Monday, September 7, 2026
Join WhatsApp Group
HomeLocal Newsರಾಜ್ಯ ಸರ್ಕಾರಕ್ಕೆ ತುಕ್ಕು ಹಿಡಿದಿದೆ ಎಂದು ಸಚಿವರೇ ಒಪ್ಪಿಕೊಂಡರೇ?!

ರಾಜ್ಯ ಸರ್ಕಾರಕ್ಕೆ ತುಕ್ಕು ಹಿಡಿದಿದೆ ಎಂದು ಸಚಿವರೇ ಒಪ್ಪಿಕೊಂಡರೇ?!

ಯಲ್ಲಾಪುರ: ಬೆಂಗಳೂರು ಪೊಲೀಸರು ರಾಜ್ಯದ ಗಡಿ ದಾಟಿ ರಾಜಸ್ಥಾನದ ಜೈಪುರದಲ್ಲಿ ಕಾರ್ಯಾಚರಣೆ ನಡೆಸಿದ ವೇಳೆ ಎದುರಾದ ವಿವಾದದ ಹಿನ್ನೆಲೆಯಲ್ಲಿ, ನೂತನ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು “ಆಡಳಿತ ವ್ಯವಸ್ಥೆ ತುಕ್ಕು ಹಿಡಿದಿದೆ, ಅದನ್ನು ಸರಿಪಡಿಸಲು ಸ್ವಲ್ಪ ಸಮಯ ಬೇಕು” ಎಂದು ನೀಡಿರುವ ಹೇಳಿಕೆ ರಾಜ್ಯ ಸರ್ಕಾರದ ಕಾರ್ಯವೈಖರಿಯ ಮೇಲಿನ ಗಂಭೀರ ಪ್ರಶ್ನೆಗಳನ್ನು ಎತ್ತಿದೆ ಎಂದು ಬಿಜೆಪಿ ಮುಖಂಡ ರಾಮು ನಾಯ್ಕ ಪ್ರಶ್ನಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಪ್ರಿಯಾಂಕ್ ಖರ್ಗೆ ಅವರು ಗೃಹ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಕೆಲವೇ ದಿನಗಳಲ್ಲಿ ಇಂತಹ ಘಟನೆ ಬೆಳಕಿಗೆ ಬಂದಿರುವುದು ರಾಜ್ಯದ ಆಡಳಿತ ವ್ಯವಸ್ಥೆಯ ಸ್ಥಿತಿಗತಿಯನ್ನು ಬಿಂಬಿಸುತ್ತದೆ.

ಸರ್ಕಾರದ ಒಳಜಗಳ ಮತ್ತು ಅಧಿಕಾರದ ಕಿತ್ತಾಟದ ಪರಿಣಾಮವಾಗಿ ಆಡಳಿತ ಯಂತ್ರ ಸ್ಥಬ್ಧಗೊಂಡಿದ್ದು, ಅದನ್ನೇ ಸಚಿವರು ತಮ್ಮ ಹೇಳಿಕೆಯ ಮೂಲಕ ಪರೋಕ್ಷವಾಗಿ ಒಪ್ಪಿಕೊಂಡಂತಾಗಿದೆ ಎಂದು ಅವರು ಟೀಕಿಸಿದ್ದಾರೆ.

ಗೃಹ ಸಚಿವರಾಗಿ ಅಧಿಕಾರ ಸ್ವೀಕರಿಸಿದ ತಕ್ಷಣವೇ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿದ್ದ ಪ್ರಿಯಾಂಕ್ ಖರ್ಗೆ ಅವರು, ಅಪ್ರಾಪ್ತರು ಪಬ್ ಹಾಗೂ ಬಾರ್‌ಗಳಿಗೆ ಪ್ರವೇಶಿಸದಂತೆ ಮತ್ತು ಮದ್ಯ ಸೇವನೆ ತಡೆಯುವ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದರು. ಆದರೆ, ಅದಾದ ಕೆಲವೇ ದಿನಗಳಲ್ಲಿ ಅವರ ಸ್ವಂತ ಜಿಲ್ಲೆ ಕಲಬುರಗಿಯ ಅಳಂದ ತಾಲೂಕಿನ ಕಡಗಂಚಿಯಲ್ಲಿರುವ ಸರ್ಕಾರಿ ವಿದ್ಯಾರ್ಥಿನಿಯರ ವಸತಿ ನಿಲಯದಲ್ಲಿ ಅಪ್ರಾಪ್ತರು ಮದ್ಯ ಸೇವಿಸಿರುವ ಆರೋಪಗಳು ಕೇಳಿಬಂದಿವೆ. ಇಂತಹ ಘಟನೆಗಳಿಗೆ ಯಾರು ಹೊಣೆ ಎಂಬುದನ್ನು ಸರ್ಕಾರ ಸ್ಪಷ್ಟಪಡಿಸಬೇಕು ಎಂದು ಆಗ್ರಹಿಸಿದ್ದಾರೆ.

ಪ್ರಿಯಾಂಕ್ ಖರ್ಗೆ ಅವರು ಇತರೆ ಸಂಘಟನೆಗಳು ಮತ್ತು ರಾಜಕೀಯ ವಿಚಾರಗಳ ಬಗ್ಗೆ ಹೆಚ್ಚು ಗಮನ ಹರಿಸುವ ಬದಲು, ತಮ್ಮ ಜವಾಬ್ದಾರಿಯಲ್ಲಿರುವ ಗೃಹ ಇಲಾಖೆ ಹಾಗೂ ಉಸ್ತುವಾರಿ ಜಿಲ್ಲೆಯ ಆಡಳಿತದ ಕಡೆ ಗಮನಹರಿಸಬೇಕು. ರಾಜ್ಯದ ಕಾನೂನು ಸುವ್ಯವಸ್ಥೆ, ಶಿಕ್ಷಣ ಮತ್ತು ಮೂಲಸೌಕರ್ಯಗಳ ಸಮಸ್ಯೆಗಳನ್ನು ಪರಿಹರಿಸುವುದು ಸರ್ಕಾರದ ಆದ್ಯತೆಯಾಗಬೇಕು ಎಂದು ರಾಮು ನಾಯ್ಕ ಒತ್ತಾಯಿಸಿದ್ದಾರೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad
Ad

Most Popular

error: Content is protected !!
Share