Sunday, September 6, 2026
Join WhatsApp Group
HomeLocal Newsಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಪಾರದರ್ಶಕವಾಗಿರಲಿ: ಡಿಸಿ

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಪಾರದರ್ಶಕವಾಗಿರಲಿ: ಡಿಸಿ

ಕಾರವಾರ: ಸೆ.6ರಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ನಡೆಯಲಿರುವ ಪೊಲೀಸ್ ಕಾನ್ಸ್ಟೇಬಲ್ (ಸಿಎಆರ್/ಡಿಎಆರ್) ಹುದ್ದೆಗಳ ನೇರ ನೇಮಕಾತಿ ಪರೀಕ್ಷೆಯನ್ನು ಅತ್ಯಂತ ಪಾರದರ್ಶಕವಾಗಿ ಹಾಗೂ ಸುವ್ಯವಸ್ಥಿತವಾಗಿ ನಡೆಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಅಧಿಕಾರಿಗಳಿಗೆ ಸೂಚಿಸಿದರು.

ಗುರುವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಕಾರವಾರದ 4 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಒಟ್ಟು 1,309 ಅಭ್ಯರ್ಥಿಗಳು ಹಾಜರಾಗಲಿದ್ದಾರೆ. ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಅಳವಡಿಸುವುದು, ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ವೆಬ್‌ಕಾಸ್ಟಿಂಗ್ ವೀಕ್ಷಣೆಗೆ ವ್ಯವಸ್ಥೆ ಮಾಡುವುದು ಹಾಗೂ ಪ್ರಶ್ನೆಪತ್ರಿಕೆ ಮತ್ತು ಉತ್ತರ ಪತ್ರಿಕೆಗಳ ಸಾಗಾಟ ವಾಹನಗಳಿಗೆ ಸೂಕ್ತ ಪೊಲೀಸ್ ಭದ್ರತೆ ಒದಗಿಸುವಂತೆ ಸೂಚಿಸಿದರು.

ಅಭ್ಯರ್ಥಿಗಳಿಗೆ ಪರೀಕ್ಷಾ ಕೇಂದ್ರಗಳಲ್ಲಿ ಕುಡಿಯುವ ನೀರು ಮತ್ತು ಶೌಚಾಲಯದ ವ್ಯವಸ್ಥೆ ಕಲ್ಪಿಸಬೇಕು. ಪರೀಕ್ಷಾ ದಿನದಂದು ಅಭ್ಯರ್ಥಿಗಳಿಗೆ ಬಸ್‌ಗಳ ಕೊರತೆಯಾಗದಂತೆ ಹಾಗೂ ಪರೀಕ್ಷಾ ಕೇಂದ್ರಗಳ ಸಮೀಪ ಬಸ್‌ಗಳ ನಿಲುಗಡೆಗೆ ವ್ಯವಸ್ಥೆ ಮಾಡುವಂತೆ ಸಾರಿಗೆ ಸಂಸ್ಥೆಯ ಅಧಿಕಾರಿಗಳಿಗೆ ತಿಳಿಸಿದರು. ಪರೀಕ್ಷಾ ಅವಧಿಯಲ್ಲಿ ವಿದ್ಯುತ್ ವ್ಯತ್ಯಯವಾಗದಂತೆ ಹೆಸ್ಕಾಂ ಅಧಿಕಾರಿಗಳು ಮುನ್ನೆಚ್ಚರಿಕೆ ವಹಿಸಬೇಕು ಎಂದರು.

ಪರೀಕ್ಷಾ ಸಮಯದಲ್ಲಿ ಯಾವುದೇ ಅನಗತ್ಯ ಗೊಂದಲಕ್ಕೆ ಅವಕಾಶ ನೀಡಬಾರದು. ಪರೀಕ್ಷಾ ಕೇಂದ್ರಗಳಿಗೆ ನಿಯೋಜಿಸಿರುವ ವೀಕ್ಷಕರು ಹಾಗೂ ಮೇಲ್ವಿಚಾರಕರು ತಮ್ಮ ಜವಾಬ್ದಾರಿಯನ್ನು ಅರಿತು ಕರ್ತವ್ಯ ನಿರ್ವಹಿಸಬೇಕು ಎಂದು ಸೂಚಿಸಿದರು.

ಅಭ್ಯರ್ಥಿಗಳು ಹಾಗೂ ಪರೀಕ್ಷಾ ಕಾರ್ಯಕ್ಕೆ ನಿಯೋಜಿತ ಸಿಬ್ಬಂದಿ ಹೊರತುಪಡಿಸಿ ಬೇರೆ ಯಾರಿಗೂ ಪರೀಕ್ಷಾ ಕೇಂದ್ರದೊಳಗೆ ಪ್ರವೇಶವಿರುವುದಿಲ್ಲ. ಮಾಧ್ಯಮಗಳಿಗೂ ಕೇಂದ್ರದ ಒಳಗೆ ಪ್ರವೇಶಕ್ಕೆ ಅವಕಾಶವಿಲ್ಲ. ಮೊಬೈಲ್ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಅಭ್ಯರ್ಥಿಗಳು ಸೂಕ್ತ ಗುರುತಿನ ಚೀಟಿ ಹೊಂದಿರಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್., ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ, ಉಪ ವಿಭಾಗಾಧಿಕಾರಿ ಶಾಲಂ ಹುಸೇನ್, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಸತೀಶ್ ನಾಯ್ಕ ಸೇರಿದಂತೆ ಪರೀಕ್ಷಾ ಕರ್ತವ್ಯಕ್ಕೆ ನಿಯೋಜಿತ ಅಧಿಕಾರಿಗಳು ಉಪಸ್ಥಿತರಿದ್ದರು.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad
Ad

Most Popular

error: Content is protected !!
Share