ಶಿರಸಿ: ಜಿಲ್ಲೆಯಲ್ಲಿ ಅತಿವೃಷ್ಟಿ ಹಾಗೂ ಅನಾವೃಷ್ಟಿಯಿಂದ ಉಂಟಾಗಿರುವ ಹಾನಿಯ ಸಮಗ್ರ ವರದಿಯನ್ನು ಮೂರು ದಿನಗಳೊಳಗೆ ಸಲ್ಲಿಸುವಂತೆ ಅಧಿಕಾರಿಗಳಿಗೆ ಸಚಿವ ಲಕ್ಷ್ಮಣ ಸವದಿ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಶುಕ್ರವಾರ ಶಿರಸಿಯ ಮಿನಿ ವಿಧಾನಸೌಧದಲ್ಲಿ ನಡೆದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮುಖ್ಯಮಂತ್ರಿಗಳ ನಿರ್ದೇಶನದಂತೆ ಪ್ರತಿ ವಿಧಾನಸಭಾ ಕ್ಷೇತ್ರವಾರು ಹಾನಿಯ ನಿಖರ ವಿವರ ಸಂಗ್ರಹಿಸಿ ಸರ್ಕಾರಕ್ಕೆ ಸಲ್ಲಿಸಬೇಕು ಎಂದು ತಿಳಿಸಿದರು.
ಮಳೆಗಾಲದಲ್ಲಿ ಗ್ರಾಮೀಣ ಭಾಗಗಳಲ್ಲಿ ವಿದ್ಯುತ್ ಸಮಸ್ಯೆ ತೀವ್ರವಾಗುತ್ತಿರುವುದನ್ನು ಉಲ್ಲೇಖಿಸಿದ ಸಚಿವರು, ವಿದ್ಯುತ್ ವ್ಯತ್ಯಯವನ್ನು ನಿಗದಿತ ಅವಧಿಯಲ್ಲಿ ಸರಿಪಡಿಸದ ಅಧಿಕಾರಿಗಳಿಗೆ ನೋಟಿಸ್ ನೀಡುವಂತೆ ಹೆಸ್ಕಾಂ ಅಧಿಕಾರಿಗಳಿಗೆ ಸೂಚಿಸಿದರು. ಶಾರ್ಟ್ ಸರ್ಕ್ಯೂಟ್ ತಡೆಗಟ್ಟಲು ತಕ್ಷಣವೇ ಜಂಗಲ್ ಕಟಿಂಗ್ ಕೈಗೊಳ್ಳುವಂತೆಯೂ ನಿರ್ದೇಶಿಸಿದರು.
ಸಭೆಯಲ್ಲಿ ಮಾತನಾಡಿದ ಶಿರಸಿ-ಸಿದ್ದಾಪುರ ಶಾಸಕ ಭೀಮಣ್ಣ ನಾಯ್ಕ, ಜೀವನೋಪಾಯಕ್ಕಾಗಿ ರೈತರು ನೆಟ್ಟಿರುವ ಅಡಕೆ ಗಿಡಗಳನ್ನು ತೆರವುಗೊಳಿಸಬಾರದು. ಹೊಸ ಅತಿಕ್ರಮಣವನ್ನು ಬೆಂಬಲಿಸುವುದಿಲ್ಲ, ಆದರೆ ಹಳೆಯ ಅತಿಕ್ರಮಣದಾರರು ಮತ್ತು ರೈತರಿಗೆ ಅರಣ್ಯ ಇಲಾಖೆ ಅನಗತ್ಯ ತೊಂದರೆ ನೀಡಬಾರದು ಎಂದು ಹೇಳಿದರು.
ಇದಕ್ಕೆ ಬೆಂಬಲ ವ್ಯಕ್ತಪಡಿಸಿದ ಯಲ್ಲಾಪುರ ಶಾಸಕ ಶಿವರಾಮ ಹೆಬ್ಬಾರ್, ಹಳೆಯ ಅತಿಕ್ರಮಣದಾರರಿಗೆ ಕಿರುಕುಳ ನೀಡಬಾರದು ಎಂದು ಆಗ್ರಹಿಸಿದರು. ರೈತರ ವಿಶ್ವಾಸ ಗಳಿಸದಿದ್ದರೆ ಅರಣ್ಯಕ್ಕೆ ಬೆಂಕಿ ಬಿದ್ದಾಗ ಅದನ್ನು ನಿಯಂತ್ರಿಸುವುದೂ ಕಷ್ಟವಾಗುತ್ತದೆ ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.
ಸಭೆಯಲ್ಲಿ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಸತೀಶ್ ನಾಯ್ಕ, ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ದಿಲೀಷ್ ಶಶಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್., ಉಪವಿಭಾಗಾಧಿಕಾರಿ ಚಂದ್ರಶೇಖರ, ತಹಶೀಲ್ದಾರ್ ಪಟ್ಟರಾಜಗೌಡ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
submit-flood-drought-damage-report-within-three-days-says-laxman-savadi