Sunday, September 6, 2026
Join WhatsApp Group
HomeLocal Newsಕೆಲಸ ಕೇಳಿದ 15 ದಿನದೊಳಗೆ ಉದ್ಯೋಗ ಖಾತ್ರಿ

ಕೆಲಸ ಕೇಳಿದ 15 ದಿನದೊಳಗೆ ಉದ್ಯೋಗ ಖಾತ್ರಿ

ನರೇಗಾ ಯೋಜನೆಯ ಸದುಪಯೋಗಕ್ಕೆ ಇಒ ರಾಜೇಶ್ ದನವಾಡಕರ್ ಕರೆ

ಯಲ್ಲಾಪುರ: ಗ್ರಾಮೀಣ ಪ್ರದೇಶದ ಕೂಲಿಕಾರರು ಉದ್ಯೋಗಕ್ಕಾಗಿ ಹೊರ ಜಿಲ್ಲೆ, ಹೊರ ರಾಜ್ಯಗಳಿಗೆ ವಲಸೆ ಹೋಗುವುದನ್ನು ತಡೆಯುವ ಉದ್ದೇಶದಿಂದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ನರೇಗಾ) ಅಡಿಯಲ್ಲಿ ವ್ಯಾಪಕ ಉದ್ಯೋಗಾವಕಾಶ ಕಲ್ಪಿಸಲಾಗಿದ್ದು, ಕೆಲಸದ ಅಗತ್ಯವಿರುವವರು ತಮ್ಮ ಗ್ರಾಮ ಪಂಚಾಯಿತಿಗೆ ಬೇಡಿಕೆ ಸಲ್ಲಿಸಿದರೆ ಕಡ್ಡಾಯವಾಗಿ ಉದ್ಯೋಗ ಒದಗಿಸಲಾಗುವುದು ಎಂದು ಯಲ್ಲಾಪುರ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ರಾಜೇಶ್ ದನವಾಡಕರ್ ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಗ್ರಾಮ ಪಂಚಾಯಿತಿಗೆ ಕೆಲಸಕ್ಕಾಗಿ ಅರ್ಜಿ ಸಲ್ಲಿಸಿದ 15 ದಿನಗಳೊಳಗೆ ಉದ್ಯೋಗ ನೀಡುವುದು ಕಾನೂನುಬದ್ಧ ಕರ್ತವ್ಯವಾಗಿದ್ದು, ನಿಗದಿತ ಅವಧಿಯಲ್ಲಿ ಉದ್ಯೋಗ ಒದಗಿಸಲು ಸಾಧ್ಯವಾಗದಿದ್ದರೆ ನಿರುದ್ಯೋಗ ಭತ್ಯೆ ಪಾವತಿಸುವ ಅವಕಾಶವೂ ಇದೆ ಎಂದು ತಿಳಿಸಿದ್ದಾರೆ.

ನರೇಗಾ ಯೋಜನೆಯಡಿ ಮಹಿಳೆಯರು ಮತ್ತು ಪುರುಷರಿಗೆ ಸಮಾನ ವೇತನ ನಿಗದಿಯಾಗಿದ್ದು, ಪ್ರಸ್ತುತ ದಿನಗೂಲಿ 370 ರೂ. ಇದೆ. ಕೆಲಸ ನಿರ್ವಹಿಸಿದ 15 ದಿನಗಳೊಳಗೆ ಕೂಲಿ ಮೊತ್ತವನ್ನು ನೇರವಾಗಿ ಕೂಲಿಕಾರರ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತದೆ. ಹೀಗಾಗಿ ಗ್ರಾಮೀಣ ಭಾಗದ ಜನರು ತಮ್ಮ ಊರಿನಲ್ಲೇ ಕೆಲಸ ಪಡೆದು ಜೀವನೋಪಾಯ ನಿರ್ವಹಿಸಲು ಇದು ಉತ್ತಮ ಅವಕಾಶವಾಗಿದೆ ಎಂದು ಹೇಳಿದ್ದಾರೆ.

ಹಿಂದಿನ ಸಾಲಿನ ಕ್ರಿಯಾ ಯೋಜನೆಯಲ್ಲಿ ಅನುಮೋದನೆಯಾಗಿರುವ ಹಾಗೂ ಈಗಾಗಲೇ ಪ್ರಗತಿಯಲ್ಲಿರುವ ಕಾಮಗಾರಿಗಳನ್ನು ತ್ವರಿತವಾಗಿ ಆರಂಭಿಸಿ ಕೂಲಿಕಾರರಿಗೆ ಉದ್ಯೋಗ ಕಲ್ಪಿಸುವಂತೆ ಆಯುಕ್ತಾಲಯ ಸೂಚನೆ ನೀಡಿದೆ

 ತಾಲೂಕಿನ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ಕೆರೆ ಹೂಳೆತ್ತುವಿಕೆ, ಬದು ನಿರ್ಮಾಣ, ಕೃಷಿ ಕಾಲುವೆ, ಕೃಷಿ ಹೊಂಡ, ರಸ್ತೆ ಅಭಿವೃದ್ಧಿ, ಚರಂಡಿ, ತಡೆಗೋಡೆ ನಿರ್ಮಾಣ ಸೇರಿದಂತೆ ಸಮುದಾಯ ಆಸ್ತಿಗಳ ಅಭಿವೃದ್ಧಿ ಕಾಮಗಾರಿಗಳು ಹಾಗೂ ಜಾನುವಾರು ಶೆಡ್, ವಸತಿ ನಿರ್ಮಾಣದಂತಹ ವೈಯಕ್ತಿಕ ಕಾಮಗಾರಿಗಳು ನಡೆಯುತ್ತಿವೆ.

