Monday, September 7, 2026
Join WhatsApp Group
HomeLocal Newsಅಪಘಾತ ತಡೆಗೆ ಅಗತ್ಯ ಸುರಕ್ಷತಾ ಕ್ರಮ ಕೈಗೊಳ್ಳಿ; ಡಿಸಿ

ಅಪಘಾತ ತಡೆಗೆ ಅಗತ್ಯ ಸುರಕ್ಷತಾ ಕ್ರಮ ಕೈಗೊಳ್ಳಿ; ಡಿಸಿ

ಕಾರವಾರ: ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಪಘಾತ ರಹಿತ ಹಾಗೂ ಸುರಕ್ಷಿತ ಸಂಚಾರಕ್ಕೆ ಅಗತ್ಯವಿರುವ ಎಲ್ಲಾ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ನಡೆದ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪೊಲೀಸ್ ಇಲಾಖೆ ಸೂಚಿಸಿರುವ ಸುರಕ್ಷತಾ ಕ್ರಮಗಳನ್ನೂ ತಕ್ಷಣ ಜಾರಿಗೊಳಿಸುವಂತೆ ಸೂಚಿಸಿದರು.

ಕಾರವಾರದ ಕಾಳಿ ಸೇತುವೆ ಮೇಲೆ ಬಲವಾದ ಗಾಳಿಯಿಂದ ದ್ವಿಚಕ್ರ ವಾಹನ ಸವಾರರಿಗೆ ತೊಂದರೆಯಾಗುತ್ತಿರುವ ಬಗ್ಗೆ ದೂರುಗಳು ಬರುತ್ತಿದ್ದು, ಈ ಹಿನ್ನೆಲೆಯಲ್ಲಿ ಅಗತ್ಯ ಸುರಕ್ಷತಾ ಕ್ರಮ ಕೈಗೊಳ್ಳಬೇಕು. ಕುಮಟಾದಲ್ಲಿ ಅಗತ್ಯವಿರುವ ಕಡೆ ಡಿವೈಡರ್ ಹಾಗೂ ಬೀದಿ ದೀಪಗಳನ್ನು ಅಳವಡಿಸಬೇಕು. ನಗರ ಪ್ರದೇಶಗಳಲ್ಲಿ ಭಾರೀ ವಾಹನಗಳು ಸೇರಿದಂತೆ ಇತರ ವಾಹನಗಳ ಓವರ್‌ಟೇಕ್ ನಿಯಂತ್ರಿಸಲು ಕ್ರಮ ಕೈಗೊಳ್ಳಬೇಕು. ರಸ್ತೆ ಕಾಮಗಾರಿ ಪೂರ್ಣಗೊಳ್ಳುವವರೆಗೆ ತಾತ್ಕಾಲಿಕ ಸುರಕ್ಷತಾ ಕ್ರಮಗಳ ಮೂಲಕ ಅಪಘಾತಗಳನ್ನು ತಪ್ಪಿಸಬೇಕು ಎಂದು ಸೂಚಿಸಿದರು.

ಕಾರವಾರದ ಫ್ಲೈಓವರ್ ಕೆಳಗೆ ಅನಧಿಕೃತ ವಾಹನ ನಿಲುಗಡೆ, ಅಂಗಡಿಗಳು ಹಾಗೂ ಜನವಸತಿ ಕಂಡುಬರುತ್ತಿರುವ ಹಿನ್ನೆಲೆಯಲ್ಲಿ ಅಲ್ಲಿ ಫೆನ್ಸಿಂಗ್ ಅಳವಡಿಸಿ, ಗಾರ್ಡನಿಂಗ್ ಹಾಗೂ ಸಾರ್ವಜನಿಕರಿಗಾಗಿ ವಾಕಿಂಗ್ ಪಾಥ್ ನಿರ್ಮಿಸುವಂತೆ ಸೂಚಿಸಿದರು.

ಮುರುಡೇಶ್ವರ ಹಾಗೂ ಅಂಕೋಲಾದಲ್ಲಿ ಟ್ರಕ್ ಟರ್ಮಿನಲ್ ಮಾದರಿಯಲ್ಲಿ ವಾಹನ ನಿಲುಗಡೆಗೆ ಗುರುತಿಸಿರುವ ಜಾಗಗಳಲ್ಲಿ ಚಾಲಕರ ವಿಶ್ರಾಂತಿ ಹಾಗೂ ವಾಹನ ನಿಲುಗಡೆಗೆ ಅಗತ್ಯ ಮೂಲಸೌಕರ್ಯ ಕಲ್ಪಿಸುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕರಿಗೆ ಸೂಚನೆ ನೀಡಿದರು.

