ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಪ್ರವಾಸೋದ್ಯಮ ಕ್ಷೇತ್ರದ ಬೆಳವಣಿಗೆಗೆ ಹೆಚ್ಚಿನ ಉತ್ತೇಜನ ನೀಡುವ ನಿಟ್ಟಿನಲ್ಲಿ ಬ್ಯಾಂಕ್‌ಗಳು ಪ್ರವಾಸೋದ್ಯಮ ಚಟುವಟಿಕೆಗಳಿಗೆ ಆದ್ಯತೆಯ ಆಧಾರದ ಮೇಲೆ ಸಾಲ ವಿತರಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ದಿಲೀಷ್ ಶಶಿ ಸೂಚಿಸಿದರು.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಲೀಡ್ ಬ್ಯಾಂಕ್ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕರಾವಳಿ ಜಿಲ್ಲೆಗಳಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ರಾಜ್ಯ ಸರ್ಕಾರ ವಿಶೇಷ ಗಮನ ಹರಿಸಿದ್ದು, ಕಾರವಾರ ವಿಮಾನ ನಿಲ್ದಾಣವೂ ಶೀಘ್ರದಲ್ಲೇ ಕಾರ್ಯಾರಂಭ ಮಾಡುವ ನಿರೀಕ್ಷೆಯಿದೆ ಎಂದರು.
ಮುಂದಿನ 5-6 ವರ್ಷಗಳಲ್ಲಿ ಜಿಲ್ಲೆಯಲ್ಲಿ ಹೂಡಿಕೆ ಹಾಗೂ ಪ್ರವಾಸೋದ್ಯಮ ಚಟುವಟಿಕೆಗಳು ಹೆಚ್ಚಾಗಲಿರುವುದರಿಂದ, ಹೊಸ ಉದ್ಯಮಗಳು ಹಾಗೂ ಬಂಡವಾಳ ಹೂಡಿಕೆದಾರರಿಗೆ ಬ್ಯಾಂಕ್‌ಗಳು ಹೆಚ್ಚಿನ ಪ್ರಮಾಣದಲ್ಲಿ ಸಾಲ ಸೌಲಭ್ಯ ಒದಗಿಸಬೇಕು ಎಂದು ತಿಳಿಸಿದರು.
ಮಾರ್ಚ್ 2026ರ ಅಂತ್ಯಕ್ಕೆ ಜಿಲ್ಲೆಯ ಬ್ಯಾಂಕ್‌ಗಳಲ್ಲಿ ₹27,064 ಕೋಟಿ ಠೇವಣಿ ಸಂಗ್ರಹವಾಗಿದ್ದರೆ, ₹12,528 ಕೋಟಿ ಸಾಲ ವಿತರಣೆ ಮಾಡಲಾಗಿದೆ. ಪ್ರಸ್ತುತ ಸಾಲ-ಠೇವಣಿ ಅನುಪಾತ ಶೇ.46.29ರಷ್ಟಿದ್ದು, ಈ ಪ್ರಮಾಣವನ್ನು ಹೆಚ್ಚಿಸಲು ಎಲ್ಲ ಬ್ಯಾಂಕ್‌ಗಳು ಪ್ರತ್ಯೇಕ ಕಾರ್ಯಯೋಜನೆ ರೂಪಿಸಿ ಗುರಿ ಸಾಧಿಸಬೇಕು ಎಂದು ನಿರ್ದೇಶನ ನೀಡಿದರು.
ಸಭೆಯಲ್ಲಿ ವಿವಿಧ ಸರ್ಕಾರಿ ಯೋಜನೆಗಳಡಿ ಬ್ಯಾಂಕ್‌ಗಳಿಂದ ನೀಡಲಾಗುತ್ತಿರುವ ಸಾಲ ಸೌಲಭ್ಯಗಳ ಪ್ರಗತಿ ಕುರಿತು ವಿಸ್ತೃತ ಚರ್ಚೆ ನಡೆಯಿತು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ಕರೀಂ ಅಸಾದಿ, ಮುಖ್ಯ ಯೋಜನಾಧಿಕಾರಿ ಸೋಮಶೇಖರ ಮೇಸ್ತಾ, ಮುಖ್ಯ ಲೆಕ್ಕಾಧಿಕಾರಿ ಆನಂದಸಾ ಹಬೀಬ್, ಕೆನರಾ ಬ್ಯಾಂಕ್ ಪ್ರಾದೇಶಿಕ ವ್ಯವಸ್ಥಾಪಕ ನಾಗರಾಜ್, ನಬಾರ್ಡ್ ವ್ಯವಸ್ಥಾಪಕ ಸುಶೀಲ್, ಲೀಡ್ ಬ್ಯಾಂಕ್ ವ್ಯವಸ್ಥಾಪಕ ರಾಜಪ್ಪ ಸೇರಿದಂತೆ ವಿವಿಧ ಇಲಾಖೆಗಳು ಹಾಗೂ ಬ್ಯಾಂಕ್‌ಗಳ ಅಧಿಕಾರಿಗಳು ಉಪಸ್ಥಿತರಿದ್ದರು.