ಯಲ್ಲಾಪುರ: ರಾಜ್ಯದಲ್ಲಿ ನಡೆಯುತ್ತಿರುವ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗದ ಮಾರ್ಗಸೂಚಿಗಳು ಉಲ್ಲಂಘನೆಯಾಗುತ್ತಿವೆ ಎಂಬ ಆರೋಪ ಕೇಳಿಬರುತ್ತಿದ್ದು, ಈ ಕುರಿತು ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ನಾಗರಿಕ ವೇದಿಕೆ ಅಧ್ಯಕ್ಷ ರಾಮು ನಾಯ್ಕ ಆಗ್ರಹಿಸಿದ್ದಾರೆ.
ಚುನಾವಣಾ ಆಯೋಗದ ನಿರ್ದೇಶನದಂತೆ ಬೂತ್ ಮಟ್ಟದ ಅಧಿಕಾರಿಗಳು (BLO) ಮನೆ ಮನೆಗೆ ತೆರಳಿ ಮತದಾರರ ಮಾಹಿತಿಯನ್ನು ಪರಿಶೀಲಿಸಬೇಕಾಗಿದೆ. ಆದರೆ ರಾಜ್ಯದ ಕೆಲವು ಭಾಗಗಳಲ್ಲಿ ಮಸೀದಿಗಳು, ಸಮುದಾಯ ಭವನಗಳು ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಜನರನ್ನು ಸೇರಿಸಿ ಅರ್ಜಿ ನಮೂನೆಗಳನ್ನು ಹಂಚಿ ಅಲ್ಲಿಯೇ ಭರ್ತಿ ಮಾಡಿಸಿಕೊಳ್ಳಲಾಗುತ್ತಿದೆ ಎಂಬ ವರದಿಗಳು ಮಾಧ್ಯಮಗಳಲ್ಲಿ ಪ್ರಕಟವಾಗಿವೆ.
ರಾಮನಗರ, ಶಿಗ್ಗಾಂವಿ, ಸವಣೂರು, ಹುಬ್ಬಳ್ಳಿ, ಧಾರವಾಡ, ಕೊಪ್ಪಳ, ಬೆಂಗಳೂರು ಸೇರಿದಂತೆ ಹಲವು ಪ್ರದೇಶಗಳಲ್ಲಿ ಈ ರೀತಿಯ ಬೆಳವಣಿಗೆಗಳ ಬಗ್ಗೆ ಆರೋಪಗಳು ಕೇಳಿಬಂದಿದ್ದು, ಇವುಗಳ ಬಗ್ಗೆ ಚುನಾವಣಾ ಅಧಿಕಾರಿಗಳು ಗಂಭೀರವಾಗಿ ಪರಿಶೀಲನೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ.
ಇದೇ ರೀತಿಯ ಅಕ್ರಮ ಚಟುವಟಿಕೆಗಳ ಬಗ್ಗೆ ಉತ್ತರ ಕನ್ನಡ ಜಿಲ್ಲೆ ಹಾಗೂ ಯಲ್ಲಾಪುರ ತಾಲೂಕಿನಲ್ಲಿ ಕೂಡ ಅನುಮಾನಗಳು ವ್ಯಕ್ತವಾಗುತ್ತಿವೆ ಎಂದು ಹೇಳಿರುವ ಅವರು, “ಸಾಕ್ಷಿ ಕೊಡಿ, ದೂರು ಕೊಡಿ” ಎಂಬ ಹೇಳಿಕೆಗಳಿಗೆ ಸೀಮಿತವಾಗದೆ ಸಂಬಂಧಪಟ್ಟ ಅಧಿಕಾರಿಗಳು ಸ್ವಯಂಪ್ರೇರಿತವಾಗಿ ತನಿಖೆ ಕೈಗೊಂಡು, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದ್ದಾರೆ.
ಅಲ್ಲದೆ, ಚುನಾವಣಾ ಪ್ರಕ್ರಿಯೆಯಲ್ಲಿ ನಿಯಮ ಉಲ್ಲಂಘಿಸಿ ರಾಜಕೀಯ ಪಕ್ಷಗಳ ಪರವಾಗಿ ಕೆಲಸ ಮಾಡಿರುವುದು ಸಾಬೀತಾದರೆ, ಅಂತಹವರ ವಿರುದ್ಧವೂ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ರಾಮು ನಾಯ್ಕ ಒತ್ತಾಯಿಸಿದ್ದಾರೆ.