ಶಿರಸಿ: ಬೆಂಗಳೂರಿನ ಯಲಹಂಕದಲ್ಲಿ ಅ.6 ಮತ್ತು 7ರಂದು ನಡೆದ 8ನೇ ರಾಜ್ಯಮಟ್ಟದ ಪೊಲೀಸ್ ಕರ್ತವ್ಯ ಕೂಟ-2026ರಲ್ಲಿ ಉತ್ತರ ಕನ್ನಡ ಜಿಲ್ಲಾ ಪೊಲೀಸ್ ತಂಡ ಗಮನಾರ್ಹ ಸಾಧನೆ ಮಾಡಿದೆ.
ಗಣಕಯಂತ್ರ ವಿಭಾಗದ ‘ಆಫೀಸ್ ಆಟೋಮೆಷನ್’ ಸ್ಪರ್ಧೆಯಲ್ಲಿ ಶಿರಸಿ ಗ್ರಾಮೀಣ ಪೊಲೀಸ್ ಠಾಣೆಯ ಸಿಬ್ಬಂದಿ ರೊನಾಲ್ಡೊ ಅಲ್ಮೆಡಾ ಅವರು ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ಕರ್ತವ್ಯ ನಿರ್ವಹಣೆಯ ಜೊತೆಗೆ ವೃತ್ತಿಪರ ಕೌಶಲ್ಯ ಹಾಗೂ ತಾಂತ್ರಿಕ ಪ್ರತಿಭೆಯನ್ನು ಪ್ರದರ್ಶಿಸಿ ರಾಜ್ಯಮಟ್ಟದಲ್ಲಿ ಮೊದಲ ಸ್ಥಾನ ಗಳಿಸಿರುವ ರೊನಾಲ್ಡೊ ಅವರ ಸಾಧನೆಗೆ ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಇಲಾಖೆ ಮೆಚ್ಚುಗೆ ವ್ಯಕ್ತಪಡಿಸಿದೆ.
ಈ ಸಾಧನೆಗಾಗಿ ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕ ದೀಪನ್ ಎಂ.ಎನ್., ಐಪಿಎಸ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕೃಷ್ಣಮೂರ್ತಿ ಜಿ., ಶಿರಸಿ ಉಪವಿಭಾಗದ ಪೊಲೀಸ್ ಉಪಾಧೀಕ್ಷಕಿ ಗೀತಾ ಪಾಟೀಲ ಹಾಗೂ ಶಿರಸಿ ಗ್ರಾಮೀಣ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ರಮೇಶ ಹೂಗಾರ ಅವರು ಪೊಲೀಸ್ ಇಲಾಖೆಯ ಪರವಾಗಿ ರೊನಾಲ್ಡೊ ಅವರಿಗೆ ಹೃತ್ಪೂರ್ವಕ ಅಭಿನಂದನೆ ಸಲ್ಲಿಸಿದ್ದಾರೆ.


