Friday, July 24, 2026
Join WhatsApp Group
HomeLocal Newsಮುರಿನಕಟ್ಟೆ ಧ್ವಂಸಕ್ಕೆ ಕಾವೇರಿದ ಭಟ್ಕಳ

ಮುರಿನಕಟ್ಟೆ ಧ್ವಂಸಕ್ಕೆ ಕಾವೇರಿದ ಭಟ್ಕಳ

ಬಿಜೆಪಿ-ಹಿಂದೂಪರ ಸಂಘಟನೆಗಳ ಬೃಹತ್ ಪ್ರತಿಭಟನೆ

ಭಟ್ಕಳ: ಮುರಿನಕಟ್ಟೆ ಧ್ವಂಸ ಪ್ರಕರಣದ ವಿರುದ್ಧ ಭಟ್ಕಳದಲ್ಲಿ ಜನಾಕ್ರೋಶ ಸ್ಫೋಟಗೊಂಡಿದ್ದು, ಬಿಜೆಪಿ ಹಾಗೂ ವಿವಿಧ ಹಿಂದೂಪರ ಸಂಘಟನೆಗಳ ನೇತೃತ್ವದಲ್ಲಿ ನಡೆದ ಬೃಹತ್ ಪ್ರತಿಭಟನೆ ಇಡೀ ನಗರವನ್ನು ಕೇಸರಿಮಯವಾಗಿಸಿದ್ದು, ರಾಜ್ಯ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಯಿತು.

ಸಾವಿರಾರು ಕಾರ್ಯಕರ್ತರು, ಸಾರ್ವಜನಿಕರು ಹಾಗೂ ಹಿಂದೂಪರ ಸಂಘಟನೆಗಳ ಸದಸ್ಯರು ಬೀದಿಗಿಳಿದು ನಡೆಸಿದ ಮೆರವಣಿಗೆ ಭಟ್ಕಳದ ರಾಜಕೀಯ ಮತ್ತು ಸಾಮಾಜಿಕ ವಲಯದಲ್ಲಿ ದೊಡ್ಡ ಚರ್ಚೆಗೆ ಕಾರಣವಾಯಿತು.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅನುಪಸ್ಥಿತಿಯಲ್ಲಿ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.‌ ಅಶೋಕ್ ಹಾಗೂ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ, ಹಿಂದೂಗಳ ಧಾರ್ಮಿಕ ನಂಬಿಕೆಗಳ ಮೇಲೆ ನಿರಂತರವಾಗಿ ದಾಳಿ ನಡೆಯುತ್ತಿದೆ ಎಂಬ ಆಕ್ರೋಶದ ಮಾತುಗಳು ಮೇಳೈಸಿದವು.

ಇಂತಹ ಪವಿತ್ರ ಶ್ರದ್ಧಾ ಕೇಂದ್ರವನ್ನು ಧ್ವಂಸಗೊಳಿಸಿರುವುದು ಕೇವಲ ಕಾನೂನುಬಾಹಿರ ಕೃತ್ಯವಲ್ಲ, ಸಮಾಜದ ಧಾರ್ಮಿಕ ಭಾವನೆಗಳಿಗೆ ನೀಡಿರುವ ನೇರ ಸವಾಲು ಎಂದು ಪ್ರತಿಭಟನಾಕಾರರು ವಾಗ್ದಾಳಿ ನಡೆಸಿದರು.

ದುಷ್ಕರ್ಮಿಗಳನ್ನು ತಕ್ಷಣ ಬಂಧಿಸಬೇಕು. ಪ್ರಕರಣವನ್ನು ಗಂಭೀರವಾಗಿ ತನಿಖೆ ನಡೆಸಬೇಕು. ಧ್ವಂಸಗೊಂಡ ಮುರಿನಕಟ್ಟೆಯನ್ನು ಅದೇ ಸ್ಥಳದಲ್ಲಿ ಮರುನಿರ್ಮಿಸಬೇಕು ಎಂದು ಮುಖಂಡರು ಸರ್ಕಾರಕ್ಕೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದರು.

ನಂತರ ಪ್ರತಿಭಟನಾಕಾರರು ಭಟ್ಕಳ ತಾಲೂಕು ಆಡಳಿತ ಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು. ಪ್ರತಿಭಟನೆಯ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ವಿರುದ್ಧವೂ ತೀವ್ರ ಆಕ್ರೋಶ ವ್ಯಕ್ತವಾಯಿತು.

ಕ್ಷೇತ್ರದಲ್ಲಿ ಉದ್ವಿಗ್ನತೆ ಹೆಚ್ಚುತ್ತಿದ್ದರೂ ಸರ್ಕಾರ ಹಾಗೂ ಜಿಲ್ಲಾಡಳಿತ ಮೌನ ವಹಿಸಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ನಗರದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಇಲಾಖೆ ಭಾರೀ ಬಂದೋಬಸ್ತ್ ಏರ್ಪಡಿಸಿತ್ತು. ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚುವರಿ ಪೊಲೀಸ್ ತುಕಡಿಗಳನ್ನು ನಿಯೋಜಿಸಲಾಗಿದ್ದು, ಹಿರಿಯ ಅಧಿಕಾರಿಗಳು ಸ್ವತಃ ನಿಗಾ ವಹಿಸಿದ್ದರು. ಭಟ್ಕಳದಲ್ಲಿ ಉದ್ವಿಗ್ನ ವಾತಾವರಣ ಮುಂದುವರಿದಿದ್ದರೂ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಈ ನಡುವೆ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ಅನುಪಸ್ಥಿತಿಯ ಬಗ್ಗೆ ವ್ಯಾಪಕ ಅಸಮಾಧಾನ ವ್ಯಕ್ತವಾಗಿದೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರನಾಗಿ, ಉಪ ಸಂಪಾದಕನಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತನಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad

Most Popular

error: Content is protected !!
Share