ಶಿರಸಿ: ಶಿರಸಿ ತಾಲೂಕಿನ ಬಂಡಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮುಂಡಗಾರ ಗ್ರಾಮದಲ್ಲಿ ಬಿಜೆಪಿ ಹಾಗೂ ಜೆಡಿಎಸ್ನ ಕಾರ್ಯಕರ್ತರು ಮತ್ತು ಗ್ರಾಮಸ್ಥರು ಭಾನುವಾರ ಶಾಸಕ ಭೀಮಣ್ಣ ನಾಯ್ಕ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.
ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಹಾಗೂ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ ಕಾಂಗ್ರೆಸ್ ಸೇರ್ಪಡೆಯಾಗಿರುವುದಾಗಿ ಕಾರ್ಯಕರ್ತರು ತಿಳಿಸಿರುವುದಾಗಿ ಪಕ್ಷದ ಪ್ರಕಟಣೆಯಲ್ಲಿ ಹೇಳಲಾಗಿದೆ.
ಪಕ್ಷಕ್ಕೆ ಸೇರ್ಪಡೆಯಾದವರಿಗೆ ಶಾಸಕ ಭೀಮಣ್ಣ ನಾಯ್ಕ ಅವರು ಕಾಂಗ್ರೆಸ್ ಶಾಲು ಹೊದಿಸಿ, ಪಕ್ಷದ ಧ್ವಜ ನೀಡಿ ಸ್ವಾಗತಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಭೀಮಣ್ಣ ನಾಯ್ಕ, ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಜನರಿಗೆ ನೆರವಾಗುತ್ತಿವೆ. ಮುಂಡಗಾರ ಹಾಗೂ ಬಂಡಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೂಲಸೌಕರ್ಯ ಅಭಿವೃದ್ಧಿ ಮತ್ತು ಸಾರ್ವಜನಿಕರ ಹಿತರಕ್ಷಣೆಗೆ ಬದ್ಧನಾಗಿದ್ದು, ಪಕ್ಷಕ್ಕೆ ಸೇರ್ಪಡೆಯಾದ ಎಲ್ಲರನ್ನೂ ಗೌರವದಿಂದ ನಡೆಸಿಕೊಳ್ಳಲಾಗುವುದು ಎಂದರು.
ಶಾಸಕರ ಸರಳತೆ, ಜನರ ಸಮಸ್ಯೆಗಳಿಗೆ ಸ್ಪಂದಿಸುವ ರೀತಿ ಹಾಗೂ ಕ್ಷೇತ್ರದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾರ್ಯಗಳನ್ನು ಗಮನಿಸಿ ಕಾಂಗ್ರೆಸ್ ಸೇರ್ಪಡೆಯಾಗಿರುವುದಾಗಿ ನೂತನ ಸದಸ್ಯರು ತಿಳಿಸಿದ್ದಾರೆ.
ಕಾರ್ಯಕ್ರಮದಲ್ಲಿ ಸ್ಥಳೀಯ ಕಾಂಗ್ರೆಸ್ ಮುಖಂಡರು, ಗ್ರಾಮ ಪಂಚಾಯಿತಿ ಮಾಜಿ ಜನಪ್ರತಿನಿಧಿಗಳು ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.