ಜಿಲ್ಲಾ ಪಂಚಾಯಿತಿಯಿಂದ ಜೂನ್ ಅಂತ್ಯದೊಳಗೆ 41 ಸಾವಿರ ಮಾನವ ದಿನಗಳ ಸೃಜನೆ ಗುರಿ ನೀಡಲಾಗಿದ್ದು, ಇದನ್ನು ಸಾಧಿಸಲು ತಾಲೂಕು ಮಟ್ಟದಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗಿದೆ.

2025-26ನೇ ಸಾಲಿನಲ್ಲಿ ಆನ್‌ಲೈನ್ ಮೂಲಕ 2,076 ಕಾಮಗಾರಿಗಳಿಗೆ ಅನುಮೋದನೆ ದೊರೆತಿದ್ದರೂ ಅನೇಕ ಕಾಮಗಾರಿಗಳು ಇನ್ನೂ ಆರಂಭವಾಗಿಲ್ಲ. ಇದೀಗ ಅವುಗಳನ್ನು ಪ್ರಾರಂಭಿಸಿ ಹೆಚ್ಚಿನ ಸಂಖ್ಯೆಯಲ್ಲಿ ಉದ್ಯೋಗಾವಕಾಶ ಕಲ್ಪಿಸಲು ಸೂಚಿಸಲಾಗಿದೆ.

ನರೇಗಾ ಯೋಜನೆಯಡಿ ಉದ್ಯೋಗ ಪಡೆಯಲು ಅಥವಾ ಕೂಲಿ ಹಣ ಸ್ವೀಕರಿಸಲು ಯಾವುದೇ ತೊಂದರೆ ಇಲ್ಲ. ತಾಂತ್ರಿಕ ಸಮಸ್ಯೆಗಳಿದ್ದರೂ ಅವುಗಳನ್ನು ಸಕಾಲದಲ್ಲಿ ಪರಿಷ್ಕರಿಸಲು ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಆದ್ದರಿಂದ ಗ್ರಾಮೀಣ ಭಾಗದ ಕೂಲಿಕಾರರು ಸರ್ಕಾರದ ಈ ಜನಪರ ಯೋಜನೆಯ ಸಂಪೂರ್ಣ ಪ್ರಯೋಜನ ಪಡೆಯಬೇಕು ಎಂದು ರಾಜೇಶ್ ದನವಾಡಕರ್ ಮನವಿ ಮಾಡಿದ್ದಾರೆ.

ಇದೇ ವೇಳೆ, ಜುಲೈ 1ರಿಂದ ವಿಬಿ-ಜಿ ರಾಮ್-ಜಿ ಯೋಜನೆ ಜಾರಿಗೆ ಬರಲಿರುವ ಹಿನ್ನೆಲೆಯಲ್ಲಿ ನರೇಗಾ ಜಾಬ್ ಕಾರ್ಡ್ ಹೊಂದಿರುವ ಎಲ್ಲ ಕೂಲಿಕಾರರು ಜೂನ್ 30ರೊಳಗೆ ಕಡ್ಡಾಯವಾಗಿ ಇ-ಕೆವೈಸಿ ಪೂರ್ಣಗೊಳಿಸಿಕೊಳ್ಳಬೇಕು ಎಂದು ತಿಳಿಸಿದ್ದಾರೆ. ತಾಲೂಕಿನ ಹಲವೆಡೆ ನೆಟ್‌ವರ್ಕ್ ಸಮಸ್ಯೆ ಇರುವುದರಿಂದ ಸಿಬ್ಬಂದಿ ಮನೆ ಮನೆಗೆ ತೆರಳಿ ಕೆವೈಸಿ ಮಾಡುವುದು ಕಷ್ಟಕರವಾಗಿದ್ದು, ಸಾರ್ವಜನಿಕರು ಸ್ವಯಂಪ್ರೇರಿತವಾಗಿ ಗ್ರಾಮ ಪಂಚಾಯಿತಿ ಕಚೇರಿಗೆ ಭೇಟಿ ನೀಡಿ ಇ-ಕೆವೈಸಿ ಮಾಡಿಸಿಕೊಳ್ಳುವಂತೆ ಅವರು ಮನವಿ ಮಾಡಿದ್ದಾರೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad
Ad

Most Popular

error: Content is protected !!
Share