Friday, July 24, 2026
Join WhatsApp Group
HomeUncategorizedಸೌಲಭ್ಯಗಳ ಸದ್ಬಳಕೆಯೊಂದಿಗೆ ಉನ್ನತ ಸಾಧನೆ ಮಾಡಿ

ಸೌಲಭ್ಯಗಳ ಸದ್ಬಳಕೆಯೊಂದಿಗೆ ಉನ್ನತ ಸಾಧನೆ ಮಾಡಿ

ಸರ್ಕಾರಿ ಪಿಯು ಕಾಲೇಜಿಗೆ ನೂತನ ಸಭಾಭವನ ಲೋಕಾರ್ಪಣೆಗೊಳಿಸಿದ ಶಾಸಕ ಶಿವರಾಮ ಹೆಬ್ಬಾರ್

ಬನವಾಸಿ: ಗುಣಮಟ್ಟದ ಶೈಕ್ಷಣಿಕ ಮೂಲಸೌಕರ್ಯಗಳು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಪೂರಕವಾಗಿದ್ದು, ಅವುಗಳ ಸದ್ಬಳಕೆ ಮಾಡಿಕೊಂಡು ಉನ್ನತ ಸಾಧನೆ ಮಾಡಬೇಕು ಎಂದು ಶಾಸಕ ಶಿವರಾಮ ಹೆಬ್ಬಾರ್ ಹೇಳಿದರು.

ಬನವಾಸಿಯ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಮುಖ್ಯಮಂತ್ರಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ಯೋಜನೆಯಡಿ ನಿರ್ಮಿಸಲಾದ ನೂತನ ಸಭಾಭವನವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದ್ದು, ವಿದ್ಯಾರ್ಥಿಗಳಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸಲು ನಿರಂತರ ಕ್ರಮ ಕೈಗೊಳ್ಳಲಾಗುತ್ತಿದೆ. ಗ್ರಾಮೀಣ ಪ್ರದೇಶದ ಪ್ರತಿಭೆಗಳು ಅವಕಾಶದ ಕೊರತೆಯಿಂದ ಹಿಂದುಳಿಯಬಾರದು ಎಂಬುದು ಸರ್ಕಾರದ ಉದ್ದೇಶವಾಗಿದೆ ಎಂದು ಹೇಳಿದರು.

ಹೆಣ್ಣು ಮಕ್ಕಳ ಬದುಕಿನಲ್ಲಿ ಶಿಕ್ಷಣದ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ದೇಶದ ಪ್ರತಿಯೊಬ್ಬ ವಿದ್ಯಾರ್ಥಿಯೂ ವಿಶ್ವಮಟ್ಟದಲ್ಲಿ ಗುರುತಿಸಿಕೊಳ್ಳುವಂತಾಗಬೇಕು ಎಂಬ ಆಶಯದಿಂದ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ ಎಂದರು.

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಕುರಿತು ಮಾತನಾಡಿದ ಅವರು, 18 ವರ್ಷ ಪೂರ್ಣಗೊಂಡ ಪ್ರತಿಯೊಬ್ಬರೂ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಮಾಡಿಕೊಳ್ಳಬೇಕು. ಈಗಾಗಲೇ ಬಿಎಲ್ಒಗಳು ಮನೆಮನೆಗೆ ಎನ್ಯುಮರೇಷನ್ ಫಾರ್ಮ್ ವಿತರಿಸಿದ್ದು, ವಿದ್ಯಾರ್ಥಿಗಳು ತಮ್ಮ ಪೋಷಕರಿಗೆ ಫಾರ್ಮ್ ಭರ್ತಿ ಮಾಡಿ ಸಹಿ ಹಾಕಿ ಕಡ್ಡಾಯವಾಗಿ ಹಿಂದಿರುಗಿಸುವಂತೆ ತಿಳಿಸಬೇಕು ಎಂದು ಮನವಿ ಮಾಡಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್. ನಾಯ್ಕ್ ಹಾಗೂ ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಸಿದ್ದಲಿಂಗಪ್ಪ ಉಗ್ರಾಣ ಮಾತನಾಡಿದರು.

ಕಾರ್ಯಕ್ರಮದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 10ನೇ ಸ್ಥಾನ ಪಡೆದ ವಿದ್ಯಾರ್ಥಿನಿ ಶ್ರೇಯಾ ಸೀತಾರಾಮ ರಾವ್, ನಿರ್ಮಿತಿ ಕೇಂದ್ರದ ಸಹಾಯಕ ಅಭಿಯಂತರ ಕುಮಾರ್ ಶೆಟ್ಟಿ, ಗುತ್ತಿಗೆದಾರ ಗುಣಶೇಖರ ಪಿಳ್ಳೈ ಹಾಗೂ ನಿವೃತ್ತ ಉಪನ್ಯಾಸಕ ಅಶೋಕ ಶೆಟ್ಟಿ ಅವರನ್ನು ಕಾಲೇಜು ಅಭಿವೃದ್ಧಿ ಸಮಿತಿಯಿಂದ ಸನ್ಮಾನಿಸಲಾಯಿತು.

ಕಾಲೇಜಿನ ಪ್ರಾಚಾರ್ಯ ದಿನೇಶ್, ಅಭಿವೃದ್ಧಿ ಸಮಿತಿಯ ಸದಸ್ಯರಾದ ಪ್ರಕಾಶ ಬಂಗ್ಲೆ, ಶಂಕರ ಗೌಡ, ಅಶೋಕ ನಾಯ್ಕ್, ಮಹಮ್ಮದ್ ಅಸ್ಲಾಂ, ಪೂರ್ಣಿಮಾ ಪಿಳ್ಳೈ, ಶ್ರೀಲತಾ ಕಾಳೇರಮನೆ, ಉಪ ತಹಶೀಲ್ದಾರ ಮಂಜುಳಾ ನಾಯ್ಕ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹನುಮಂತ ಛಲವಾದಿ, ಪ್ರಮುಖರಾದ ದ್ಯಾಮಣ್ಣ ದೊಡ್ಮನಿ, ಗಣಪತಿ ನಾಯ್ಕ್, ಬಸವರಾಜ ದೊಡ್ಮನಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಉಪನ್ಯಾಸಕಿ ಪ್ರಭಾವತಿ ಹೆಗಡೆ ಕಾರ್ಯಕ್ರಮ ನಿರೂಪಿಸಿದರು. ಚೈತ್ರಾ ವಿನಯ ಸ್ವಾಗತಿಸಿ, ಶೋಭಾ ಮೊಗೇರ ವಂದಿಸಿದರು.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರನಾಗಿ, ಉಪ ಸಂಪಾದಕನಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತನಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad

Most Popular

error: Content is protected !!
Share