Friday, July 24, 2026
Join WhatsApp Group
HomeStateಪ್ರೀ ವೆಡ್ಡಿಂಗ್ ಫೋಟೋಶೂಟ್ ವೇಳೆ ಹಲ್ಲೆ: 7 ಮಂದಿ ಬಂಧನ

ಪ್ರೀ ವೆಡ್ಡಿಂಗ್ ಫೋಟೋಶೂಟ್ ವೇಳೆ ಹಲ್ಲೆ: 7 ಮಂದಿ ಬಂಧನ

ಹಾಸನ: ಜಿಲ್ಲೆಯ ಸಕಲೇಶಪುರ ತಾಲೂಕಿನ ದೇವಾಲದಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮರಗುಂದ ಗ್ರಾಮದ ಬೆಟ್ಟದ ಬೈರವೇಶ್ವರ ದೇವಾಲಯದ ಆವರಣದಲ್ಲಿ ಪ್ರೀ ವೆಡ್ಡಿಂಗ್ ಫೋಟೋಶೂಟ್‌ಗೆ ತೆರಳಿದ್ದ ಛಾಯಾಗ್ರಾಹಕರ ತಂಡದ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 7 ಮಂದಿಯನ್ನು ಬಂಧಿಸಿದ್ದಾರೆ.

ದೇವಾಲಯದ ಆವರಣದಲ್ಲಿ ಫೋಟೋಶೂಟ್ ನಡೆಯುತ್ತಿದ್ದ ವೇಳೆ ಸ್ಥಳೀಯರು ಅಡ್ಡಿಪಡಿಸಿದ್ದು, ಈ ವೇಳೆ ವಾಗ್ವಾದವು ಹಲ್ಲೆಗೆ ತಿರುಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಛಾಯಾಗ್ರಾಹಕ ಯಶ್ ಹಾಗೂ ಅವರ ತಂಡದ ಮೇಲೆ ಸ್ಥಳೀಯರ ಗುಂಪು ಹಲ್ಲೆ ನಡೆಸಿದ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಸಹೋದ್ಯೋಗಿಯ ಮೇಲೆ ಹಲ್ಲೆ ನಡೆದಿರುವುದಾಗಿ ಹಾಸನದ ಕುವೆಂಪು ನಗರ ನಿವಾಸಿ ನವೀನ್ ನಂದನ್ ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ಈ ದೂರಿನ ಆಧಾರದ ಮೇಲೆ ಪೊಲೀಸರು ಸ್ಥಳೀಯರಾದ ಪ್ರಶಾಂತ್ ಬೆಟ್ಟಗೆರೆ ಹಾಗೂ ಅಕ್ಷಯ್ ಮಕ್ಕಿನಗದ್ದೆ ಸೇರಿದಂತೆ ಹಲವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ಘಟನೆಯನ್ನು ಖಂಡಿಸಿ ಆರೋಪಿಗಳನ್ನು ಬಂಧಿಸುವಂತೆ ಒತ್ತಾಯಿಸಿ ಛಾಯಾಗ್ರಾಹಕರ ಕುಟುಂಬ ಸದಸ್ಯರು ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದರು. ಈ ವೇಳೆ ಗ್ರಾಮಸ್ಥರು ಮತ್ತು ದೂರುದಾರರ ನಡುವೆ ವಾಗ್ವಾದವೂ ನಡೆಯಿತು.

ಇದಕ್ಕೆ ಪ್ರತಿಕ್ರಿಯಿಸಿದ ಕೆಲ ಗ್ರಾಮಸ್ಥರು, ವೈರಲ್ ಆಗಿರುವ ವಿಡಿಯೋದಲ್ಲಿ ಕಾಣಿಸುವುದು ಸಂಪೂರ್ಣ ಸತ್ಯವಲ್ಲ ಎಂದು ಹೇಳಿ, “ಫೋಟೋಗ್ರಾಫರ್ ಸ್ಥಳೀಯರೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾರೆ” ಎಂದು ಪ್ರತ್ಯಾರೋಪ ಮಾಡಿದ್ದಾರೆ. ಪ್ರಕರಣದ ಕುರಿತು ಪೊಲೀಸರು ಮುಂದಿನ ತನಿಖೆ ಮುಂದುವರಿಸಿದ್ದಾರೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರನಾಗಿ, ಉಪ ಸಂಪಾದಕನಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತನಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad

Most Popular

error: Content is protected !!
Share