Monday, September 7, 2026
Join WhatsApp Group
HomeLocal Newsಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿಗೆ 20 ವರ್ಷ ಜೈಲು

ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿಗೆ 20 ವರ್ಷ ಜೈಲು

ಯಲ್ಲಾಪುರ: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಪ್ರಕರಣದಲ್ಲಿ ಆರೋಪಿಗೆ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ, ₹1 ಲಕ್ಷ ದಂಡ ಹಾಗೂ ಸಂತ್ರಸ್ತೆಗೆ ₹4 ಲಕ್ಷ ಪರಿಹಾರ ನೀಡುವಂತೆ ಕಾರವಾರದ ತ್ವರಿತ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ.

ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ 2022ರಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ, ಸೂರಬೈಲ್ ಗ್ರಾಮದ ಸಂತೋಷ ತಂದೆ ಪೆದ್ರು ಸಿದ್ದಿ @ ಮಂಡವಾಳಕರ (27) ವಿರುದ್ಧ ಪ್ರಕರಣ ದಾಖಲಾಗಿತ್ತು.

ಪ್ರಕರಣದ ತನಿಖೆಯನ್ನು ಅಂದಿನ ಯಲ್ಲಾಪುರ ಪೊಲೀಸ್ ನಿರೀಕ್ಷಕರಾಗಿದ್ದ ಸುರೇಶ್ ಎಚ್. ಯಳ್ಳೂರ ಅವರು ನಡೆಸಿ, ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಬಳಿಕ ದೋಷಾರೋಪಣಾ ಪತ್ರ ಸಲ್ಲಿಸಲಾಗಿತ್ತು.

ಪ್ರಕರಣದ ವಿಚಾರಣೆ ನಡೆಸಿದ ಕಾರವಾರದ ತ್ವರಿತ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶೆ ಪ್ರತಿಭಾ ಬಂಡುರಾವ್ ಕುಲಕರ್ಣಿ ಅವರು, ಆರೋಪಿಯ ವಿರುದ್ಧದ ಅಪರಾಧವು ಸಾಕ್ಷ್ಯಾಧಾರಗಳಿಂದ ಸಾಬೀತಾಗಿದೆ ಎಂದು ತೀರ್ಮಾನಿಸಿ, 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹1 ಲಕ್ಷ ದಂಡ ವಿಧಿಸಿ ಬುಧವಾರ ತೀರ್ಪು ಪ್ರಕಟಿಸಿದ್ದಾರೆ.

ಅಲ್ಲದೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಮೂಲಕ ಸಂತ್ರಸ್ತೆಗೆ ₹4 ಲಕ್ಷ ಪರಿಹಾರಧನ ನೀಡುವಂತೆ ನ್ಯಾಯಾಲಯ ಆದೇಶಿಸಿದೆ.

ಪ್ರಕರಣದಲ್ಲಿ ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಗುರುಶಾಂತಯ್ಯ ಕೆ. ಕುರ್ಡಿಕೇರಿ ವಾದ ಮಂಡಿಸಿ ಶಿಕ್ಷೆ ದೊರಕಿಸಿಕೊಡುವಲ್ಲಿ ಯಶಸ್ವಿಯಾಗಿದ್ದಾರೆ.

ತನಿಖೆಗೆ ಎಎಸ್‌ಐ ಮಂಜುನಾಥ ಮನ್ನಂಗಿ ಸಹಕರಿಸಿದ್ದು, ಪ್ರಕರಣದ ನ್ಯಾಯಾಲಯದ ಮೇಲ್ವಿಚಾರಣೆಯನ್ನು ಪಿಎಸ್‌ಐ ರಾಜಶೇಖರ ವಂದಲಿ ನಿರ್ವಹಿಸಿದ್ದರು. ವಿಚಾರಣೆಯ ಅವಧಿಯಲ್ಲಿ ಸಾಕ್ಷಿದಾರರನ್ನು ನ್ಯಾಯಾಲಯಕ್ಕೆ ಹಾಜರುಪಡಿಸುವಲ್ಲಿ ಎಎಸ್‌ಐ ಗಜಾನನ ನಾಯ್ಕ ಹಾಗೂ ಸಿಪಿಸಿ ವೀರೇಶ ಎಂ.ಎಚ್. ಪ್ರಮುಖ ಪಾತ್ರ ವಹಿಸಿದ್ದರು.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad
Ad

Most Popular

error: Content is protected !!
Share