Join WhatsApp Group
Ad
Home Local News ಒಂದು ʻNoʼ ನಿಮ್ಮ ಬದುಕನ್ನು ಉಳಿಸಬಹುದು

ಒಂದು ʻNoʼ ನಿಮ್ಮ ಬದುಕನ್ನು ಉಳಿಸಬಹುದು

0
3

ಯಲ್ಲಾಪುರದಲ್ಲಿ ʻಆಪರೇಷನ್ RISEʼಗೆ ಚಾಲನೆ ನೀಡಿದ ಶಾಸಕ ಶಿವರಾಮ ಹೆಬ್ಬಾರ್

ಯಲ್ಲಾಪುರ: ಇಡೀ ರಾಜ್ಯವನ್ನು ಡ್ರಗ್ಸ್‌ ಮುಕ್ತವಾಗಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಪೊಲೀಸ್, ಆರೋಗ್ಯ ಹಾಗೂ ಶಿಕ್ಷಣ ಇಲಾಖೆಗಳ ಸಹಯೋಗದಲ್ಲಿ ‘ಡ್ರಗ್ಸ್ ವ್ಯಸನ ಮುಕ್ತ – ಆಪರೇಷನ್ RISE’ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ ಎಂದು ಶಾಸಕ ಶಿವರಾಮ ಹೆಬ್ಬಾರ್ ಹೇಳಿದರು.

ಪಟ್ಟಣದ ಕಾರ್ಮಿಕ ಭವನದಲ್ಲಿ ಪೊಲೀಸ್ ಇಲಾಖೆ ಆಯೋಜಿಸಿದ್ದ ‘ಡ್ರಗ್ಸ್ ವ್ಯಸನ ಮುಕ್ತ – ಆಪರೇಷನ್ RISE’ ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಯಲ್ಲಾಪುರ ಉಳಿದ ನಗರಗಳಷ್ಟು ಮುಂದುವರೆದಿಲ್ಲ. ಆದರೆ ಇಲ್ಲಿಯೂ ಯುವಕರು ದುಶ್ಚಟಗಳಿಗೆ ದಾಸರಾಗಿ ಪಾಲಕರ ಕನಸುಗಳನ್ನು ನುಚ್ಚುನೂರು ಮಾಡುತ್ತಿರುವುದು ಕಳವಳಕಾರಿ ಬೆಳವಣಿಗೆಯಾಗಿದೆ. ಮಕ್ಕಳ ಭವಿಷ್ಯ ರೂಪುಗೊಳ್ಳಬೇಕಾದ ಸಮಯದಲ್ಲಿ ಕೆಲವರು ತಮ್ಮ ಬದುಕನ್ನೇ ಹಾಳು ಮಾಡಿಕೊಳ್ಳುತ್ತಿರುವುದು ದುಃಖದ ಸಂಗತಿ ಎಂದರು.

Ad

ಒಳ್ಳೆಯ ಮಾರ್ಗದಲ್ಲಿ ನಡೆದರೆ ಮಾತ್ರ ಗುರಿ ಸಾಧಿಸಲು ಸಾಧ್ಯ. ಯುವಕರು ಚೆನ್ನಾಗಿ ವಿದ್ಯಾಭ್ಯಾಸ ಮಾಡಿ ಜೀವನದಲ್ಲಿ ಉನ್ನತ ಗುರಿ ಸಾಧಿಸಬೇಕು. ನಮ್ಮ ಕ್ಷೇತ್ರದಲ್ಲಿಯೂ ಅಫೀಮಿನಂತಹ ದುಶ್ಚಟಗಳ ಹಾವಳಿ ಕಂಡುಬರುತ್ತಿದೆ. ಇಂತಹ ವ್ಯಸನಗಳನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಿ ವ್ಯಸನಮುಕ್ತ ಸಮಾಜ ಕಟ್ಟುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಶಾಸಕರು ಹೇಳಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಆರ್.ಡಿ. ಜನಾರ್ಧನ, ಡ್ರಗ್ಸ್ ಮುಕ್ತ ಸಮಾಜ ನಿರ್ಮಾಣದ ಉದ್ದೇಶದಿಂದ ರಾಜ್ಯಾದ್ಯಂತ ಈ ಅಭಿಯಾನ ನಡೆಯುತ್ತಿದೆ. ವಿದ್ಯಾರ್ಥಿಗಳನ್ನೇ ವಿಶೇಷವಾಗಿ ಆಹ್ವಾನಿಸಿರುವುದಕ್ಕೂ ಉದ್ದೇಶವಿದೆ. ಇಲ್ಲಿ ಭಾಗವಹಿಸಿರುವ ಪ್ರತಿಯೊಬ್ಬರೂ ತಮ್ಮ ತಮ್ಮ ಊರು, ಕಾಲೇಜು ಹಾಗೂ ಪರಿಸರದಲ್ಲಿ ಮಾದಕ ದ್ರವ್ಯಗಳ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಬೇಕು ಎಂದರು.

