Friday, July 24, 2026
Join WhatsApp Group
HomeLocal Newsಮಳೆ ಮಾಪನ ಕೇಂದ್ರಗಳ ವೈಫಲ್ಯದಿಂದ ರೈತರಿಗೆ ಅನ್ಯಾಯ

ಮಳೆ ಮಾಪನ ಕೇಂದ್ರಗಳ ವೈಫಲ್ಯದಿಂದ ರೈತರಿಗೆ ಅನ್ಯಾಯ

ಶಿರಸಿಯಲ್ಲಿ ರೈತರು, ಬಿಜೆಪಿ ರೈತ ಮೋರ್ಚಾ ವತಿಯಿಂದ ಪ್ರತಿಭಟನೆ

ಶಿರಸಿ: ಉತ್ತರ ಕನ್ನಡ ಜಿಲ್ಲೆಯಲ್ಲಿ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ ಸಮರ್ಪಕವಾಗಿ ಜಾರಿಯಾಗುತ್ತಿಲ್ಲ ಎಂದು ಆರೋಪಿಸಿ, ಮಳೆ ಮಾಪನ ಕೇಂದ್ರಗಳ ದೋಷ ಸರಿಪಡಿಸಿ ರೈತರಿಗೆ ನ್ಯಾಯಸಮ್ಮತ ವಿಮೆ ಪರಿಹಾರ ನೀಡುವಂತೆ ಒತ್ತಾಯಿಸಿ ರೈತರು ಹಾಗೂ ಬಿಜೆಪಿ ಕಾರ್ಯಕರ್ತರು ಶನಿವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು.

ಉಪವಿಭಾಗದ ಸಹಾಯಕ ಆಯುಕ್ತರ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದ ಪ್ರತಿಭಟನಾಕಾರರು, ಜಿಲ್ಲೆಯ ಅನೇಕ ಕಡೆ ಸ್ಥಾಪಿಸಿರುವ ಮಳೆ ಮಾಪನ ಕೇಂದ್ರಗಳು ಸರಿಯಾಗಿ ಕಾರ್ಯನಿರ್ವಹಿಸದ ಪರಿಣಾಮ ನಿಖರ ಮಳೆ ದಾಖಲೆ ಸಿಗುತ್ತಿಲ್ಲ ಎಂದು ದೂರಿದರು. ಇದರ ಪರಿಣಾಮವಾಗಿ ನೈಜ ಬೆಳೆ ಹಾನಿಗೊಳಗಾದ ಅನೇಕ ರೈತರು ವಿಮೆ ಪರಿಹಾರದಿಂದ ವಂಚಿತರಾಗುತ್ತಿದ್ದಾರೆ ಎಂದು ಆರೋಪಿಸಿದರು.

ಬಿಜೆಪಿ ಮಾಧ್ಯಮ ವಕ್ತಾರ ಸದಾನಂದ ಭಟ್ ನಿಡಗೋಡ ಮಾತನಾಡಿ, ಸರ್ಕಾರದ ನಿರ್ಲಕ್ಷ್ಯದಿಂದ ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸಮಸ್ಯೆಗೆ ಶೀಘ್ರ ಪರಿಹಾರ ಕಂಡುಕೊಳ್ಳದಿದ್ದರೆ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಜಿಲ್ಲಾ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಅನಂತಮೂರ್ತಿ ಹೆಗಡೆ ಮಾತನಾಡಿ, ಸಂಕಷ್ಟದ ಸಂದರ್ಭದಲ್ಲಿ ರೈತರ ನೆರವಿಗೆ ಬರಬೇಕಿದ್ದ ಬೆಳೆ ವಿಮೆ ಯೋಜನೆಯೇ ಇದೀಗ ಸಮಸ್ಯೆಯ ಮೂಲವಾಗಿದೆ. ಮಳೆ ಮಾಪನ ಕೇಂದ್ರಗಳ ವೈಫಲ್ಯದಿಂದ ರೈತರಿಗೆ ಭಾರೀ ಅನ್ಯಾಯವಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಜಿಲ್ಲೆಯ ಎಲ್ಲಾ ಮಳೆ ಮಾಪನ ಕೇಂದ್ರಗಳನ್ನು ತಕ್ಷಣ ಸರಿಪಡಿಸಿ, ಕಳೆದ ಕೆಲವು ವರ್ಷಗಳಲ್ಲಿ ವಿಮೆಯಿಂದ ವಂಚಿತರಾದ ರೈತರ ಕುರಿತು ವಿಶೇಷ ಪರಿಶೀಲನೆ ನಡೆಸಬೇಕು. ಅರ್ಹ ರೈತರಿಗೆ ಕೂಡಲೇ ಪರಿಹಾರ ಬಿಡುಗಡೆ ಮಾಡಬೇಕು ಹಾಗೂ ಯೋಜನೆಯಲ್ಲಿ ಪಾರದರ್ಶಕತೆ ಕಾಪಾಡಬೇಕು ಎಂದು ಆಗ್ರಹಿಸಿದರು.

ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಮತ್ತು ಪಂಚಾಯತ್‌ವಾರು ಮಳೆ ಮಾಪನ ವರದಿಗಳನ್ನು ರೈತರಿಗೆ ಸುಲಭವಾಗಿ ಲಭ್ಯವಾಗುವಂತೆ ವ್ಯವಸ್ಥೆ ಮಾಡಬೇಕು ಎಂದು ಪ್ರತಿಭಟನಾಕಾರರು ಮನವಿಯಲ್ಲಿ ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಪಕ್ಷದ ಪ್ರಮುಖರಾದ ರವಿ ಹೆಗಡೆ, ಪ್ರಸಾದ ಹೆಗಡೆ, ರಾಘವೇಂದ್ರ ಭಟ್, ಆರ್.ಡಿ. ಹೆಗಡೆ, ನರಸಿಂಹ ಹೆಗಡೆ ಸೇರಿದಂತೆ ಹಲವು ರೈತ ಮುಖಂಡರು ಭಾಗವಹಿಸಿದ್ದರು.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರನಾಗಿ, ಉಪ ಸಂಪಾದಕನಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತನಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad

Most Popular

error: Content is protected !!
Share