Monday, September 7, 2026
Join WhatsApp Group
HomeLocal Newsಸೆ.19ರ ಲೋಕ ಅದಾಲತ್‌ಗೆ ಉತ್ತರ ಕನ್ನಡ ಸಜ್ಜು

ಸೆ.19ರ ಲೋಕ ಅದಾಲತ್‌ಗೆ ಉತ್ತರ ಕನ್ನಡ ಸಜ್ಜು

ಕೆನರಾ ನೆಕ್ಸ್ಟ್‌ ನ್ಯೂಸ್‌ ಡೆಸ್ಕ್

ಕಾರವಾರ: ನ್ಯಾಯಾಲಯದ ಮೆಟ್ಟಿಲೇರಿದ ವ್ಯಾಜ್ಯವೊಂದು ತೀರ್ಪಿನವರೆಗೆ ಸಾಗುವುದು ಸಹಜ. ಆದರೆ ಅದೇ ವ್ಯಾಜ್ಯವನ್ನು ಎರಡೂ ಕಡೆಯವರ ಒಪ್ಪಿಗೆಯೊಂದಿಗೆ, ಕಡಿಮೆ ವೆಚ್ಚದಲ್ಲಿ ಮತ್ತು ತ್ವರಿತವಾಗಿ ಮುಗಿಸುವ ಅವಕಾಶವೊಂದಿದೆ. ಅಂತಹ ಅವಕಾಶವನ್ನು ಮತ್ತಷ್ಟು ಜನರಿಗೆ ತಲುಪಿಸುವ ಉದ್ದೇಶದಿಂದ ಸೆಪ್ಟೆಂಬರ್‌ 19ರಂದು ನಡೆಯಲಿರುವ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಉತ್ತರ ಕನ್ನಡ ಜಿಲ್ಲೆಯಲ್ಲಿ 7 ಸಾವಿರಕ್ಕೂ ಹೆಚ್ಚು ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥಪಡಿಸುವ ಗುರಿ ಹೊಂದಲಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ದಿವ್ಯಶ್ರೀ ಸಿ.ಎಂ. ತಿಳಿಸಿದ್ದಾರೆ.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಸ್ತುತ ಜಿಲ್ಲೆಯ ವಿವಿಧ ನ್ಯಾಯಾಲಯಗಳಲ್ಲಿ 43,113 ಪ್ರಕರಣಗಳು ಬಾಕಿ ಇವೆ. ಇವುಗಳಲ್ಲಿ ರಾಜಿಯಾಗಬಹುದಾದ ಪ್ರಕರಣಗಳನ್ನು ಗುರುತಿಸಿ, ಎರಡೂ ಕಡೆಯವರ ಒಪ್ಪಿಗೆಯೊಂದಿಗೆ ಇತ್ಯರ್ಥಕ್ಕೆ ಅವಕಾಶ ಕಲ್ಪಿಸಲಾಗುತ್ತಿದೆ. ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳಷ್ಟೇ ಅಲ್ಲದೆ, ಇನ್ನೂ ನ್ಯಾಯಾಲಯದ ಮೆಟ್ಟಿಲೇರದ ವ್ಯಾಜ್ಯ ಪೂರ್ವ ಪ್ರಕರಣಗಳನ್ನೂ ಲೋಕ ಅದಾಲತ್‌ ಮೂಲಕ ಬಗೆಹರಿಸಿಕೊಳ್ಳಬಹುದಾಗಿದೆ ಎಂದರು.

ಸಿವಿಲ್ ಮತ್ತು ರಾಜಿಯಾಗಬಹುದಾದ ಕ್ರಿಮಿನಲ್ ಪ್ರಕರಣಗಳು, ಸಾಲ ವಸೂಲಾತಿ, ಚೆಕ್‌ ಬೌನ್ಸ್‌, ಕೌಟುಂಬಿಕ ವಿವಾದ, ಅಪಘಾತ ಪರಿಹಾರ ಹಾಗೂ ಭೂಸ್ವಾಧೀನ ಪರಿಹಾರ ಸೇರಿದಂತೆ ವಿವಿಧ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಳ್ಳಲು ಅವಕಾಶವಿದೆ. ಇದಕ್ಕಾಗಿ ಪ್ರಕರಣ ನಡೆಯುತ್ತಿರುವ ನ್ಯಾಯಾಲಯಕ್ಕೆ ರಾಜಿ ಮಾಡಿಕೊಳ್ಳುವ ಇಚ್ಛೆಯನ್ನು ತಿಳಿಸುವುದರ ಜತೆಗೆ, ಅಗತ್ಯವಿದ್ದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಥವಾ ತಾಲೂಕು ಕಾನೂನು ಸೇವಾ ಸಮಿತಿಗಳನ್ನು ಸಂಪರ್ಕಿಸಿ ಮಾಹಿತಿ ಪಡೆಯಬಹುದು ಎಂದು ಅವರು ತಿಳಿಸಿದರು.

