ಕಾರವಾರ: ಜಿಲ್ಲೆಯಲ್ಲಿ ಜನಪರ ಹಾಗೂ ಪಾರದರ್ಶಕ ಆಡಳಿತ ನೀಡುವ ನಿಟ್ಟಿನಲ್ಲಿ ಎಲ್ಲ ಇಲಾಖೆಗಳ ಅಧಿಕಾರಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು ಸರ್ಕಾರಿ ನೌಕರರೊಂದಿಗೆ ನಡೆಸಿದ ಸಂವಾದದಲ್ಲಿ ನೀಡಿರುವ ಸೂಚನೆಗಳನ್ನು ಜಿಲ್ಲೆಯಲ್ಲಿ ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಅಧಿಕಾರಿಗಳಿಗೆ ಸೂಚಿಸಿದರು.
ಕ್ರಿಮ್ಸ್ನಲ್ಲಿ ಮಂಗಳವಾರ ನಡೆದ ಸರ್ಕಾರಿ ನೌಕರರು ಹಾಗೂ ಮುಖ್ಯಮಂತ್ರಿಗಳ ನಡುವಿನ ಸಂವಾದ ಕಾರ್ಯಕ್ರಮದ ಬಳಿಕ ಜಿಲ್ಲೆಯಲ್ಲಿ ಸಾರ್ವಜನಿಕ ಸೇವೆ, ಆಡಳಿತ ವ್ಯವಸ್ಥೆ ಹಾಗೂ ಇಲಾಖೆಗಳ ಕಾರ್ಯನಿರ್ವಹಣೆ ಕುರಿತು ಅಧಿಕಾರಿಗಳಿಗೆ ನಿರ್ದೇಶನ ನೀಡಿದ ಅವರು, ಜಿಲ್ಲೆಯ ಆಡಳಿತ ವ್ಯವಸ್ಥೆ ಒಂದು ತಂಡದಂತೆ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.
ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿ ತಮ್ಮ ನಿಯೋಜಿತ ಕೇಂದ್ರಸ್ಥಾನದಲ್ಲೇ ಕಡ್ಡಾಯವಾಗಿ ವಾಸಿಸಬೇಕು. ಕೇಂದ್ರಸ್ಥಾನದಿಂದ ಹೊರಗಡೆ ವಾಸವಿದ್ದು ಕರ್ತವ್ಯ ನಿರ್ವಹಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಆಗಸ್ಟ್ 15ರೊಳಗೆ ಜಿಲ್ಲೆಯ ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿಯ ಹೆಸರು, ಕಚೇರಿ ವಿಳಾಸ, ಮೊಬೈಲ್ ಸಂಖ್ಯೆ ಹಾಗೂ ವಾಸದ ವಿಳಾಸದ ವಿವರಗಳನ್ನು ಕ್ರೋಢೀಕರಿಸಿ ಅಧಿಕೃತ ಕೈಪಿಡಿ ಸಿದ್ಧಪಡಿಸಲಾಗುವುದು ಎಂದರು.
ಸರ್ಕಾರಿ ಕಚೇರಿಗಳಲ್ಲಿ ಭ್ರಷ್ಟಾಚಾರಕ್ಕೆ ಯಾವುದೇ ಅವಕಾಶ ನೀಡಬಾರದು. ಸಾರ್ವಜನಿಕರಿಗೆ ಸುಲಭವಾಗಿ ಕಾಣುವಂತೆ ಭ್ರಷ್ಟಾಚಾರ ದೂರು ಸಲ್ಲಿಸಲು ಅಗತ್ಯವಿರುವ ದೂರವಾಣಿ ಸಂಖ್ಯೆ ಹಾಗೂ ಮಾಹಿತಿಯ ಫಲಕಗಳನ್ನು ಕಡ್ಡಾಯವಾಗಿ ಅಳವಡಿಸಬೇಕು ಎಂದು ತಿಳಿಸಿದರು.
ಸಾರ್ವಜನಿಕರ ಕುಂದುಕೊರತೆಗಳಿಗೆ ತ್ವರಿತ ಪರಿಹಾರ ಒದಗಿಸುವ ಉದ್ದೇಶದಿಂದ ರೂಪಿಸಿರುವ ‘ಪ್ರಜಾಸೇವೆ’ ವ್ಯವಸ್ಥೆಯನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳುವಂತೆ ಸೂಚಿಸಿದ ಅವರು, ಜಿಲ್ಲೆ, ತಾಲೂಕು ಹಾಗೂ ಹೋಬಳಿ ಮಟ್ಟದಲ್ಲಿ ಜನಸ್ಪಂದನ ಸಭೆಗಳನ್ನು ನಡೆಸಿ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿ ಪರಿಹರಿಸಲು ಆದ್ಯತೆ ನೀಡಬೇಕು ಎಂದರು.
ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ಶೇ.100ರಷ್ಟು ಡಿಜಿಟಲೀಕರಣ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿ ತಮ್ಮ ಹೆಸರು ಹಾಗೂ ವಿವರಗಳು ಮತದಾರರ ಪಟ್ಟಿಯಲ್ಲಿ ಸರಿಯಾಗಿವೆಯೇ ಎಂಬುದನ್ನು ಪರಿಶೀಲಿಸಿಕೊಳ್ಳಬೇಕು. ತಪ್ಪಿದ್ದಲ್ಲಿ ಅಗತ್ಯ ದಾಖಲೆಗಳೊಂದಿಗೆ ತಿದ್ದುಪಡಿ ಮಾಡಿಕೊಳ್ಳಬಹುದು ಎಂದು ಸೂಚಿಸಿದರು.
ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ದಿಲೀಷ್ ಶಶಿ ಮಾತನಾಡಿ, ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ನೀಡುವ ನಿರ್ದೇಶನಗಳು ಕೆಳಹಂತದ ಸಿಬ್ಬಂದಿಗೂ ತಲುಪಿ, ಅವುಗಳ ಸಮರ್ಪಕ ಅನುಷ್ಠಾನವಾಗಬೇಕು. ಜಿಲ್ಲೆಯ ಕರ್ತವ್ಯ ನಿರ್ವಹಣೆಗೆ ರಾಜ್ಯ ಮಟ್ಟದಲ್ಲಿ ಉತ್ತಮ ಹೆಸರಿದ್ದು, ಅದನ್ನು ಮತ್ತಷ್ಟು ಹೆಚ್ಚಿಸಬೇಕು ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್., ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.
ಇದಕ್ಕೂ ಮುನ್ನ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ನಡೆದ ರಾಜ್ಯಮಟ್ಟದ ಸಂವಾದದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ‘ಟೀಮ್ ಕರ್ನಾಟಕ’ ಪರಿಕಲ್ಪನೆಯಡಿ ಎಲ್ಲರೂ ಒಟ್ಟಾಗಿ ಕೆಲಸ ಮಾಡಿ ಜನರ ಸಮಸ್ಯೆಗಳಿಗೆ ಸ್ಪಂದಿಸುವಂತೆ ಸರ್ಕಾರಿ ನೌಕರರಿಗೆ ಕರೆ ನೀಡಿದ್ದರು. ರಾಜ್ಯದ 750 ಸ್ಥಳಗಳಲ್ಲಿ ಏಕಕಾಲದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸುಮಾರು 2.50 ಲಕ್ಷ ಅಧಿಕಾರಿಗಳು ಹಾಗೂ ನೌಕರರು ಭಾಗವಹಿಸಿದ್ದರು.