Friday, July 24, 2026
Join WhatsApp Group
HomeLocal Newsಡ್ರಗ್ಸ್ ಅಲ್ಲ, ಸಾಧನೆಯ ಬೆನ್ನತ್ತಿ; ಎಸ್‌ಪಿ ಕಿವಿಮಾತು

ಡ್ರಗ್ಸ್ ಅಲ್ಲ, ಸಾಧನೆಯ ಬೆನ್ನತ್ತಿ; ಎಸ್‌ಪಿ ಕಿವಿಮಾತು

ಕಾರವಾರ: ಮಾದಕ ವಸ್ತುಗಳ ವ್ಯಸನಕ್ಕೆ ಒಳಗಾದರೆ ಜೀವನದಲ್ಲಿ ಯಾವುದೇ ಸಾಧನೆ ಮಾಡಲು ಸಾಧ್ಯವಿಲ್ಲ. ಯುವಜನರ ಭವಿಷ್ಯ ಮತ್ತು ಯಶಸ್ಸಿಗೆ ಡ್ರಗ್ಸ್ ದೊಡ್ಡ ಅಡ್ಡಿಯಾಗಿರುವುದರಿಂದ, ಯುವಕ-ಯುವತಿಯರು ಮಾದಕ ವಸ್ತುಗಳಿಂದ ಸಂಪೂರ್ಣ ದೂರವಿರಬೇಕು ಎಂದು ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್. ಕರೆ ನೀಡಿದರು.

ಶನಿವಾರ ಕಾರವಾರದ ಮಯೂರ ವರ್ಮ ವೇದಿಕೆಯಲ್ಲಿ ಉತ್ತರ ಕನ್ನಡ ಜಿಲ್ಲಾ ಪೊಲೀಸ್, ಕಾರವಾರ ಉಪವಿಭಾಗ ಹಾಗೂ ಕಾರವಾರ ಶಹರ ಪೊಲೀಸ್ ಠಾಣೆ ವತಿಯಿಂದ ಅಂತಾರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ಸಪ್ತಾಹ ಅಂಗವಾಗಿ ಹಮ್ಮಿಕೊಂಡಿದ್ದ ಮಾದಕ ವಸ್ತುಗಳ ಬಳಕೆ ಮತ್ತು ಪೂರೈಕೆಯನ್ನು ತಡೆಗಟ್ಟುವ ಜಾಗೃತಿ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಡ್ರಗ್ಸ್ ಅನ್ನು ಕ್ಯಾನ್ಸರ್‌ಗೆ ಹೋಲಿಸಿದ ಎಸ್ಪಿ ದೀಪನ್, “ಕ್ಯಾನ್ಸರ್ ಹೇಗೆ ದೇಹವನ್ನು ನಾಶಪಡಿಸುತ್ತದೆಯೋ, ಅದೇ ರೀತಿ ಡ್ರಗ್ಸ್ ಸಮಾಜವನ್ನೇ ಒಳಗಿನಿಂದ ಹಾಳು ಮಾಡುತ್ತದೆ. ಈ ಮಾರಕ ವ್ಯಸನ ಸಮಾಜದಲ್ಲಿ ವ್ಯಾಪಕವಾಗಿ ಹರಡದಂತೆ ಪ್ರತಿಯೊಬ್ಬರೂ ಎಚ್ಚರಿಕೆ ವಹಿಸಬೇಕು” ಎಂದು ಹೇಳಿದರು.

ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಡ್ರಗ್ಸ್‌ನ ದುಷ್ಪರಿಣಾಮಗಳ ಕುರಿತು ಪೊಲೀಸ್ ಇಲಾಖೆ ನಿರಂತರವಾಗಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ. ಮಾದಕ ವಸ್ತುಗಳ ಸೇವನೆ ಹಾಗೂ ಮಾರಾಟದಲ್ಲಿ ತೊಡಗಿರುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ಎಂದೂ ಅವರು ಎಚ್ಚರಿಕೆ ನೀಡಿದರು.

ಬಳಿಕ ಮಯೂರ ವರ್ಮ ವೇದಿಕೆಯಿಂದ ಡಿ.ಸಿ. ಕಚೇರಿ ವೃತ್ತ, ಪಿಕಳೆ ರಸ್ತೆ, ಗ್ರೀನ್ ಸ್ಟ್ರೀಟ್, ಸುಭಾಷ್ ಸರ್ಕಲ್ ಹಾಗೂ ಬಸ್ ನಿಲ್ದಾಣ ಸೇರಿದಂತೆ ನಗರದ ಪ್ರಮುಖ ಬೀದಿಗಳಲ್ಲಿ ವಿದ್ಯಾರ್ಥಿಗಳು ಮತ್ತು ಪೊಲೀಸ್ ಸಿಬ್ಬಂದಿ ಡ್ರಗ್ಸ್ ವಿರೋಧಿ ಜಾಥಾ ನಡೆಸಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದರು.

ಕಾರ್ಯಕ್ರಮದಲ್ಲಿ ವಿವಿಧ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು, ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಭಾಗವಹಿಸಿದ್ದರು.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರನಾಗಿ, ಉಪ ಸಂಪಾದಕನಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತನಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad

Most Popular

error: Content is protected !!
Share