ಬೆಂಗಳೂರು: ವಿಧಾನಮಂಡಲ ಅಧಿವೇಶನದಲ್ಲಿ ರಾಜ್ಯದ ಪ್ರಮುಖ ಸಮಸ್ಯೆಗಳ ಕುರಿತು ಚರ್ಚೆಗೆ ಅವಕಾಶ ನೀಡದೆ, ಗದ್ದಲದ ಮೂಲಕ ಕಲಾಪದ ಅಮೂಲ್ಯ ಸಮಯವನ್ನು ವ್ಯರ್ಥ ಮಾಡುತ್ತಿರುವ ಬಿಜೆಪಿ ಹಾಗೂ ಜೆಡಿಎಸ್ ನಾಯಕರ ಧೋರಣೆಯನ್ನು ಖಂಡಿಸಿ ವಿಧಾನಸೌಧದ ಆವರಣದಲ್ಲಿ ಪ್ರತಿಭಟನೆ ನಡೆಯಿತು.
ಮಹಾತ್ಮ ಗಾಂಧೀಜಿ ಅವರ ಪ್ರತಿಮೆ ಎದುರು ನಡೆದ ಪ್ರತಿಭಟನೆಯಲ್ಲಿ ಯಲ್ಲಾಪುರ ಶಾಸಕ ಶಿವರಾಮ ಹೆಬ್ಬಾರ್ ಪಾಲ್ಗೊಂಡು ಪ್ರತಿಪಕ್ಷಗಳ ನಡೆಯನ್ನು ಖಂಡಿಸಿದರು.
ರಾಜ್ಯದ ಜನರ ಸಮಸ್ಯೆಗಳು, ಅಭಿವೃದ್ಧಿ ಕಾರ್ಯಗಳು ಹಾಗೂ ಸಾರ್ವಜನಿಕ ಹಿತಾಸಕ್ತಿಯ ವಿಚಾರಗಳ ಕುರಿತು ವಿಧಾನಮಂಡಲದಲ್ಲಿ ಆರೋಗ್ಯಕರ ಚರ್ಚೆ ನಡೆಯಬೇಕು. ಆದರೆ ಗದ್ದಲ ಸೃಷ್ಟಿಸಿ ಕಲಾಪಕ್ಕೆ ಅಡ್ಡಿಪಡಿಸುವುದು ಪ್ರಜಾಪ್ರಭುತ್ವದ ಆಶಯಗಳಿಗೆ ವಿರುದ್ಧವಾಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಸಚಿವರು, ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರು ಸೇರಿದಂತೆ ಹಲವರು ಉಪಸ್ಥಿತರಿದ್ದರು.