Friday, October 23, 2026
HomeLocal Newsಸಿದ್ದಾಪುರ ಅಭಿವೃದ್ಧಿಗೆ ವೇಗ: ಪ್ರಮುಖ ಕಾಮಗಾರಿಗಳ ಪರಿಶೀಲನೆ

ಸಿದ್ದಾಪುರ ಅಭಿವೃದ್ಧಿಗೆ ವೇಗ: ಪ್ರಮುಖ ಕಾಮಗಾರಿಗಳ ಪರಿಶೀಲನೆ

ಸಿದ್ದಾಪುರ: ತಾಲೂಕಿನ ಮೂಲಸೌಕರ್ಯ ಅಭಿವೃದ್ಧಿ ಹಾಗೂ ಸಾರ್ವಜನಿಕರ ಬಹುಕಾಲದ ಬೇಡಿಕೆಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಶಾಸಕ ಭೀಮಣ್ಣ ಟಿ. ನಾಯ್ಕ ಅವರು ಮಂಗಳವಾರ ತಾಲೂಕಿನ ವಿವಿಧೆಡೆ ನಡೆಯುತ್ತಿರುವ ಪ್ರಮುಖ ಅಭಿವೃದ್ಧಿ ಕಾಮಗಾರಿಗಳನ್ನು ಅಧಿಕಾರಿಗಳೊಂದಿಗೆ ಪರಿಶೀಲಿಸಿದರು.

ಸಿದ್ದಾಪುರ ಪಟ್ಟಣಕ್ಕೆ ಶರಾವತಿ ನದಿಯಿಂದ ಶಾಶ್ವತ ಕುಡಿಯುವ ನೀರು ಪೂರೈಸುವ ಯೋಜನೆಯಡಿ ಕಾರ್ಗಲ್ ಮತ್ತು ಜೋಗ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಅಂಬುಗಳಲೆಯಲ್ಲಿ ನಡೆಯುತ್ತಿರುವ ಜಾಕ್‌ವೆಲ್ ಕಾಮಗಾರಿಯನ್ನು ಶಾಸಕರು ವೀಕ್ಷಿಸಿದರು.

ಯೋಜನೆಯ ಪ್ರಗತಿ ಕುರಿತು ಇಂಜಿನಿಯರ್‌ಗಳಿಂದ ಮಾಹಿತಿ ಪಡೆದ ಅವರು, ಬೇಸಿಗೆಯಲ್ಲಿ ನೀರಿನ ಸಮಸ್ಯೆ ಎದುರಾಗದಂತೆ ಕಾಮಗಾರಿಯನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವಂತೆ ಸೂಚಿಸಿದರು. ಕಾಮಗಾರಿಯ ಗುಣಮಟ್ಟದಲ್ಲಿಯೂ ಯಾವುದೇ ರಾಜಿ ಮಾಡಿಕೊಳ್ಳಬಾರದು ಎಂದು ಅಧಿಕಾರಿಗಳು ಹಾಗೂ ಗುತ್ತಿಗೆದಾರರಿಗೆ ನಿರ್ದೇಶನ ನೀಡಿದರು.

ತಾಲೂಕಿನ ವಿದ್ಯುತ್ ಸಮಸ್ಯೆಗೆ ಪರಿಹಾರ ಕಲ್ಪಿಸುವ ಉದ್ದೇಶದಿಂದ ಕಾನಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಹೊಸ ವಿದ್ಯುತ್ ಗ್ರಿಡ್ ಕಾಮಗಾರಿಯನ್ನೂ ಶಾಸಕರು ಪರಿಶೀಲಿಸಿದರು.

ಗ್ರಿಡ್ ಪೂರ್ಣಗೊಂಡ ಬಳಿಕ ಕಾನಸೂರು ಸೇರಿದಂತೆ ಸುತ್ತಮುತ್ತಲಿನ ಗ್ರಾಮೀಣ ಪ್ರದೇಶಗಳ ರೈತರು ಹಾಗೂ ಗೃಹಬಳಕೆದಾರರಿಗೆ ವಿದ್ಯುತ್ ಪೂರೈಕೆಯಲ್ಲಿ ಅನುಕೂಲವಾಗಲಿದೆ. ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಿ ಸಾರ್ವಜನಿಕ ಸೇವೆಗೆ ಮುಕ್ತಗೊಳಿಸುವಂತೆ ಹೆಸ್ಕಾಂ ಹಾಗೂ ಸಂಬಂಧಿತ ಅಧಿಕಾರಿಗಳಿಗೆ ಸೂಚಿಸಿದರು.

ಇದೇ ವೇಳೆ ಮನ್ಮನೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಳವಳ್ಳಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಕೈಗಾರಿಕಾ ವಸಾಹತು ಕಾಮಗಾರಿಯನ್ನೂ ಭೀಮಣ್ಣ ನಾಯ್ಕ ಪರಿಶೀಲಿಸಿದರು. ಕೈಗಾರಿಕಾ ವಸಾಹತು ಕಾರ್ಯಾರಂಭಗೊಂಡ ಬಳಿಕ ಸ್ಥಳೀಯವಾಗಿ ಕೈಗಾರಿಕೆಗಳು ಬೆಳೆಯಲು ಅವಕಾಶ ಸಿಗುವುದರ ಜತೆಗೆ ತಾಲೂಕಿನ ಯುವಜನತೆಗೆ ಉದ್ಯೋಗಾವಕಾಶಗಳು ಹೆಚ್ಚಲಿವೆ ಎಂದು ಅವರು ತಿಳಿಸಿದರು.

ʻಸಿದ್ದಾಪುರ ತಾಲೂಕಿನ ಜನರ ಕುಡಿಯುವ ನೀರು, ವಿದ್ಯುತ್ ಹಾಗೂ ಉದ್ಯೋಗದ ಅಗತ್ಯಗಳಿಗೆ ಆದ್ಯತೆ ನೀಡಲಾಗುತ್ತಿದೆ. ಶರಾವತಿ ಯೋಜನೆಯಿಂದ ಪಟ್ಟಣಕ್ಕೆ ಶಾಶ್ವತ ಕುಡಿಯುವ ನೀರು, ಹೊಸ ವಿದ್ಯುತ್ ಗ್ರಿಡ್‌ನಿಂದ ವಿದ್ಯುತ್ ಸಮಸ್ಯೆಗೆ ಪರಿಹಾರ ಹಾಗೂ ಮಳವಳ್ಳಿಯ ಕೈಗಾರಿಕಾ ವಸಾಹತಿನಿಂದ ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶವಿದೆ. ಎಲ್ಲ ಕಾಮಗಾರಿಗಳನ್ನೂ ನಿಗದಿತ ಕಾಲಮಿತಿಯಲ್ಲಿ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸ್ಪಷ್ಟ ನಿರ್ದೇಶನ ನೀಡಲಾಗಿದೆʼ ಎಂದು ಶಾಸಕ ಭೀಮಣ್ಣ ಟಿ. ನಾಯ್ಕ ಹೇಳಿದರು.

ಶಾಸಕರ ಭೇಟಿ ಸಂದರ್ಭದಲ್ಲಿ ವಿವಿಧ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad
Ad

Most Popular

Recent Comments

error: Content is protected !!
Share