ಕಾರವಾರ: ಭಾರೀ ಮಳೆ ಹಾಗೂ ಚಂಡಮಾರುತದ ಮುನ್ಸೂಚನೆ ಹಿನ್ನೆಲೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಜಲಸಾಹಸ ಕ್ರೀಡೆ ಮತ್ತು ಪ್ರವಾಸಿ ಬೋಟಿಂಗ್ ಚಟುವಟಿಕೆಗಳನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ.
ಭಾರತೀಯ ಹವಾಮಾನ ಇಲಾಖೆ (IMD) ನೀಡಿರುವ ಎಚ್ಚರಿಕೆಯನ್ನು ಗಂಭೀರವಾಗಿ ಪರಿಗಣಿಸಿರುವ ಜಿಲ್ಲಾಡಳಿತ, ಪ್ರವಾಸಿಗರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ಕ್ರಮ ಕೈಗೊಂಡಿದೆ. ಮುಂಬರುವ ಮಳೆಗಾಲದಲ್ಲಿ ಸಮುದ್ರ ಅಬ್ಬರ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಕಡಲತೀರ ಪ್ರದೇಶಗಳಲ್ಲಿ ಕಟ್ಟುನಿಟ್ಟಿನ ನಿಯಂತ್ರಣ ಜಾರಿಗೊಳಿಸಲಾಗಿದೆ.
ಜಿಲ್ಲೆಯ ಪ್ರಮುಖ ಪ್ರವಾಸಿ ತಾಣಗಳಾದ ಗೋಕರ್ಣ, ಮುರುಡೇಶ್ವರ ಹಾಗೂ ಕಾರವಾರ ಕಡಲತೀರಗಳಲ್ಲಿ ಪ್ರವಾಸಿ ಬೋಟಿಂಗ್ ಸೇವೆಗಳನ್ನು ಸಂಪೂರ್ಣ ಸ್ಥಗಿತಗೊಳಿಸಲಾಗಿದೆ. ಗೋಕರ್ಣದ ಓಂ ಬೀಚ್, ಕೂಡ್ಲೆ, ಹಾಫ್‌ಮೂನ್ ಹಾಗೂ ಪ್ಯಾರಡೈಸ್ ಬೀಚ್‌ಗಳಲ್ಲಿ ನಡೆಯುತ್ತಿದ್ದ ಎಲ್ಲಾ ರೀತಿಯ ವಾಟರ್ ಸ್ಪೋರ್ಟ್ಸ್ ಚಟುವಟಿಕೆಗಳಿಗೂ ಬ್ರೇಕ್ ಹಾಕಲಾಗಿದೆ.
ಜಿಲ್ಲಾಡಳಿತವು ಪ್ರವಾಸಿಗರು ಹಾಗೂ ಸ್ಥಳೀಯರು ಸಮುದ್ರದತ್ತ ಅನಗತ್ಯವಾಗಿ ತೆರಳದಂತೆ ಎಚ್ಚರಿಕೆ ನೀಡಿದ್ದು, ಸುರಕ್ಷತಾ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಮನವಿ ಮಾಡಿದೆ.