ಕಾರವಾರ: ಜಿಲ್ಲೆಯಲ್ಲಿನ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಅಂಗವಾಗಿ ಬೂತ್ ಮಟ್ಟದ ಅಧಿಕಾರಿಗಳು (BLO) ಮನೆ-ಮನೆಗೆ ಭೇಟಿ ನೀಡಿ ಎಮ್ಯುನರೇಷನ್ ಫಾರಂಗಳನ್ನು ವಿತರಿಸಿದ್ದು, ಸಾರ್ವಜನಿಕರು ಅವುಗಳನ್ನು ಸರಿಯಾಗಿ ಭರ್ತಿ ಮಾಡಿ ಕಡ್ಡಾಯವಾಗಿ ಹಿಂದಿರುಗಿಸುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ದಿಲೀಶ್ ಶಶಿ ಮನವಿ ಮಾಡಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸ್ವೀಪ್ (SVEEP) ಸಮಿತಿಯ ವತಿಯಿಂದ ಸಾರ್ವಜನಿಕರಲ್ಲಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ಆಯೋಜಿಸಿದ್ದ ಎಸ್‌ಐಆರ್ ಕಪ್ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.
ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ಜನರಿಗೆ ಸಮರ್ಪಕ ಮಾಹಿತಿ ತಲುಪಿಸುವ ಜವಾಬ್ದಾರಿ ಕಂದಾಯ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ (RDPR), ಪೊಲೀಸ್ ಇಲಾಖೆ ಹಾಗೂ ಮಾಧ್ಯಮಗಳ ಮೇಲಿದೆ ಎಂದು ಅವರು ಹೇಳಿದರು.
ಈಗಾಗಲೇ ಜಾಥಾ, ಶಾಲಾ ಮಕ್ಕಳ ಮೂಲಕ ಪೋಷಕರಿಗೆ ಪತ್ರ ಬರೆಯಿಸುವ ಕಾರ್ಯಕ್ರಮ ಸೇರಿದಂತೆ ವಿವಿಧ ಜಾಗೃತಿ ಅಭಿಯಾನಗಳನ್ನು ಹಮ್ಮಿಕೊಳ್ಳಲಾಗಿದೆ. ಜಿಲ್ಲೆಯಲ್ಲಿನ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ಸಾರ್ವಜನಿಕರು ಸಂಪೂರ್ಣ ಸಹಕರಿಸಬೇಕು. ಯಾವುದೇ ಅರ್ಹ ಮತದಾರರು ಮತದಾರರ ಪಟ್ಟಿಯಿಂದ ಹೊರಗುಳಿಯದಂತೆ ಪ್ರತಿಯೊಬ್ಬರೂ ಎಚ್ಚರ ವಹಿಸಬೇಕು ಎಂದು ಅವರು ತಿಳಿಸಿದರು.
ಪ್ರತಿದಿನ ಒತ್ತಡದ ನಡುವೆ ಕಾರ್ಯನಿರ್ವಹಿಸುವ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಕ್ರೀಡೆಯು ನೆಮ್ಮದಿ, ಮನರಂಜನೆ ಹಾಗೂ ಪರಸ್ಪರ ಸಮನ್ವಯ ಬೆಳೆಸಲು ಉತ್ತಮ ವೇದಿಕೆಯಾಗುತ್ತದೆ ಎಂದು ಡಾ. ದಿಲೀಶ್ ಶಶಿ ಅಭಿಪ್ರಾಯಪಟ್ಟರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಸೋಮಶೇಖರ ಮೇಸ್ತಾ, ಮುಖ್ಯ ಲೆಕ್ಕಾಧಿಕಾರಿ ಆನಂದ ಸಾಹಬಿಬ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರವಿನಾಯಕ, ತಾಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವೀರಣ್ಣ ಏಗನಗೌಡರ್, ಪತ್ರಿಕಾ ಭವನ ನಿರ್ವಹಣಾ ಸಮಿತಿ ಅಧ್ಯಕ್ಷ ಟಿ.ಬಿ. ಹರಿಕಾಂತ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಪಂದ್ಯಾವಳಿಯಲ್ಲಿ ಜಿಲ್ಲಾ ಪಂಚಾಯತ್, ಕಂದಾಯ ಇಲಾಖೆ, ಪೊಲೀಸ್ ಇಲಾಖೆ ಹಾಗೂ ಪತ್ರಕರ್ತರ ತಂಡಗಳು ಭಾಗವಹಿಸಿದ್ದವು. ಪೊಲೀಸ್ ತಂಡದ ವಿರುದ್ಧ ನಡೆದ ಪಂದ್ಯದಲ್ಲಿ ಜಿಲ್ಲಾ ಪಂಚಾಯತ್ ತಂಡದ ಪರ ಆರಂಭಿಕ ಆಟಗಾರರಾಗಿ ಕಣಕ್ಕಿಳಿದ ಡಾ. ದಿಲೀಶ್ ಶಶಿ ಕೊನೆಯ ಓವರ್‌ವರೆಗೂ ಜವಾಬ್ದಾರಿಯುತ ಬ್ಯಾಟಿಂಗ್ ಪ್ರದರ್ಶಿಸಿ ತಂಡದ ಮೊತ್ತ ಹೆಚ್ಚಿಸುವಲ್ಲಿ ಪ್ರಮುಖ ಪಾತ್ರವಹಿಸಿದರು. ಅವರ ಆಟ ಇತರ ಆಟಗಾರರಿಗೂ ಕ್ರೀಡಾಸ್ಫೂರ್ತಿಯನ್ನು ತುಂಬಿತು.