Friday, July 24, 2026
Join WhatsApp Group
HomeLocal Newsಮತದಾರರ ಪಟ್ಟಿ ಪರಿಷ್ಕರಣೆಗೆ ಜಾಗೃತಿ ಅಭಿಯಾನ

ಮತದಾರರ ಪಟ್ಟಿ ಪರಿಷ್ಕರಣೆಗೆ ಜಾಗೃತಿ ಅಭಿಯಾನ

ಕಾರವಾರ: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದ ಅಂಗವಾಗಿ ಜೂನ್ 30ರಿಂದ ಜುಲೈ 29ರವರೆಗೆ ಮತಗಟ್ಟೆ ಅಧಿಕಾರಿಗಳು ಮನೆ-ಮನೆಗೆ ಭೇಟಿ ನೀಡಿ ಎನ್ಯೂಮರೇಷನ್ ಫಾರ್ಮ್‌ಗಳನ್ನು ವಿತರಿಸಿ ಸಂಗ್ರಹಿಸುವ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ವ್ಯಾಪಕ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ದಿಲೀಷ್ ಶಶಿ ಸೂಚನೆ ನೀಡಿದರು.

ಸೋಮವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಕುರಿತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಆಯೋಜಿಸಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜೂನ್ 30ರಿಂದ ಮತಗಟ್ಟೆ ಅಧಿಕಾರಿಗಳು ಮತದಾರರ ಮನೆಗಳಿಗೆ ಪೂರ್ವಭರಿತ (Pre-filled) ಎನ್ಯೂಮರೇಷನ್ ಫಾರ್ಮ್‌ಗಳನ್ನು ವಿತರಿಸಲಿದ್ದು, ಮತದಾರರು ಅವುಗಳನ್ನು ಸರಿಯಾಗಿ ಭರ್ತಿ ಮಾಡಿ ಮರಳಿ ನೀಡುವುದು ಕಡ್ಡಾಯವಾಗಿದೆ. ಅರ್ಜಿಗಳ ಪ್ರತಿಗಳಿಗೆ ಬಿಎಲ್‌ಒ ಹಾಗೂ ಮತದಾರರು ಅಥವಾ ಅವರ ಕುಟುಂಬದ ಸದಸ್ಯರು ಸಹಿ ಮಾಡಬೇಕಿರುವ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು ಎಂದು ತಿಳಿಸಿದರು.

ಎಲ್ಲಾ ಇಲಾಖೆಗಳ ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ವಿವಿಧ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಪ್ರಮುಖ ಪ್ರವಾಸಿ ತಾಣಗಳು ಹಾಗೂ ಜನನಿಬಿಡ ಪ್ರದೇಶಗಳಲ್ಲಿ ವಿಶೇಷ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ತಾಲೂಕು ಪಂಚಾಯತ್‌ಗಳು ಈ ಕುರಿತು ಕ್ರಿಯಾ ಯೋಜನೆ ಸಿದ್ಧಪಡಿಸಿ ಸಲ್ಲಿಸಬೇಕು ಹಾಗೂ ನಗರ ಸ್ಥಳೀಯ ಸಂಸ್ಥೆಗಳು ಅಗತ್ಯ ಸಹಕಾರ ನೀಡಬೇಕು ಎಂದು ಸೂಚಿಸಿದರು.

ಮತಗಟ್ಟೆ ಅಧಿಕಾರಿಗಳಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸುವುದರ ಜೊತೆಗೆ, ಮತದಾರರ ಜಾಗೃತಿ ಕಾರ್ಯಕ್ರಮಗಳ ಛಾಯಾಚಿತ್ರಗಳೊಂದಿಗೆ ಸಮಗ್ರ ವರದಿಯನ್ನು ಜಿಲ್ಲಾ ಪಂಚಾಯತ್‌ಗೆ ಸಲ್ಲಿಸಬೇಕು. ಪದವಿ ಹಾಗೂ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಲ್ಲಿ ಹೆಚ್ಚಿನ ಅರಿವು ಮೂಡಿಸುವ ಕಾರ್ಯಕ್ಕೆ ಒತ್ತು ನೀಡಬೇಕು ಎಂದು ಹೇಳಿದರು.

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯವನ್ನು ಯಶಸ್ವಿಯಾಗಿ ಪೂರ್ಣಗೊಳಿಸಲು ಎಲ್ಲಾ ಇಲಾಖೆಗಳ ಅಧಿಕಾರಿಗಳು ಪರಸ್ಪರ ಸಮನ್ವಯದಿಂದ ತಮ್ಮ ಜವಾಬ್ದಾರಿಗಳನ್ನು ನಿರ್ವಹಿಸಬೇಕು ಎಂದು ಅವರು ಕರೆ ನೀಡಿದರು.

ಸಭೆಯಲ್ಲಿ ಉಪ ಕಾರ್ಯದರ್ಶಿ ಪ್ರಕಾಶ್ ಹಾಲಮ್ಮನವರ, ಮುಖ್ಯ ಲೆಕ್ಕಾಧಿಕಾರಿ ಆನಂದ ಸಾಹಬೀಬ್, ಮುಖ್ಯ ಯೋಜನಾಧಿಕಾರಿ ಸೋಮಶೇಖರ ಮೇಸ್ತಾ, ಯೋಜನಾ ನಿರ್ದೇಶಕ ಕರೀಂ ಅಸಾದಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರನಾಗಿ, ಉಪ ಸಂಪಾದಕನಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತನಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad

Most Popular

error: Content is protected !!
Share