ಕಾರವಾರ: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜಿಲ್ಲೆಯಾದ್ಯಂತ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (Special Intensive Revision) ಪ್ರಕ್ರಿಯೆ ಜೂನ್ 20ರಿಂದ ಆರಂಭವಾಗಲಿದ್ದು, ಈ ಕಾರ್ಯವನ್ನು ಯಶಸ್ವಿಯಾಗಿ ಪೂರ್ಣಗೊಳಿಸಲು ಸಾರ್ವಜನಿಕರು ಅಗತ್ಯ ಸಹಕಾರ ನೀಡಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಮನವಿ ಮಾಡಿದರು.
ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜೂನ್ 30ರಿಂದ ಜುಲೈ 29ರವರೆಗೆ ಮತಗಟ್ಟೆ ಮಟ್ಟದ ಅಧಿಕಾರಿಗಳು (ಬಿಎಲ್ಒಗಳು) ಮನೆ ಮನೆಗೆ ಭೇಟಿ ನೀಡಿ ಮತದಾರರಿಗೆ ಪ್ರಿ-ಫಿಲ್ಡ್ ಎನ್ಯುಮರೇಷನ್ ಫಾರ್ಮ್ಗಳನ್ನು ವಿತರಿಸಲಿದ್ದಾರೆ. ಬಳಿಕ ಭರ್ತಿ ಮಾಡಿದ ಅರ್ಜಿಗಳನ್ನು ಸಂಗ್ರಹಿಸಲು ಮೂರು ಬಾರಿ ಭೇಟಿ ನೀಡಲಿದ್ದು, ಬಿಎಲ್ಒಗಳು ಮನೆಗೆ ಬಂದಾಗ ಫಾರ್ಮ್ಗಳನ್ನು ಭರ್ತಿ ಮಾಡಿ ಹಿಂದಿರುಗಿಸುವುದು ಕಡ್ಡಾಯವಾಗಿದೆ. ಫಾರ್ಮ್ ಸಲ್ಲಿಸದಿದ್ದರೆ ಕರಡು ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಯಾಗುವುದಿಲ್ಲ ಎಂದು ತಿಳಿಸಿದರು.
ಪ್ರಿ-ಫಿಲ್ಡ್ ಅರ್ಜಿಯಲ್ಲಿ ಮತದಾರರ ಹೆಸರು, ಎಪಿಕ್ ಸಂಖ್ಯೆ, ವಿಳಾಸ, ಭಾಗ ಸಂಖ್ಯೆ, ಕ್ರಮ ಸಂಖ್ಯೆ ಹಾಗೂ ಪ್ರಸ್ತುತ ಚಾಲ್ತಿಯಲ್ಲಿರುವ ಭಾವಚಿತ್ರ ಮುದ್ರಿತವಾಗಿರುತ್ತದೆ. ಅರ್ಜಿಯ ಎರಡು ಪ್ರತಿಗಳ ಮೇಲೂ ಮತದಾರರು ಅಥವಾ ಅವರ ಕುಟುಂಬದ ಸದಸ್ಯರು ಹಾಗೂ ಬಿಎಲ್ಒ ಸಹಿ ಮಾಡಬೇಕಾಗುತ್ತದೆ. ಜೊತೆಗೆ ಇತ್ತೀಚಿನ ಬಣ್ಣದ ಭಾವಚಿತ್ರವನ್ನು ನೀಡಬೇಕು. ಆದರೆ ಅರ್ಜಿಯೊಂದಿಗೆ ಯಾವುದೇ ದಾಖಲೆಗಳನ್ನು ಸಲ್ಲಿಸುವ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.
ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕಾಗಿ ಜಿಲ್ಲೆಯಲ್ಲಿ 6 ಮತದಾರರ ನೋಂದಣಾಧಿಕಾರಿಗಳು, 12 ಸಹಾಯಕ ಮತದಾರರ ನೋಂದಣಾಧಿಕಾರಿಗಳು, 1,445 ಬಿಎಲ್ಒಗಳು ಹಾಗೂ 144 ಬಿಎಲ್ಒ ಮೇಲ್ವಿಚಾರಕರನ್ನು ನೇಮಿಸಲಾಗಿದೆ. ಜಿಲ್ಲಾ, ವಿಧಾನಸಭಾ ಕ್ಷೇತ್ರ ಹಾಗೂ ಹೋಬಳಿ ಮಟ್ಟದಲ್ಲಿಯೂ ನೋಡಲ್ ಅಧಿಕಾರಿಗಳನ್ನು ನಿಯೋಜಿಸಲಾಗಿದೆ ಎಂದು ಹೇಳಿದರು.
ಜಿಲ್ಲೆಯಲ್ಲಿ ಪ್ರಸ್ತುತ 12,30,016 ಮತದಾರರಿದ್ದು, ಪೂರ್ವಸಿದ್ಧತಾ ಕಾರ್ಯದ ಭಾಗವಾಗಿ ಮತದಾರರ ಮಾಹಿತಿಯ ಶೇ.93.47ರಷ್ಟು ಪರಿಶೀಲನೆ (ಮ್ಯಾಪಿಂಗ್) ಪೂರ್ಣಗೊಂಡಿದೆ. ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆ ಆರಂಭವಾಗುವವರೆಗೂ ಈ ಕಾರ್ಯ ಮುಂದುವರಿಯಲಿದೆ ಎಂದು ತಿಳಿಸಿದರು.
ಆಗಸ್ಟ್ 5ರಂದು ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುವುದು. ಸೆಪ್ಟೆಂಬರ್ 4ರವರೆಗೆ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶವಿರುತ್ತದೆ. ಅಕ್ಟೋಬರ್ 3ರೊಳಗೆ ಹಕ್ಕು ಮತ್ತು ಆಕ್ಷೇಪಣೆಗಳ ವಿಲೇವಾರಿ ಪೂರ್ಣಗೊಳಿಸಿ, ಅಕ್ಟೋಬರ್ 7ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದರು.
ಭಾರತದ ನಾಗರಿಕರಾಗಿದ್ದು, ಅರ್ಹತಾ ದಿನಾಂಕಕ್ಕೆ 18 ವರ್ಷ ಪೂರೈಸಿರುವ ಹಾಗೂ ಯಾವುದೇ ಕಾನೂನಿನ ಅಡಿಯಲ್ಲಿ ಅನರ್ಹಗೊಳಿಸದ ಪ್ರತಿಯೊಬ್ಬರೂ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಳ್ಳಲು ಅರ್ಹರಾಗಿದ್ದಾರೆ. ಅರ್ಹ ನಾಗರಿಕರ ಹೆಸರು ಮತದಾರರ ಪಟ್ಟಿಯಿಂದ ಕೈಬಿಟ್ಟು ಹೋಗದಂತೆ ವಿಶೇಷ ಗಮನ ವಹಿಸಲಾಗುವುದು. ಮತದಾರರ ಪಟ್ಟಿಯ ಪರಿಷ್ಕರಣೆ ಅಥವಾ ಎನ್ಯುಮರೇಷನ್ ಫಾರ್ಮ್ ಭರ್ತಿಗೆ ಸಂಬಂಧಿಸಿದಂತೆ ಯಾವುದೇ ಗೊಂದಲಗಳಿದ್ದರೆ ತಮ್ಮ ವ್ಯಾಪ್ತಿಯ ಬಿಎಲ್ಒಗಳನ್ನು ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ ಉಪಸ್ಥಿತರಿದ್ದರು.