ಕಾರವಾರ: ನೀಟ್ ಪರೀಕ್ಷೆಯು ಮೇ 3ರಂದು ಕಾರವಾರದ ಸರ್ಕಾರಿ ಕಲಾ ಮತ್ತು ವಿಜ್ಞಾನ ಪದವಿ ಕಾಲೇಜಿನಲ್ಲಿ ನಡೆಯಲಿದ್ದು, ಈ ಪರೀಕ್ಷೆಯು ಅತ್ಯಂತ ಪಾರದರ್ಶಕ ಮತ್ತು ವ್ಯವಸ್ಥಿತ ರೀತಿಯಲ್ಲಿ ಹಾಗೂ ಪರೀಕ್ಷಾ ಮಾರ್ಗಸೂಚಿಗಳ ಉಲ್ಲಂಘನೆಯಾಗದಂತೆ ಕರ್ತವ್ಯ ನಿರ್ವಹಿಸುವಂತೆ ಪರೀಕ್ಷಾ ಕರ್ತವ್ಯಕ್ಕೆ ನಿಯೋಜಿಸಿರುವ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ಸೂಚನೆ ನೀಡಿದರು.
ಅವರು ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲೆಯಲ್ಲಿ ನಡೆಯುವ ನೀಟ್ ಪರೀಕ್ಷೆಗೆ 488 ವಿದ್ಯಾರ್ಥಿಗಳು ಹಾಜರಾಗಲಿದ್ದು, ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಗಳಿಗೆ ಆಸನ ವ್ಯವಸ್ಥೆ, ವಿದ್ಯುತ್, ಕುಡಿಯುವ ನೀರಿನ ವ್ಯವಸ್ಥೆ, ಶೌಚಾಲಯದಂತಹ ಮೂಲಸೌಕರ್ಯ ವ್ಯವಸ್ಥೆಗಳು ಇರುವುದನ್ನು ಪರೀಕ್ಷಾ ಕೇಂದ್ರದ ಮುಖ್ಯಸ್ಥರು ಮುಂಚಿತವಾಗಿ ಪರಿಶೀಲಿಸಿ ಖಾತ್ರಿಪಡಿಸಿಕೊಳ್ಳಬೇಕು ಎಂದರು.
ಪ್ರಶ್ನೆ ಪತ್ರಿಕೆ ಮತ್ತು ಉತ್ತರ ಪತ್ರಿಕೆ ಸಾಗಾಟದ ವಾಹನಗಳಿಗೆ ಹಾಗೂ ಎಲ್ಲಾ ಪರೀಕ್ಷಾ ಕೇಂದ್ರಗಳಿಗೆ ಪೊಲೀಸ್ ಭದ್ರತೆ ಒದಗಿಸುವಂತೆ ಪೊಲೀಸ್ ಇಲಾಖೆಗೆ ಸೂಚಿಸಿದ ಅವರು, ಎಲ್ಲಾ ಪರೀಕ್ಷಾ ಕೇಂದ್ರಗಳಿಗೆ ಮುನ್ನೆಚ್ಚರಿಕೆ ಕ್ರಮವಾಗಿ ಆರೋಗ್ಯ ಇಲಾಖೆಯಿಂದ ಸಿಬ್ಬಂದಿಗಳನ್ನು ನಿಯೋಜಿಸಬೇಕು.
ಪರೀಕ್ಷೆ ನಡೆಯುವ ದಿನದಂದು ವಿದ್ಯುತ್ ವ್ಯತ್ಯಯವಾಗದಂತೆ ಅಗತ್ಯ ಕ್ರಮ ಕೈಗೊಳ್ಳಲು ಹೆಸ್ಕಾಂ ಅಧಿಕಾರಿಗಳಿಗೆ ಮತ್ತು ಪರೀಕ್ಷಾ ದಿನದಂದು ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ಆಗಮಿಸಲು ಬಸ್ ಗಳ ವ್ಯತ್ಯಯವಾಗದಂತೆ ಮುನ್ನೆಚ್ಚರಿಕೆ ವಹಿಸುವಂತೆ ಸಾರಿಗೆ ಸಂಸ್ಥೆಯ ಅಧಿಕಾರಿಗಳಿಗೆ ಸೂಚಿಸಿದರು.
ಪರೀಕ್ಷಾ ಕರ್ತವ್ಯಕ್ಕೆ ನಿಯೋಜಿಸಿರುವ ಎಲ್ಲಾ ಅಧಿಕಾರಿಗಳು ತಮಗೆ ವಹಿಸಿರುವ ಜವಾಬ್ದಾರಿಯಲ್ಲಿ ಯಾವುದೇ ಲೋಪಗಳು ಬಾರದಂತೆ, ಪರಸ್ಪರ ಸಮನ್ವಯದಿಂದ ಕರ್ತವ್ಯ ನಿರ್ವಹಿಸುವಂತೆ ತಿಳಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ, ಸರ್ಕಾರಿ ಕಲಾ ಮತ್ತು ವಿಜ್ಞಾನ ಪದವಿ ಕಾಲೇಜಿನ ಪ್ರಾಂಶುಪಾಲೆ ಗೀತಾ ವಾಲೀಕರ್ , ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಸತೀಶ್ ನಾಯ್ಕ ಹಾಗೂ ಪರೀಕ್ಷಾ ಕರ್ತವ್ಯಕ್ಕೆ ನಿಯೋಜಿಸಿರುವ ಎಲ್ಲಾ ಅಧಿಕಾರಿಗಳು ಇದ್ದರು.