ಕಾರವಾರ: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್)-2026 ಕಾರ್ಯದಲ್ಲಿ ಉತ್ತರ ಕನ್ನಡ ಜಿಲ್ಲೆ ರಾಜ್ಯದ ಟಾಪ್-5 ಜಿಲ್ಲೆಗಳ ಪೈಕಿ ಸ್ಥಾನ ಪಡೆದಿರುವುದು ಎಲ್ಲರ ಸಹಕಾರದ ಫಲ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ದಿಲೀಷ್ ಶಶಿ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶಾಲೆ ಮತ್ತು ಕಾಲೇಜುಗಳ ಇಎಲ್‌ಸಿ (Electoral Literacy Club) ರಾಯಭಾರಿಗಳಿಗಾಗಿ ಆಯೋಜಿಸಿದ್ದ ಎಸ್‌ಐಆರ್ ಜಾಗೃತಿ ಭಿತ್ತಿಚಿತ್ರ ಸ್ಪರ್ಧೆಗೆ ಶನಿವಾರ ಚಾಲನೆ ನೀಡಿ ಅವರು ಮಾತನಾಡಿದರು.
ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಎಸ್‌ಐಆರ್ ಕುರಿತು ವ್ಯಾಪಕ ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಯಶಸ್ವಿಗೊಳಿಸಲು ಎಲ್ಲರೂ ಕೈಜೋಡಿಸಬೇಕು ಎಂದು ಕರೆ ನೀಡಿದರು.
ಈ ವೇಳೆ ಡಾ. ದಿಲೀಷ್ ಶಶಿ ಅವರು ಸ್ವತಃ ಭಿತ್ತಿಚಿತ್ರ ಬಿಡಿಸುವ ಮೂಲಕ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿ, ಸ್ಪರ್ಧಿಗಳಿಗೆ ಸ್ಫೂರ್ತಿ ತುಂಬಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಸೋಮಶೇಖರ ಮೇಸ್ತಾ, ಸ್ಪರ್ಧೆಯ ತೀರ್ಪುಗಾರರು, ಚಿತ್ರಕಲಾ ಶಿಕ್ಷಕರಾದ ಸಂಜೀವ ಬಸವಾಡ ಹಾಗೂ ಗಣೇಶ್ ವಾಜಂತ್ರಿ, ಜಿಲ್ಲಾ ಪಂಚಾಯತ್ ಸಿಬ್ಬಂದಿ ಮತ್ತು ಇತರರು ಉಪಸ್ಥಿತರಿದ್ದರು.