ ಇರುವ ಸಚಿವ ಸ್ಥಾನವನ್ನು ಬೆಳಗಾವಿ ಜಿಲ್ಲೆಗೆ ನೀಡಬೇಕೆಂಬ ಬೇಡಿಕೆ ಇದೆ ಎಂದು ತಿಳಿಸಿದರು.
ಪ್ರತಿಯೊಬ್ಬ ಶಾಸಕರಿಗೂ ಸಚಿವರಾಗುವ ಆಸೆ ಇರುವುದು ಸಹಜ. ಆದರೆ ಸಚಿವ ಸಂಪುಟ ವಿಸ್ತರಣೆ ಅಥವಾ ಖಾತೆ ಹಂಚಿಕೆ ವಿಚಾರದಲ್ಲಿ ಹೈಕಮಾಂಡ್ ಹಾಗೂ ಮುಖ್ಯಮಂತ್ರಿ ಕೈಗೊಳ್ಳುವ ಯಾವುದೇ ನಿರ್ಧಾರಕ್ಕೆ ನಾವೆಲ್ಲರೂ ಬದ್ಧರಾಗಿರುತ್ತೇವೆ ಎಂದು ಸವದಿ ಸ್ಪಷ್ಟಪಡಿಸಿದರು.
ಪಂಚ ಗ್ಯಾರಂಟಿ ಯೋಜನೆಗಳಿಗೆ ವಾರ್ಷಿಕ ಸುಮಾರು ₹50 ಸಾವಿರದಿಂದ ₹55 ಸಾವಿರ ಕೋಟಿ ವೆಚ್ಚವಾಗುತ್ತಿದ್ದರೂ ರಾಜ್ಯದ ಆರ್ಥಿಕ ವ್ಯವಸ್ಥೆ ಸಮರ್ಪಕವಾಗಿ ಮುಂದುವರಿಯುತ್ತಿದೆ. ಕರ್ನಾಟಕದ ಈ ಮಾದರಿಯನ್ನು ದೇಶದ ಇತರೆ ರಾಜ್ಯಗಳೂ ಅನುಸರಿಸುತ್ತಿವೆ ಎಂದು ಅವರು ತಿಳಿಸಿದರು.
ಸಚಿವರು, ಶಾಸಕರು ಹಾಗೂ ಅಧಿಕಾರಿಗಳು ಯಾರಲ್ಲಿಯೂ ಅಧಿಕಾರದ ಅಹಂ ಇರಬಾರದು. ಜನರು ಪಾವತಿಸುವ ತೆರಿಗೆ ಹಣದಿಂದಲೇ ಸರ್ಕಾರದ ವ್ಯವಸ್ಥೆ ನಡೆಯುತ್ತಿದ್ದು, ಅಧಿಕಾರದಲ್ಲಿರುವ ಪ್ರತಿಯೊಬ್ಬರೂ ಜನರ ಸೇವಕರಾಗಿ ಕಾರ್ಯನಿರ್ವಹಿಸಬೇಕು ಎಂದು ಲಕ್ಷ್ಮಣ ಸವದಿ ಹೇಳಿದರು.
ಈ ಸಂದರ್ಭದಲ್ಲಿ ಶಾಸಕ ಸತೀಶ್ ಸೈಲ್ ಹಾಗೂ ವಿಧಾನ ಪರಿಷತ್ ಸದಸ್ಯ ಗಣಪತಿ ಉಳ್ವೇಕರ್ ಉಪಸ್ಥಿತರಿದ್ದರು.