ಒಂದು ಸಮಾಜ ಬಲಿಷ್ಠವಾಗಿ ಬೆಳೆಯಬೇಕಾದರೆ ಯುವಜನತೆ ಮಾನಸಿಕವಾಗಿ ಸಶಕ್ತರಾಗಿರಬೇಕು. ಗುರಿ ಮುಟ್ಟುವ ಕನಸು ಕಾಣಲು ದೃಢ ಮನಸ್ಸು ಅಗತ್ಯ. ಮಾದಕ ವ್ಯಸನಗಳನ್ನು ತ್ಯಜಿಸಿ ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳಬೇಕು. ಸಮಾಜದಲ್ಲಿ ಎಲ್ಲ ವರ್ಗದವರಲ್ಲೂ ವ್ಯಸನಗಳಿರುವುದರಿಂದ ಅದರ ಮೂಲ ಕಾರಣಗಳನ್ನು ಅರಿತು ಪರಿಹಾರ ಕಂಡುಕೊಳ್ಳುವ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟರು.

ತಹಶೀಲ್ದಾರ ಎಂ.ಆರ್. ಕುಲಕರ್ಣಿ ಮಾತನಾಡಿ, ಮಹಾನಗರಗಳಲ್ಲಿ ಯುವಜನತೆ ಮಾದಕ ವ್ಯಸನಗಳಿಗೆ ಹೆಚ್ಚು ಬಲಿಯಾಗುತ್ತಿದ್ದು, ಜೀವನದ ದಿಕ್ಕು ತಪ್ಪಿಸುತ್ತಿದ್ದಾರೆ. ಡ್ರಗ್ಸ್ ಎದುರಾದಾಗ “No” ಎನ್ನುವ ಒಂದು ಕ್ಷಣದ ನಿರ್ಧಾರವೇ ಜೀವನವನ್ನು ಸುರಕ್ಷಿತವಾಗಿರಿಸುತ್ತದೆ. ಮಾದಕ ದ್ರವ್ಯಗಳ ವಿರುದ್ಧದ ಹೋರಾಟ ಕೇವಲ ಪೊಲೀಸ್ ಇಲಾಖೆಯ ಕೆಲಸವಲ್ಲ. ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದೆ. ಒಬ್ಬ ವ್ಯಕ್ತಿಯ ವ್ಯಸನ ಮೊದಲು ಒಂದು ಕುಟುಂಬವನ್ನು, ನಂತರ ಇಡೀ ಸಮಾಜವನ್ನು ಹಾಳು ಮಾಡುತ್ತದೆ ಎಂದು ಹೇಳಿದರು.

