ಶಿರಸಿ: ನಗರದ ಮಾರಿಕಾಂಬಾ ದೇವಸ್ಥಾನದಿಂದ ಬಿಡಕಿಬೈಲ್ ರಸ್ತೆಯವರೆಗೆ ಭೂಗತ (ಯುಜಿ) ವಿದ್ಯುತ್ ಕೇಬಲ್ ಅಳವಡಿಸುವ ಯೋಜನೆಗೆ ಸಂಬಂಧಿಸಿದಂತೆ ಶಾಸಕ ಭೀಮಣ್ಣ ಟಿ. ನಾಯ್ಕ್ ಅವರು ಮಂಗಳವಾರ ಸಂಬಂಧಪಟ್ಟ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆ ನಡೆಸಿದರು.
ಯೋಜನೆಯ ಕಾಮಗಾರಿ ವೇಳೆ ಸಾರ್ವಜನಿಕರಿಗೆ ಹಾಗೂ ವಾಹನ ಸಂಚಾರಕ್ಕೆ ಯಾವುದೇ ರೀತಿಯ ತೊಂದರೆಯಾಗದಂತೆ ಕಾಮಗಾರಿ ಕೈಗೊಳ್ಳುವ ಕುರಿತು ಶಾಸಕರು ಸ್ಥಳದಲ್ಲೇ ಅಧಿಕಾರಿಗಳೊಂದಿಗೆ ಚರ್ಚಿಸಿ ಪರಿಶೀಲಿಸಿದರು.
ಮಾರಿಕಾಂಬಾ ದೇವಸ್ಥಾನದ ಆವರಣದಿಂದ ಬಿಡಕಿಬೈಲ್ ಮಾರ್ಗದಲ್ಲಿ ಕೇಬಲ್ ಅಳವಡಿಸಲು ಅಗತ್ಯವಿರುವ ತಾಂತ್ರಿಕ ಕ್ರಮಗಳ ಬಗ್ಗೆಯೂ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.ಈ ಸಂದರ್ಭದಲ್ಲಿ ಹೆಸ್ಕಾಂ, ನಗರಸಭೆ ಹಾಗೂ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳೊಂದಿಗೆ ಕಾಮಗಾರಿಯ ವಿವಿಧ ಹಂತಗಳ ಕುರಿತು ಚರ್ಚೆ ನಡೆಸಲಾಯಿತು.
ಕಾಮಗಾರಿ ಅನುಷ್ಠಾನಗೊಳಿಸುವಾಗ ರಸ್ತೆಯ ಬಳಕೆದಾರರು ಹಾಗೂ ಸಾರ್ವಜನಿಕರಿಗೆ ಅನಗತ್ಯ ತೊಂದರೆಯಾಗದಂತೆ ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಯಿತು.
ಸ್ಥಳ ಪರಿಶೀಲನೆ ವೇಳೆ ಹೆಸ್ಕಾಂ, ನಗರಸಭೆ ಹಾಗೂ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ಪ್ರಮುಖರು ಉಪಸ್ಥಿತರಿದ್ದರು.


