ಬೆಂಗಳೂರು: ರಾಜ್ಯ ಸರ್ಕಾರ ಜಾರಿಗೊಳಿಸಿರುವ ಪಂಚ ಗ್ಯಾರಂಟಿ ಯೋಜನೆಗಳಲ್ಲೊಂದಾದ ಉಚಿತ ಬಸ್ ಪ್ರಯಾಣವನ್ನು ನೀಡುವ ʻಶಕ್ತಿ ಯೋಜನೆʼ ರಾಜ್ಯದ ಮಹಿಳೆಯರಿಗೆ ವರದಾನವೇ ಆಗಿದೆ.
ಈ ಯೋಜನೆಯಡಿ ಮಹಿಳೆಯರು ರಾಜ್ಯಾದ್ಯಂತ ಉಚಿತ ಪ್ರಯಾಣ ಮಾಡುತ್ತಾ ಹಲವಾರು ಸ್ಥಳಗಳಿಗೆ ಭೇಟಿ ನೀಡುತ್ತಿದ್ದಾರೆ. ಆದರೆ, ಇನ್ನು ಮುಂದೆ ಈ ಯೋಜನೆಯ ಪ್ರಯೋಜನ ಪಡೆಯಲು ಬಸ್‌ಗಳಲ್ಲಿ ಆಧಾರ್ ಕಾರ್ಡ್ ತೋರಿಸಿದರೆ ಆಗದು! ಅಂದರೆ, ಇನ್ನು ಮುಂದೆ ಈ ಯೋಜನೆಗೆ ಸ್ಮಾರ್ಟ್ ಕಾರ್ಡ್ ಅನ್ನು ಜಾರಿಗೊಳಿಸಲು ಸರ್ಕಾರ ನಿರ್ಧರಿಸಿದೆ.
ಇದುವರೆಗೂ ಮಹಿಳೆಯರು ಆಧಾರ್ ಕಾರ್ಡ್ ತೋರಿಸಿ ಉಚಿತವಾಗಿ ಟಿಕೆಟ್ ಪಡೆದು ಪ್ರಯಾಣಿಸುತ್ತಿದ್ದರು. ಇದೀಗ ಸರ್ಕಾರವು ಮಹಿಳೆಯರಿಗೆ ಸ್ಮಾರ್ಟ್ ಕಾರ್ಡ್ ವಿತರಿಸಲು ಚಿಂತನೆ ನಡೆಸಿದೆ. ಈ ವಿಧಾನ ಜಾರಿಯಾದಲ್ಲಿ, ಪ್ರಯಾಣದ ವೇಳೆ ಆಧಾರ್ ಕಾರ್ಡ್ ತೆಗೆದುಕೊಂಡು ಹೋಗುವ ಅಗತ್ಯವಿಲ್ಲ. ಶೀಘ್ರವೇ ಮಹಿಳೆಯರಿಗೆ ಸ್ಮಾರ್ಟ್ ಕಾರ್ಡ್ ಉಚಿತವಾಗಿ ಕೈಸೇರಲಿದೆ. ಗುರುವಾರ ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ನಡೆದ ರಾಜ್ಯ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಈ ಬಗ್ಗೆ ಕಾನೂನು ಸಚಿವ ಹೆಚ್.ಕೆ. ಪಾಟೀಲ್ ಮಾಹಿತಿ ನೀಡಿದ್ದು, ಶಕ್ತಿ ಯೋಜನೆಯಡಿ ಸ್ಮಾರ್ಟ್ ಕಾರ್ಡ್ ವಿತರಣೆ ಮಾಡಲಾಗುತ್ತದೆ. ರಾಜ್ಯದ 4 ಸಾರಿಗೆ ನಿಗಮಗಳಿಂದ ಮಹಿಳೆಯರಿಗೆ ಸ್ಮಾರ್ಟ್ ಕಾರ್ಡ್ ವಿತರಣೆಯಾಗಲಿದ್ದು, ಈ ಸ್ಮಾರ್ಟ್ ಕಾರ್ಡ್ ತೋರಿಸಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗುತ್ತದೆ ಎಂದಿದ್ದಾರೆ.