ತಾಲೂಕು ವೈದ್ಯಾಧಿಕಾರಿ ಡಾ. ನರೇಂದ್ರ ಪವಾರ್ ಮಾದಕ ವ್ಯಸನಗಳ ದುಷ್ಪರಿಣಾಮಗಳನ್ನು ವಿವರಿಸಿ, ಕ್ಷಣಿಕ ಸುಖಕ್ಕಾಗಿ ಯುವಜನತೆ ತಮ್ಮ ಭವಿಷ್ಯವನ್ನೇ ಹಾಳು ಮಾಡಿಕೊಳ್ಳುತ್ತಿದ್ದಾರೆ. ಕರ್ನಾಟಕದಲ್ಲಿಯೇ ಪ್ರತಿವರ್ಷ ಸುಮಾರು 10 ಸಾವಿರ ಮಂದಿ ವ್ಯಸನದ ದುಷ್ಪರಿಣಾಮಗಳಿಂದ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಯಾವುದೇ ಕಾರಣಕ್ಕೂ ಆತ್ಮಸ್ಥೈರ್ಯ ಕಳೆದುಕೊಳ್ಳದೆ ಆರೋಗ್ಯಕರ ಬದುಕಿನತ್ತ ಹೆಜ್ಜೆ ಇಡಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮಕ್ಕೂ ಮುನ್ನ ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಿಂದ ಡ್ರಗ್ಸ್ ವಿರೋಧಿ ಜಾಗೃತಿ ಜಾಥಾಕ್ಕೆ ಚಾಲನೆ ನೀಡಲಾಯಿತು. ನೂರಾರು ವಿದ್ಯಾರ್ಥಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿದ ಜಾಥಾ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಮಾದಕ ದ್ರವ್ಯಗಳ ದುಷ್ಪರಿಣಾಮಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಿತು.

ಇದೇ ವೇಳೆ ಪದವಿ ಕಾಲೇಜಿನ ವಿದ್ಯಾರ್ಥಿಗಳು ಮಾದಕ ವ್ಯಸನದ ದುಷ್ಪರಿಣಾಮಗಳನ್ನು ಬಿಂಬಿಸುವ ಕಿರು ನಾಟಕ ಪ್ರದರ್ಶಿಸಿ ಗಮನ ಸೆಳೆದರು.

ಪಿಎಸ್ಐ ರಾಜಶೇಖರ್ ವಂದಲಿ ಸ್ವಾಗತಿಸಿದರು. ಸಿಬ್ಬಂದಿ ಮಹಾಂತೇಶ ಕಡಪಟ್ಟಿ ಸ್ವಾಗತ ಗೀತೆ ಹಾಡಿದರು. ಮಹಿಳಾ ಪೊಲೀಸ್ ಕಾನ್ಸ್‌ಟೇಬಲ್ ರೇಖಾ ಎಂ.ಎಸ್. ಕಾರ್ಯಕ್ರಮ ನಿರೂಪಿಸಿದರು. ಪಿಎಸ್ಐ ಮಹಾವೀರ ಕಾಂಬ್ಳೆ ವಂದಿಸಿದರು.

ಕಾರ್ಯಕ್ರಮದ ವಿಶೇಷ ಆಕರ್ಷಣೆಯಾಗಿ ಮಾದಕ ದ್ರವ್ಯ ವಿರೋಧಿ ಸಂದೇಶವುಳ್ಳ Selfie Stand ಸ್ಥಾಪಿಸಲಾಗಿತ್ತು. ವಿದ್ಯಾರ್ಥಿಗಳು ಹಾಗೂ ನಾಗರಿಕರು ಉತ್ಸಾಹದಿಂದ ಸೆಲ್ಫಿ ತೆಗೆದುಕೊಂಡು ಅಭಿಯಾನಕ್ಕೆ ಬೆಂಬಲ ಸೂಚಿಸಿದರು. ಜೊತೆಗೆ ‘ಮಾದಕ ಮುಕ್ತ ಸಮಾಜ ನಿರ್ಮಾಣ’ ಸಂಕಲ್ಪದ ಸಹಿ ಸಂಗ್ರಹಣಾ ಫಲಕದಲ್ಲಿ ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ವಿದ್ಯಾರ್ಥಿಗಳು ಸಹಿ ಹಾಕಿ ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಬದ್ಧತೆ ವ್ಯಕ್ತಪಡಿಸಿದರು.

Previous articleಚರ್ಮಕಾರರ ಸಂಕಷ್ಟಕ್ಕೆ ಸ್ಪಂದಿಸಿದ ರೂಪಾಲಿ ನಾಯ್ಕ 
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರನಾಗಿ, ಉಪ ಸಂಪಾದಕನಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತನಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

NO COMMENTS

LEAVE A REPLY

Please enter your comment!
Please enter your name here

error: Content is protected !!