Friday, July 24, 2026
Join WhatsApp Group
HomeLocal Newsಉತ್ತರ ಕನ್ನಡಕ್ಕೆ ಆರೆಂಜ್ ಅಲರ್ಟ್

ಉತ್ತರ ಕನ್ನಡಕ್ಕೆ ಆರೆಂಜ್ ಅಲರ್ಟ್

ಜುಲೈ 2ರವರೆಗೆ ಭಾರಿ ಮಳೆ ಸಾಧ್ಯತೆ, ಎಚ್ಚರ ವಹಿಸಲು ಡಿಸಿ ಸೂಚನೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಜೂನ್ 30 ಮಧ್ಯಾಹ್ನ 1 ಗಂಟೆಯಿಂದ ಜುಲೈ 2ರ ಬೆಳಗ್ಗೆ 8.30ರವರೆಗೆ ಭಾರಿ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಈ ಅವಧಿಯಲ್ಲಿ ಗಂಟೆಗೆ 30ರಿಂದ 40 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದ್ದು, ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಮನವಿ ಮಾಡಿದ್ದಾರೆ.

ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆ ಆಧರಿಸಿ ಜಿಲ್ಲಾಡಳಿತ ಈಗಾಗಲೇ ಮುಂಗಾರು ಪೂರ್ವ ಸಿದ್ಧತೆಗಳನ್ನು ಕೈಗೊಂಡಿದೆ. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾ ತುರ್ತು ಕಾರ್ಯಾಚರಣೆ ಕೇಂದ್ರವನ್ನು ತೆರೆಯಲಾಗಿದ್ದು, ಹವಾಮಾನ ಕುರಿತ ಮಾಹಿತಿಯನ್ನು ಜಿಲ್ಲಾಡಳಿತದ ಸಾಮಾಜಿಕ ಜಾಲತಾಣಗಳು ಹಾಗೂ ಸ್ಥಳೀಯ ಮಾಧ್ಯಮಗಳ ಮೂಲಕ ಸಾರ್ವಜನಿಕರು ಪಡೆದುಕೊಳ್ಳಬಹುದು.

ಆರೆಂಜ್ ಅಲರ್ಟ್ ಅವಧಿಯಲ್ಲಿ ಮೀನುಗಾರರು ಸಮುದ್ರಕ್ಕೆ ತೆರಳಬಾರದು ಎಂದು ಸೂಚಿಸಲಾಗಿದೆ. ಸಾರ್ವಜನಿಕರು, ವಿಶೇಷವಾಗಿ ಮಕ್ಕಳು, ನದಿ, ಕೆರೆ, ತಗ್ಗು ಪ್ರದೇಶಗಳು ಹಾಗೂ ಸಮುದ್ರ ತೀರಗಳಿಗೆ ತೆರಳದಂತೆ ಪಾಲಕರು ಎಚ್ಚರಿಕೆ ವಹಿಸಬೇಕು. ಪ್ರವಾಸಿಗರು ಸಹ ನೀರಿರುವ ಪ್ರದೇಶಗಳಿಗೆ ಇಳಿಯುವುದನ್ನು ಕಟ್ಟುನಿಟ್ಟಾಗಿ ತಪ್ಪಿಸಬೇಕು ಎಂದು ಜಿಲ್ಲಾಡಳಿತ ತಿಳಿಸಿದೆ.

ಕೃಷಿಕರು ಮಳೆ, ಗಾಳಿ ಹಾಗೂ ಗುಡುಗು-ಸಿಡಿಲಿನ ಸಂದರ್ಭಗಳಲ್ಲಿ ಕೃಷಿ ಚಟುವಟಿಕೆಗಳಿಂದ ದೂರವಿರಬೇಕು. ಸಾರ್ವಜನಿಕರು ಮಳೆಯ ವೇಳೆ ಹೊರಗೆ ಓಡಾಡದೆ ಸುರಕ್ಷಿತ ಕಟ್ಟಡಗಳಲ್ಲಿ ಆಶ್ರಯ ಪಡೆಯಬೇಕು. ಹಳೆಯ ಹಾಗೂ ಶಿಥಿಲಗೊಂಡ ಕಟ್ಟಡಗಳು, ಅಪಾಯಕಾರಿ ಮರಗಳು, ವಿದ್ಯುತ್ ಕಂಬಗಳು ಮತ್ತು ತುಂಡಾದ ವಿದ್ಯುತ್ ತಂತಿಗಳ ಸಮೀಪ ಸುಳಿಯಬಾರದು ಎಂದು ಸೂಚಿಸಲಾಗಿದೆ.

ತಗ್ಗು ಪ್ರದೇಶಗಳು ಅಥವಾ ಭೂಕುಸಿತ, ಗೋಡೆ ಕುಸಿತದ ಅಪಾಯ ಇರುವ ಮನೆಗಳಲ್ಲಿ ವಾಸಿಸುವವರು ಮುನ್ನೆಚ್ಚರಿಕೆಯಾಗಿ ಸುರಕ್ಷಿತ ಸ್ಥಳಗಳಿಗೆ ತೆರಳಬೇಕು. ಅಗತ್ಯವಿದ್ದರೆ ತಹಶೀಲ್ದಾರರು ಗುರುತಿಸಿರುವ ಕಾಳಜಿ ಕೇಂದ್ರಗಳಲ್ಲಿ ಆಶ್ರಯ ಪಡೆಯುವಂತೆ ಜಿಲ್ಲಾಧಿಕಾರಿ ಮನವಿ ಮಾಡಿದ್ದಾರೆ.

ಗ್ರಾಮೀಣ ಪ್ರದೇಶಗಳ ಕಾಲುಸಂಕ, ಕಿರುಸೇತುವೆಗಳನ್ನು ದಾಟುವಾಗ ವಿಶೇಷ ಎಚ್ಚರಿಕೆ ವಹಿಸಬೇಕು. ಶಿಥಿಲಾವಸ್ಥೆಯ ಕಟ್ಟಡಗಳು ಅಥವಾ ಅಪಾಯದ ಸ್ಥಿತಿಯಲ್ಲಿರುವ ಗೋಡೆಗಳು ಕಂಡುಬಂದರೆ ತಕ್ಷಣ ಜಿಲ್ಲಾಡಳಿತಕ್ಕೆ ಮಾಹಿತಿ ನೀಡುವಂತೆ ಸೂಚಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವಿಪತ್ತು ನಿರ್ವಹಣಾ ನಿಯಂತ್ರಣ ಕೊಠಡಿ 08382-229857, ವಾಟ್ಸ್‌ಆ್ಯಪ್ ಸಂಖ್ಯೆ 9483511015 ಅಥವಾ ಸಂಬಂಧಿಸಿದ ತಹಶೀಲ್ದಾರರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರನಾಗಿ, ಉಪ ಸಂಪಾದಕನಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತನಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad

Most Popular

error: Content is protected !!
Share