ಕಾರವಾರ: ಜಿಲ್ಲೆಯಲ್ಲಿರುವ ಎಲ್ಲಾ ಕೈಗಾರಿಕಾ ಪ್ರದೇಶಗಳಿಗೆ ಸಂಬಂಧಪಟ್ಟ ನಗರ ಸ್ಥಳೀಯ ಸಂಸ್ಥೆಗಳ ಮೂಲಕ ಅಗತ್ಯವಿರುವ ಎಲ್ಲ ರೀತಿಯ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಕೈಗಾರಿಕಾ ಸ್ಪಂದನ ಸಮಿತಿ ಹಾಗೂ ಏಕ ಗವಾಕ್ಷಿ ಒಪ್ಪಿಗೆ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಭಟ್ಕಳ, ದಾಂಡೇಲಿ, ಹಳಿಯಾಳ, ಕುಮಟಾ, ಯಲ್ಲಾಪುರ, ಶಿರಸಿ, ಶಿರವಾಡ ಹಾಗೂ ರಾಮನಗರದಲ್ಲಿರುವ ಕೈಗಾರಿಕಾ ವಸಾಹತು ಪ್ರದೇಶಗಳಲ್ಲಿ ಅಗತ್ಯವಿರುವ ಮೂಲಭೂತ ಸೌಕರ್ಯಗಳ ಕುರಿತು ಕೈಗಾರಿಕಾ ಇಲಾಖೆಯ ಅಧಿಕಾರಿಗಳು ಉದ್ದಿಮೆದಾರರಿಂದ ಬೇಡಿಕೆ ಪಡೆದು ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳಿಗೆ ಸಲ್ಲಿಸಬೇಕು.
ನಗರ ಸ್ಥಳೀಯ ಸಂಸ್ಥೆಗಳು ತಮ್ಮ ವ್ಯಾಪ್ತಿಯಲ್ಲಿನ ಬೇಡಿಕೆಗಳನ್ನು ಪ್ರಸಕ್ತ ಸಾಲಿನ ಕ್ರಿಯಾ ಯೋಜನೆಯಲ್ಲಿ ನಮೂದಿಸಿ, ಕೂಡಲೇ ಪ್ರಸ್ತಾವನೆ ಸಲ್ಲಿಸಿ ಕಾಮಗಾರಿಗಳನ್ನು ಕೈಗೊಳ್ಳಬೇಕು ಎಂದು ಸೂಚಿಸಿದರು.
ಜಿಲ್ಲೆಯಲ್ಲಿ ಹಲವು ವರ್ಷಗಳಿಂದ ಬಾಕಿ ಇದ್ದ ಕೈಗಾರಿಕಾ ವಸಾಹತುಗಳಿಗೆ ಸಂಬಂಧಿಸಿದ ನಕ್ಷೆಗಳನ್ನು ಸರಿಪಡಿಸಿ ಇ-ಸ್ವತ್ತು ನೀಡುವ ಕಾರ್ಯದಲ್ಲಿ ಸಂಬಂಧಪಟ್ಟ ಎಲ್ಲ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸುತ್ತಿರುವುದಕ್ಕೆ ಪ್ರಶಂಸೆ ವ್ಯಕ್ತಪಡಿಸಿದ ಜಿಲ್ಲಾಧಿಕಾರಿಗಳು, ಬಾಕಿ ಇರುವ ಎಲ್ಲ ಪ್ರಕರಣಗಳನ್ನು ಶೀಘ್ರವಾಗಿ ಮುಕ್ತಾಯಗೊಳಿಸುವಂತೆ ತಿಳಿಸಿದರು.
ಕೈಗಾರಿಕಾ ವಸಾಹತುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹಾಗೂ ಸ್ಥಗಿತಗೊಂಡಿರುವ ಘಟಕಗಳ ಮಾಹಿತಿಯನ್ನು ಪಡೆಯಲು ಪ್ರತಿಯೊಂದು ಕೈಗಾರಿಕಾ ವಸಾಹತಿಗೂ ಖುದ್ದು ಭೇಟಿ ನೀಡಿ, ದಾಖಲೆಗಳನ್ನು ಪರಿಶೀಲಿಸಿ ವಸ್ತುಸ್ಥಿತಿಯ ವರದಿ ನೀಡುವಂತೆ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧಿಕಾರಿಗಳಿಗೆ ಸೂಚಿಸಿದರು.
