ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಪಡಿತರ ಚೀಟಿದಾರರಿಗೆ ಆಹಾರ ಇಲಾಖೆ ಮಹತ್ವದ ಸೂಚನೆ ನೀಡಿದ್ದು, ಇ-ಕೆವೈಸಿ ಬಾಕಿ ಇರುವ ಸದಸ್ಯರು ಅಕ್ಟೋಬರ್ 20ರೊಳಗೆ ಕಡ್ಡಾಯವಾಗಿ ಇ-ಕೆವೈಸಿ ಪ್ರಕ್ರಿಯೆ ಪೂರ್ಣಗೊಳಿಸುವಂತೆ ತಿಳಿಸಿದೆ.
ಜಿಲ್ಲೆಯಲ್ಲಿ ಒಟ್ಟು 5,69,044 ಪಡಿತರ ಚೀಟಿ ಸದಸ್ಯರು ಐದು ವರ್ಷಗಳ ಹಿಂದೆ ಇ-ಕೆವೈಸಿ ಮಾಡಿಸಿಕೊಂಡಿದ್ದು, ಇದೀಗ ಅಂತಹ ಸದಸ್ಯರು ಮತ್ತೊಮ್ಮೆ ಇ-ಕೆವೈಸಿ ಮಾಡಿಸಿಕೊಳ್ಳಬೇಕಾಗಿದೆ. ಇ-ಕೆವೈಸಿ ಬಾಕಿ ಇರುವ ಸದಸ್ಯರ ಪಟ್ಟಿಯನ್ನು ಈಗಾಗಲೇ ಸಂಬಂಧಪಟ್ಟ ನ್ಯಾಯಬೆಲೆ ಅಂಗಡಿಗಳಿಗೆ ನೀಡಲಾಗಿದೆ.
ಹೀಗಾಗಿ ಪಡಿತರ ಚೀಟಿದಾರರು ತಮ್ಮ ಹೆಸರು ಇ-ಕೆವೈಸಿ ಬಾಕಿ ಇರುವ ಪಟ್ಟಿಯಲ್ಲಿ ಇದೆಯೇ ಎಂಬುದನ್ನು ತಮ್ಮ ವ್ಯಾಪ್ತಿಯ ನ್ಯಾಯಬೆಲೆ ಅಂಗಡಿಯಲ್ಲಿ ಪರಿಶೀಲಿಸಿಕೊಳ್ಳಬೇಕು. ಹೆಸರು ಬಾಕಿ ಇದ್ದರೆ ತಡಮಾಡದೆ ಹತ್ತಿರದ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ ಇ-ಕೆವೈಸಿ ಪೂರ್ಣಗೊಳಿಸಿಕೊಳ್ಳುವಂತೆ ಇಲಾಖೆ ಮನವಿ ಮಾಡಿದೆ.
ಇ-ಕೆವೈಸಿ ಮಾಡಿಸಿಕೊಳ್ಳದೆ ಬಾಕಿ ಉಳಿದರೆ, ಪಡಿತರ ಚೀಟಿಯ ಆಧಾರದ ಮೇಲೆ ಸರ್ಕಾರದಿಂದ ಪಡೆಯುತ್ತಿರುವ ವಿವಿಧ ಸೌಲಭ್ಯಗಳು ಮುಂದಿನ ದಿನಗಳಲ್ಲಿ ಸ್ಥಗಿತಗೊಳ್ಳುವ ಸಾಧ್ಯತೆ ಇದೆ ಎಂದು ಇಲಾಖೆ ಎಚ್ಚರಿಸಿದೆ.
ಮುಖ್ಯವಾಗಿ, ಇ-ಕೆವೈಸಿ ಪ್ರಕ್ರಿಯೆ ಸಂಪೂರ್ಣ ಉಚಿತವಾಗಿದೆ. ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿಗಾಗಿ ಹಣ ಪಡೆಯುತ್ತಿದ್ದರೆ, ಆಹಾರ ಇಲಾಖೆಯ ಗ್ರಾಹಕರ ಸಹಾಯವಾಣಿ 1967ಕ್ಕೆ ಕರೆ ಮಾಡಿ ದೂರು ಸಲ್ಲಿಸಬಹುದು. ಅಥವಾ ಸಂಬಂಧಪಟ್ಟ ತಹಶೀಲ್ದಾರರ ಕಚೇರಿಯ ಆಹಾರ ಶಿರಸ್ತೇದಾರರು ಹಾಗೂ ಆಹಾರ ನಿರೀಕ್ಷಕರಿಗೆ ದೂರು ನೀಡಬಹುದಾಗಿದೆ.
ಜಿಲ್ಲೆಯ ಎಲ್ಲಾ ಪಡಿತರ ಚೀಟಿ ಸದಸ್ಯರು ಅಕ್ಟೋಬರ್ 20ರ ಗಡುವಿನೊಳಗೆ ಇ-ಕೆವೈಸಿ ಪೂರ್ಣಗೊಳಿಸಿಕೊಂಡು, ಮುಂದಿನ ದಿನಗಳಲ್ಲಿ ಸೌಲಭ್ಯಗಳ ವ್ಯತ್ಯಯವಾಗದಂತೆ ಮುನ್ನೆಚ್ಚರಿಕೆ ವಹಿಸುವುದು ಅಗತ್ಯವಾಗಿದೆ.