ಜುಲೈನಲ್ಲಿ ನಡೆದ ಲೋಕ ಅದಾಲತ್‌ನಲ್ಲಿ ಜಿಲ್ಲೆಯ ವಿವಿಧ ನ್ಯಾಯಾಲಯಗಳಲ್ಲಿ ಬಾಕಿ ಇದ್ದ 6,731 ಪ್ರಕರಣಗಳು ಇತ್ಯರ್ಥಗೊಂಡಿರುವುದು, ರಾಜೀ ಸಂಧಾನದ ಮೂಲಕ ವ್ಯಾಜ್ಯಗಳನ್ನು ತ್ವರಿತವಾಗಿ ಪರಿಹರಿಸಿಕೊಳ್ಳಲು ಜನರಿಂದ ಉತ್ತಮ ಸ್ಪಂದನೆ ದೊರೆಯುತ್ತಿರುವುದಕ್ಕೆ ಸಾಕ್ಷಿಯಾಗಿದೆ. ಈ ಬಾರಿ ಇನ್ನಷ್ಟು ಪ್ರಕರಣಗಳನ್ನು ಇತ್ಯರ್ಥಪಡಿಸುವ ಉದ್ದೇಶದಿಂದ ಈಗಾಗಲೇ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು, ಬ್ಯಾಂಕ್‌ಗಳು ಹಾಗೂ ವಿಮಾ ಕಂಪನಿಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅಗತ್ಯ ಸಹಕಾರ ನೀಡುವಂತೆ ಸೂಚಿಸಲಾಗಿದೆ ಎಂದರು.

ನ್ಯಾಯಾಲಯದ ಪ್ರಕರಣವೊಂದನ್ನು ಮುಂದುವರಿಸುವುದಕ್ಕಿಂತ, ಎರಡೂ ಕಡೆಯವರು ಒಪ್ಪಿಕೊಂಡು ಪರಿಹಾರ ಕಂಡುಕೊಳ್ಳುವುದು ಸಮಯ ಮತ್ತು ವೆಚ್ಚವನ್ನು ಉಳಿಸುವ ಮಾರ್ಗವಾಗಿದ್ದು, ಮಧ್ಯಸ್ಥಿಕೆ ಸಂಧಾನವೂ ಇದಕ್ಕೆ ಮತ್ತೊಂದು ಪರಿಣಾಮಕಾರಿ ವೇದಿಕೆಯಾಗಿದೆ. ಜಿಲ್ಲೆಯಲ್ಲಿ ಮೀಡಿಯೇಷನ್‌-1 ಮತ್ತು 2ರ ಮೂಲಕ ಈಗಾಗಲೇ 258 ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದ್ದು, ಪ್ರಸ್ತುತ ನಡೆಯುತ್ತಿರುವ ಮೀಡಿಯೇಷನ್‌-3ರಲ್ಲಿಯೂ ಸಾರ್ವಜನಿಕರು ಭಾಗವಹಿಸಿ ಕಡಿಮೆ ವೆಚ್ಚದಲ್ಲಿ ಹಾಗೂ ಶೀಘ್ರವಾಗಿ ತಮ್ಮ ವ್ಯಾಜ್ಯಗಳಿಗೆ ಪರಿಹಾರ ಕಂಡುಕೊಳ್ಳಬಹುದು ಎಂದು ದಿವ್ಯಶ್ರೀ ಸಿ.ಎಂ. ಮನವಿ ಮಾಡಿದರು.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad
Ad

Most Popular

error: Content is protected !!
Share