ಅಂಕೋಲಾ–ಯಲ್ಲಾಪುರ ರಸ್ತೆಯ ಸುರಕ್ಷತೆಯ ಬಗ್ಗೆಯೂ ಸಭೆಯಲ್ಲಿ ವಿಶೇಷ ಗಮನ ಹರಿಸಲಾಯಿತು. ಈ ರಸ್ತೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸೂಚನಾ ಫಲಕಗಳು, ಕ್ಯಾಟ್‌ಐ, ಬ್ಲಿಂಕಿಂಗ್ ಲೈಟ್, ವೇಗಮಿತಿ ಫಲಕ ಹಾಗೂ ಕ್ಯಾನ್‌ವಾಕ್ಸ್ ಮಿರರ್‌ಗಳನ್ನು ಅಳವಡಿಸುವಂತೆ ಜಿಲ್ಲಾಧಿಕಾರಿ ಸೂಚಿಸಿದರು. ರಸ್ತೆಗೆ ಅಡ್ಡಲಾಗಿರುವ ಮರದ ಕೊಂಬೆಗಳನ್ನು ಅರಣ್ಯ ಹಾಗೂ ಪೊಲೀಸ್ ಇಲಾಖೆಯ ಸಹಕಾರದೊಂದಿಗೆ ತೆರವುಗೊಳಿಸಬೇಕು ಎಂದರು.

ಅರೆಬೈಲ್ ಘಾಟ್‌ನಲ್ಲಿ ಅಳವಡಿಸಿರುವ ಅಪಘಾತ ತಡೆ ರಕ್ಷಣಾ ಕಂಬಗಳು ರಾತ್ರಿ ವೇಳೆ ಸ್ಪಷ್ಟವಾಗಿ ಗೋಚರಿಸುವಂತೆ ರೇಡಿಯಂ ಅಳವಡಿಸಬೇಕು. ಶಿರಸಿ–ಕುಮಟಾ ರಸ್ತೆ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಜಿಲ್ಲೆಯ ಪ್ರಮುಖ ರಸ್ತೆಗಳಲ್ಲಿ ನಿಯಮಿತ ತಪಾಸಣೆ ನಡೆಸಿ, ನಿಗದಿತ ಮಿತಿಗಿಂತ ಹೆಚ್ಚಿನ ಸರಕು ಸಾಗಿಸುವ ವಾಹನಗಳ ವಿರುದ್ಧ ಪ್ರಕರಣ ದಾಖಲಿಸುವಂತೆ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಗೆ ಸೂಚಿಸಿದರು. ಎಲ್ಲಾ ತಾಲೂಕುಗಳಲ್ಲಿ ವಿಶೇಷ ಶಿಬಿರಗಳನ್ನು ಆಯೋಜಿಸಿ ಹೊಸದಾಗಿ ಚಾಲನಾ ಪರವಾನಗಿಗೆ ಅರ್ಜಿ ಸಲ್ಲಿಸಿರುವವರಿಗೆ ಚಾಲನಾ ಪ್ರಮಾಣಪತ್ರ ವಿತರಿಸುವುದರ ಜತೆಗೆ ರಸ್ತೆ ಸುರಕ್ಷತೆ ಕುರಿತು ಜಾಗೃತಿ ಮೂಡಿಸಬೇಕು ಎಂದರು.

ಕಳೆದ ತಿಂಗಳು ಕದ್ರಾ ರಸ್ತೆಯಲ್ಲಿ ನಿಗದಿತ ಮಿತಿಗಿಂತ ಹೆಚ್ಚಿನ ಸರಕು ಸಾಗಿಸುತ್ತಿದ್ದ 13 ವಾಹನಗಳ ವಿರುದ್ಧ ಪ್ರಕರಣ ದಾಖಲಿಸಿ ದಂಡ ವಸೂಲಿ ಮಾಡಲಾಗಿದೆ ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿ ಸಭೆಗೆ ಮಾಹಿತಿ ನೀಡಿದರು. ಸದ್ಯ ಆ ರಸ್ತೆಯಲ್ಲಿ ಓವರ್‌ಲೋಡ್ ವಾಹನಗಳು ಕಂಡುಬರುತ್ತಿಲ್ಲವಾದರೂ ನಿರಂತರ ತಪಾಸಣೆ ಮುಂದುವರಿದಿದೆ ಎಂದು ತಿಳಿಸಿದರು.

ರಾಷ್ಟ್ರೀಯ ಹೆದ್ದಾರಿಯಲ್ಲಿ ಅಗತ್ಯವಿರುವ ಕಡೆ ANPR ಕ್ಯಾಮೆರಾಗಳನ್ನು ಅಳವಡಿಸುವುದು, ಬ್ಲ್ಯಾಕ್ ಸ್ಪಾಟ್‌ಗಳಲ್ಲಿ ಸುರಕ್ಷತಾ ಕ್ರಮ ಕೈಗೊಳ್ಳುವುದು, ವೇಗಮಿತಿ ಫಲಕಗಳು ಹಾಗೂ ಬ್ಲಿಂಕರ್‌ಗಳನ್ನು ಅಳವಡಿಸುವುದು ಸೇರಿದಂತೆ ವಿವಿಧ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್. ಸೂಚಿಸಿದರು. ಹೆದ್ದಾರಿಗಳಲ್ಲಿ ಕಂಡುಬರುವ ಬೀಡಾಡಿ ದನಗಳ ಸಮಸ್ಯೆಗೂ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದರು.

ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕೃಷ್ಣಮೂರ್ತಿ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಪ್ರಕಾಶ್ ಹಾಲಮ್ಮನವರ, ಜಿಲ್ಲೆಯ ಉಪ ವಿಭಾಗಾಧಿಕಾರಿಗಳು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad
Ad

Most Popular

error: Content is protected !!
Share