ಕಾರವಾರ: ಸ್ವಾತಂತ್ರ್ಯ ಸಂಗ್ರಾಮದ ಸಂದರ್ಭದಲ್ಲಿ ಕೋಟ್ಯಂತರ ಭಾರತೀಯರಲ್ಲಿ ದೇಶಭಕ್ತಿಯ ಕಿಚ್ಚು ಹೊತ್ತಿಸಿದ್ದ ‘ವಂದೇ ಮಾತರಂ’ ಗೀತೆಯನ್ನು ಮೊಟಕುಗೊಳಿಸಿ ಕೇವಲ ಮೊದಲ ಎರಡು ಚರಣಗಳನ್ನು ಮಾತ್ರ ಹಾಡಬೇಕೆಂದು ಆದೇಶಿಸಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ಕ್ರಮವನ್ನು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ತೀವ್ರವಾಗಿ ಖಂಡಿಸಿದ್ದಾರೆ.
ಕೇಂದ್ರ ಸರ್ಕಾರದ ಸ್ಪಷ್ಟ ಆದೇಶ ಹಾಗೂ ಮಾರ್ಗಸೂಚಿಗಳು ಇದ್ದರೂ ಅವುಗಳನ್ನು ಉಲ್ಲಂಘಿಸಿ ರಾಜ್ಯ ಸರ್ಕಾರ ತನ್ನ ಅನುಕೂಲಕ್ಕೆ ತಕ್ಕಂತೆ ‘ವಂದೇ ಮಾತರಂ’ ಗೀತೆಯನ್ನು ಮೊಟಕುಗೊಳಿಸಿರುವುದು ನಾಚಿಕೆಗೇಡಿನ ಸಂಗತಿ ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ಆರೋಪಿಸಿದ್ದಾರೆ.
ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಪ್ರಮುಖ ಪಾತ್ರ ವಹಿಸಿದ ‘ವಂದೇ ಮಾತರಂ’ ಕೋಟ್ಯಂತರ ಭಾರತೀಯರ ಭಾವನೆಗಳಿಗೆ ಸಂಬಂಧಿಸಿದ ಗೀತೆಯಾಗಿದೆ. ಇಂತಹ ಗೀತೆಯನ್ನು ಕೇವಲ ಓಲೈಕೆ ಹಾಗೂ ಮತಬ್ಯಾಂಕ್ ರಾಜಕಾರಣಕ್ಕಾಗಿ ತುಂಡರಿಸುವ ಮೂಲಕ ಕಾಂಗ್ರೆಸ್ ಸರ್ಕಾರ ತನ್ನ ದೇಶವಿರೋಧಿ ಧೋರಣೆಯನ್ನು ಮತ್ತೊಮ್ಮೆ ಪ್ರದರ್ಶಿಸಿದೆ ಎಂದು ಕಾಗೇರಿ ವಾಗ್ದಾಳಿ ನಡೆಸಿದ್ದಾರೆ.
ದೇಶದ ಅಸ್ಮಿತೆ, ಏಕತೆ ಹಾಗೂ ಹುತಾತ್ಮರ ತ್ಯಾಗ-ಬಲಿದಾನಗಳ ಸಂಕೇತವಾಗಿರುವ ‘ವಂದೇ ಮಾತರಂ’ಗೆ ಅಪಮಾನ ಮಾಡುವ ಯಾವುದೇ ಅಧಿಕಾರ ರಾಜ್ಯ ಸರ್ಕಾರಕ್ಕಿಲ್ಲ. ಸರ್ಕಾರದ ಈ ನಿರ್ಧಾರದಿಂದ ನಾಡಿನ ದೇಶಪ್ರೇಮಿಗಳ ಸ್ವಾಭಿಮಾನಕ್ಕೆ ಧಕ್ಕೆಯಾಗಿದೆ ಎಂದು ಅವರು ಹೇಳಿದ್ದಾರೆ.
ಆದ್ದರಿಂದ ರಾಜ್ಯ ಸರ್ಕಾರ ಯಾವುದೇ ಷರತ್ತಿಲ್ಲದೆ ಈ ನಿರ್ಧಾರವನ್ನು ಕೂಡಲೇ ಹಿಂಪಡೆಯಬೇಕು ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಆಗ್ರಹಿಸಿದ್ದಾರೆ.