ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಭರವಸೆ
ಮೈಸೂರು: ಮಾರುಕಟ್ಟೆಯಲ್ಲಿ ತಂಬಾಕು ಬೆಲೆ ಕುಸಿತದಿಂದ ಸಂಕಷ್ಟಕ್ಕೀಡಾದ ರೈತರ ಸಮಸ್ಯೆಗೆ ಕೇಂದ್ರ ಸರ್ಕಾರ ಶೀಘ್ರದಲ್ಲೇ ಕ್ರಮ ಕೈಗೊಳ್ಳಲಿದೆ ಎಂದು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಭರವಸೆ ನೀಡಿದ್ದಾರೆ.
ನವದೆಹಲಿಯಲ್ಲಿ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಹಾಗೂ ಕೇಂದ್ರ ಬೃಹತ್ ಕೈಗಾರಿಕಾ ಸಚಿವ ಹೆಚ್.ಡಿ. ಕುಮಾರಸ್ವಾಮಿ ನೇತೃತ್ವದ ನಿಯೋಗವು ಸಚಿವರನ್ನು ಭೇಟಿ ಮಾಡಿ ತಂಬಾಕು ಬೆಳೆಗಾರರು ಎದುರಿಸುತ್ತಿರುವ ಬೆಲೆ ಕುಸಿತದ ಸಮಸ್ಯೆಯನ್ನು ವಿವರಿಸಿತು. ಮೈಸೂರು, ಹಾಸನ ಸೇರಿದಂತೆ ಹಲವು ಭಾಗಗಳಲ್ಲಿ ತಂಬಾಕು ಬೆಲೆ ಗಣನೀಯವಾಗಿ ಕುಸಿದಿದ್ದು, ರೈತರು ಹಾಕಿದ ವೆಚ್ಚವೂ ವಾಪಸ್ ಸಿಗದ ಸ್ಥಿತಿ ಉಂಟಾಗಿದೆ ಎಂದು ನಿಯೋಗವು ತಿಳಿಸಿತು.
ಈ ಕುರಿತು ಪ್ರತಿಕ್ರಿಯಿಸಿದ ಸಚಿವ ಪಿಯೂಷ್ ಗೋಯಲ್, ಬೆಲೆ ಕುಸಿತದ ಕಾರಣಗಳನ್ನು ಪರಿಶೀಲಿಸಿ ತಂಬಾಕು ಮಂಡಳಿ ಹಾಗೂ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ರೈತರಿಗೆ ಅನ್ಯಾಯವಾಗದಂತೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಈ ವೇಳೆ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಶಾಸಕ ಜಿ.ಟಿ. ದೇವೇಗೌಡ, ಸಾ.ರಾ. ಮಹೇಶ್, ಅಶ್ವಿನ್ ಕುಮಾರ್, ಹರೀಶ್ ಗೌಡ, ಕೆ. ಮಹದೇವ್, ಎ. ಮಂಜು ಸೇರಿದಂತೆ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.