ಶಿರಸಿ: ನಗರದ ವಿವಿಧ ಶಾಲೆಗಳಿಗೆ ಭೇಟಿ ನೀಡಿದ ಶಾಸಕ ಭೀಮಣ್ಣ ಟಿ. ನಾಯ್ಕ ಅವರು ಅಭಿವೃದ್ಧಿ ಹಾಗೂ ನಿರ್ಮಾಣ ಕಾಮಗಾರಿಗಳನ್ನು ಪರಿಶೀಲಿಸಿ, ಗುಣಮಟ್ಟ ಕಾಯ್ದುಕೊಂಡು ನಿಗದಿತ ಸಮಯದಲ್ಲಿ ಪೂರ್ಣಗೊಳಿಸುವಂತೆ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಗುತ್ತಿಗೆದಾರರಿಗೆ ಸೂಚನೆ ನೀಡಿದರು.
ಶಾಸಕರ ಮಾದರಿ ಶಾಲೆ ನಂ. 2ಕ್ಕೆ ಭೇಟಿ ನೀಡಿದ ಶಾಸಕರು, ಶಾಲಾ ಆವರಣದಲ್ಲಿ ನಿರ್ಮಾಣವಾಗುತ್ತಿರುವ ಹೆಚ್ಚುವರಿ ಕೊಠಡಿಗಳ ಕಾಮಗಾರಿಯನ್ನು ವೀಕ್ಷಿಸಿದರು. ಕಟ್ಟಡ ನಿರ್ಮಾಣದ ಗುಣಮಟ್ಟ ಪರಿಶೀಲಿಸಿ, ವಿದ್ಯಾರ್ಥಿಗಳ ಶೈಕ್ಷಣಿಕ ಅನುಕೂಲಕ್ಕೆ ಆದ್ಯತೆ ನೀಡಿ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸುವಂತೆ ಸೂಚಿಸಿದರು.
ನಂತರ ಶ್ರೀ ಮಾರಿಕಾಂಬಾ ಪ್ರೌಢಶಾಲೆಗೆ ಭೇಟಿ ನೀಡಿ, ಕಾಂಪೌಂಡ್ ಗೋಡೆ ನಿರ್ಮಾಣ ಹಾಗೂ ಇತರ ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಶಾಲೆಯ ಮುಖ್ಯೋಪಾಧ್ಯಾಯರು, ಶಿಕ್ಷಕರು, ಶಾಲಾ ಅಭಿವೃದ್ಧಿ ಮತ್ತು ಮೇಲ್ವಿಚಾರಣಾ ಸಮಿತಿ (SDMC) ಸದಸ್ಯರು ಹಾಗೂ ಸ್ಥಳೀಯ ಪ್ರಮುಖರು ಉಪಸ್ಥಿತರಿದ್ದರು.


