ಯಲ್ಲಾಪುರ: ಓದಿನಲ್ಲಿ ಚುರುಕು, ಕಾಲೇಜಿನ ಚಟುವಟಿಕೆಗಳಲ್ಲೂ ಸಕ್ರಿಯವಾಗಿದ್ದ 19 ವರ್ಷದ ವಿದ್ಯಾರ್ಥಿನಿ ಅನುಷಾ ಅವರ ದಿಢೀರ್ ಸಾವು ಯಲ್ಲಾಪುರದಲ್ಲಿ ದುಃಖದ ಛಾಯೆ ಮೂಡಿಸಿದೆ.
ಯಲ್ಲಾಪುರದ ಕಾಳಮ್ಮ ನಗರದಲ್ಲಿ ವಾಸವಿದ್ದ ಅನುಷಾ, ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬಿಕಾಂ ಪ್ರಥಮ ವರ್ಷದ ವಿದ್ಯಾರ್ಥಿನಿಯಾಗಿದ್ದರು. ಓದಿನಲ್ಲಿ ಉತ್ತಮ ಆಸಕ್ತಿ ಹೊಂದಿದ್ದ ಅವರು, ಕಾಲೇಜಿನ ಇತರ ಚಟುವಟಿಕೆಗಳಲ್ಲಿಯೂ ಸಕ್ರಿಯವಾಗಿ ಪಾಲ್ಗೊಳ್ಳುತ್ತಿದ್ದರು.
ಸೋಮವಾರ ಅನುಷಾ ಅವರ ಆರೋಗ್ಯದಲ್ಲಿ ದಿಢೀರ್ ಏರುಪೇರಾಗಿದ್ದು, ರಕ್ತದೊತ್ತಡ ಕಡಿಮೆಯಾದ ಹಿನ್ನೆಲೆಯಲ್ಲಿ ಅಸ್ವಸ್ಥರಾಗಿದ್ದರು ಎನ್ನಲಾಗಿದೆ. ಆಸ್ಪತ್ರೆಗೆ ಕರೆದೊಯ್ಯುವ ಮೊದಲೇ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಯುವ ವಿದ್ಯಾರ್ಥಿನಿಯ ಅಕಾಲಿಕ ನಿಧನದ ಸುದ್ದಿ ತಿಳಿದು ಅವರ ಸ್ನೇಹಿತರು, ಕಾಲೇಜಿನ ಪ್ರಾಚಾರ್ಯರು ಹಾಗೂ ಉಪನ್ಯಾಸಕರು ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.