ಕಾರವಾರ: ಜಿಲ್ಲೆಯಲ್ಲಿ ಈ ಬಾರಿ ಶೇ.24ರಷ್ಟು ಮಳೆಯ ಕೊರತೆ ದಾಖಲಾಗಿರುವ ಹಿನ್ನೆಲೆಯಲ್ಲಿ ರೈತರು ಹೆಚ್ಚು ನೀರು ಬೇಕಾಗುವ ಬೆಳೆಗಳ ಬದಲು ಕಡಿಮೆ ಅವಧಿಯಲ್ಲಿ ಇಳುವರಿ ನೀಡುವ ಬೆಳೆಗಳನ್ನು ಬೆಳೆಯಲು ಉತ್ತೇಜಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸುಷ್ಮಾ ಗೋಡಬೋಲೆ ಕೃಷಿ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿ.ಪಂ ಸಭಾಂಗಣದಲ್ಲಿ ಶುಕ್ರವಾರ ನಡೆದ ಬರ ಪರಿಸ್ಥಿತಿ ನಿರ್ವಹಣೆ ಹಾಗೂ ಪೂರ್ವಸಿದ್ಧತೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕಡಿಮೆ ನೀರಿನಲ್ಲಿ ಬೆಳೆಯಬಹುದಾದ ಬೆಳೆಗಳ ಬೀಜ ಹಾಗೂ ರಸಗೊಬ್ಬರಗಳ ಕೊರತೆ ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸುವಂತೆ ನಿರ್ದೇಶನ ನೀಡಿದರು.
ಮುಂಡಗೋಡು, ಹಳಿಯಾಳ ಹಾಗೂ ಯಲ್ಲಾಪುರ ಭಾಗಗಳಲ್ಲಿ ಕೃಷಿ ಹೊಂಡಗಳ ನಿರ್ಮಾಣ, ಬಾವಿ ಹಾಗೂ ಕೊಳವೆಬಾವಿಗಳಿಗೆ ಅಂತರ್ಜಲ ಮರುಪೂರಣ ವ್ಯವಸ್ಥೆ ಕಲ್ಪಿಸುವ ಮೂಲಕ ನೀರಿನ ಕೊರತೆಯನ್ನು ಎದುರಿಸಲು ಕ್ರಮ ಕೈಗೊಳ್ಳುವಂತೆ ತಿಳಿಸಿದರು.
ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಅಗತ್ಯ ಸಿದ್ಧತೆ ಕೈಗೊಳ್ಳಬೇಕು. ಗ್ರಾಮ ಪಂಚಾಯತ್, ವಸತಿ ನಿಲಯ ಹಾಗೂ ಸರ್ಕಾರಿ ಕಟ್ಟಡಗಳಲ್ಲಿ ಮಳೆನೀರು ಸಂಗ್ರಹ ವ್ಯವಸ್ಥೆ ಕಡ್ಡಾಯವಾಗಿ ಅಳವಡಿಸಬೇಕು ಎಂದು ಸೂಚಿಸಿದರು.
ಹವಾಮಾನ ವೈಪರೀತ್ಯದಿಂದ ಬೆಳೆ ನಷ್ಟವಾದರೆ ಪರಿಹಾರ ದೊರೆಯಲು ರೈತರು ಹೆಚ್ಚಿನ ಸಂಖ್ಯೆಯಲ್ಲಿ ಬೆಳೆ ವಿಮೆಗೆ ನೋಂದಾಯಿಸಿಕೊಳ್ಳುವಂತೆ ಜಾಗೃತಿ ಮೂಡಿಸಬೇಕು. ತೋಟಗಾರಿಕೆ ಬೆಳೆಗಳಿಗೆ ಹನಿ ನೀರಾವರಿ ಅಳವಡಿಕೆಗೆ ಉತ್ತೇಜನ ನೀಡಬೇಕು.
ಜಿಲ್ಲೆಯಲ್ಲಿರುವ ಮಳೆಮಾಪನ ಯಂತ್ರಗಳು ಸಮರ್ಪಕವಾಗಿ ಕಾರ್ಯನಿರ್ವಹಿಸುವಂತೆ ದುರಸ್ತಿ ಮಾಡಬೇಕು ಹಾಗೂ ಜಾನುವಾರುಗಳಿಗೆ ಮೇವಿನ ಕೊರತೆ ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಿದರು.
ಸಭೆಯಲ್ಲಿ ಪಶುಪಾಲನಾ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿ, ಜಿಲ್ಲೆಯಲ್ಲಿ ಈಗಾಗಲೇ 5.01 ಲಕ್ಷ ಟನ್ ಮೇವು ದಾಸ್ತಾನು ಲಭ್ಯವಿದ್ದು, ಅದು ಮುಂದಿನ 39 ವಾರಗಳವರೆಗೆ ಸಾಕಾಗಲಿದೆ ಎಂದು ತಿಳಿಸಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ದಿಲೀಷ್ ಶಶಿ, ಕಾರವಾರ ಡಿಎಫ್‌ಒ ಆಂಥೋಣಿ ಮರಿಯಪ್ಪ, ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.