ರಾಮನಗರ ಮತ್ತು ಕುಮಟಾ ಕೈಗಾರಿಕಾ ವಸಾಹತುಗಳಿಗೆ ನಿರಂತರ ವಿದ್ಯುತ್ ಪೂರೈಕೆ ಮಾಡಲು 33/1 ಕೆ.ವಿ. ಸಾಮರ್ಥ್ಯದ ವಿದ್ಯುತ್ ಉಪಕೇಂದ್ರ ಸ್ಥಾಪಿಸುವ ಕುರಿತು ಹಾಗೂ ಅಂಬೇವಾಡಿ ಆಟೋ ನಗರ ಕೈಗಾರಿಕಾ ಪ್ರದೇಶದಲ್ಲಿ ನಿವೇಶನ ಹಂಚಿಕೆ ಕುರಿತು ಕೆಐಎಡಿಬಿ ನಿರ್ದೇಶನದಂತೆ ಕ್ರಮ ಕೈಗೊಳ್ಳಬೇಕು. ಕುಮಟಾ ತಾಲೂಕಿನ ಮಿರ್ಜಾನ್‌ನಲ್ಲಿನ ವಿಶ್ವ ಮಳಿಗೆ ನೋಂದಣಿ ಕುರಿತು ಅಗತ್ಯ ಕ್ರಮ ಕೈಗೊಳ್ಳುವಂತೆ ತಿಳಿಸಿದರು.
ಕುಮಟಾ ಕೈಗಾರಿಕಾ ಪ್ರದೇಶಕ್ಕೆ ಪ್ರತ್ಯೇಕ ಫೀಡರ್ ಅಳವಡಿಸಲು ಅಂದಾಜುಪಟ್ಟಿ ಮಂಜೂರಾಗಿದ್ದು, ರೈಲ್ವೆ ಟ್ರ್ಯಾಕ್‌ನ ಕೆಳಗೆ ಭೂಗತ ಕೇಬಲ್ ಅಳವಡಿಸುವ ಕಾಮಗಾರಿ ಬಾಕಿ ಇದೆ. ಈ ಸಂಪೂರ್ಣ ಕಾಮಗಾರಿ ಒಂದು ತಿಂಗಳೊಳಗೆ ಮುಕ್ತಾಯವಾಗಲಿದೆ ಎಂದು ಹೆಸ್ಕಾಂ ಅಧಿಕಾರಿಗಳು ಸಭೆಗೆ ತಿಳಿಸಿದರು.
ಜಿಲ್ಲೆಯ ಕೈಗಾರಿಕಾ ಘಟಕಗಳಲ್ಲಿ ಅಗತ್ಯವಿರುವ ತಾಂತ್ರಿಕ ಕೌಶಲ್ಯದ ಸಿಬ್ಬಂದಿಗಳ ಕುರಿತು ಕೈಗಾರಿಕೋದ್ಯಮಿಗಳಿಂದ ಮಾಹಿತಿ ಹಾಗೂ ಬೇಡಿಕೆ ಪಡೆದು, ಜಿಲ್ಲೆಯ ಐಟಿಐ ಮತ್ತು ಡಿಪ್ಲೊಮಾ ಕಾಲೇಜುಗಳ ಮುಖ್ಯಸ್ಥರೊಂದಿಗೆ ಚರ್ಚಿಸಿ, ಕೈಗಾರಿಕೆಗಳ ಬೇಡಿಕೆಗೆ ಅನುಗುಣವಾಗಿ ವಿದ್ಯಾರ್ಥಿಗಳಿಗೆ ಅಗತ್ಯ ಕೌಶಲ್ಯ ತರಬೇತಿ ಆಯೋಜಿಸುವಂತೆ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ನಾಗರಾಜ ನಾಯ್ಕ, ಜಿ.ಪಂ. ಉಪ ಕಾರ್ಯದರ್ಶಿ ಪ್ರಕಾಶ್ ಹಾಲಮ್ಮನವರ್, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಜಹೀರ್ ಅಬ್ಬಾಸ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.


