ಬಾಕಿ ಅರ್ಜಿಗಳಿಗೂ ವೇಗ ನೀಡಲು ಜಿಲ್ಲಾಧಿಕಾರಿ ಸೂಚನೆ
ಕಾರವಾರ: ಜಿಲ್ಲೆಯಾದ್ಯಂತ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸುವ ಉದ್ದೇಶದಿಂದ ಸೆಪ್ಟೆಂಬರ್ 5ರಂದು ನಡೆದ ಮೊದಲನೇ ಪ್ರಜಾಸೇವೆ ಆಂದೋಲನ ಸಭೆಯಲ್ಲಿ ಸ್ವೀಕರಿಸಲಾಗಿದ್ದ 1641 ಅರ್ಜಿಗಳ ಪೈಕಿ ಈವರೆಗೆ 1163 ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ. ಬಾಕಿ ಉಳಿದಿರುವ 478 ಅರ್ಜಿಗಳಲ್ಲಿಯೂ ಹೆಚ್ಚಿನ ಸಂಖ್ಯೆಯ ಅರ್ಜಿಗಳನ್ನು ಇನ್ನೆರಡು ದಿನಗಳಲ್ಲಿ ವಿಲೇವಾರಿ ಮಾಡುವಂತೆ ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ ಸಂಬಂಧಪಟ್ಟ ಇಲಾಖಾಧಿಕಾರಿಗಳಿಗೆ ಸೂಚಿಸಿದರು.
ಬುಧವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪ್ರಜಾಸೇವೆ ಆಂದೋಲನ ಸಭೆಯಲ್ಲಿ ಸ್ವೀಕರಿಸಲಾದ ಅರ್ಜಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸಾರ್ವಜನಿಕರು ಸಲ್ಲಿಸಿರುವ ಪ್ರತಿಯೊಂದು ಅರ್ಜಿಯನ್ನೂ ಗಂಭೀರವಾಗಿ ಪರಿಗಣಿಸಬೇಕು. ಅರ್ಜಿಗೆ ಸಂಬಂಧಿಸಿದಂತೆ ಕ್ರಮ ಕೈಗೊಂಡ ಬಳಿಕ ಅದರ ವಿವರವನ್ನು ಅರ್ಜಿದಾರರಿಗೆ ತಪ್ಪದೇ ಹಿಂಬರಹದ ಮೂಲಕ ತಿಳಿಸಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.
ಅರ್ಜಿಯಲ್ಲಿ ಉಲ್ಲೇಖಿಸಿರುವ ಕಾಮಗಾರಿಗೆ ಕೇಂದ್ರ ಕಚೇರಿಯಿಂದ ಹೆಚ್ಚಿನ ಅನುದಾನ ಕೋರಿದ್ದರೆ, ಪ್ರಸ್ತಾವನೆ ಸಲ್ಲಿಸಿದ್ದರೆ ಅಥವಾ ಮುಂದಿನ ಕ್ರಿಯಾ ಯೋಜನೆಯಲ್ಲಿ ಕಾಮಗಾರಿಯನ್ನು ಸೇರ್ಪಡೆ ಮಾಡಿಕೊಂಡಿದ್ದರೆ, ಅದರ ದಾಖಲೆ ಅಥವಾ ಮಾಹಿತಿಯನ್ನು ಅರ್ಜಿದಾರರಿಗೆ ನೀಡಬೇಕು. ಕೇವಲ ಹಿಂಬರಹ ನೀಡುವುದಕ್ಕಿಂತ, ಅರ್ಜಿಯ ಕುರಿತು ಕೈಗೊಂಡಿರುವ ನೈಜ ಕ್ರಮದ ವಿವರವನ್ನು ಸಾರ್ವಜನಿಕರಿಗೆ ತಿಳಿಸುವುದು ಮುಖ್ಯ ಎಂದು ಅವರು ಹೇಳಿದರು.
ಪ್ರಜಾಸೇವೆ ಆಂದೋಲನದ ಮುಂದಿನ ಸಭೆ ನಡೆಯುವ ಸ್ಥಳದಲ್ಲಿ ಆಧಾರ್ ನೋಂದಣಿ ಕೇಂದ್ರ ಹಾಗೂ ಆಹಾರ ಇಲಾಖೆಯ ಇ-ಕೆವೈಸಿ ಕೇಂದ್ರಗಳನ್ನು ತೆರೆಯುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚಿಸಿದರು.
ಸೆಪ್ಟೆಂಬರ್ 19ರಂದು ಕುಮಟಾ ತಾಲೂಕಿನ ದೀವಗಿಯ ಹಾಲಕ್ಕಿ ಒಕ್ಕಲಿಗರ ಸಭಾಭವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಪ್ರಜಾಸೇವೆ ಆಂದೋಲನ ಸಭೆ ನಡೆಯಲಿದೆ. ಸಭೆಗೆ ಎಲ್ಲ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಕುಮಟಾ ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಹಾಜರಾಗಬೇಕು ಎಂದು ಅವರು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ದಿಲೀಶ್ ಶಶಿ, ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.