ಯಲ್ಲಾಪುರ: ಸರ್ಕಾರಿ ಹಾಗೂ ಅರಣ್ಯ ಪ್ರದೇಶಗಳಲ್ಲಿರುವ ಆಸ್ತಿಗಳಿಗೆ ತೆರಿಗೆ ನಿರಾಕರಣೆ ಮತ್ತು ಇ-ಸ್ವತ್ತು 2.0 ತಂತ್ರಾಂಶದಿಂದ ಆಸ್ತಿಗಳನ್ನು ಕೈಬಿಡುವ ಕುರಿತು ರಾಜ್ಯ ಸರ್ಕಾರ ಹೊರಡಿಸಿದ್ದ ಸುತ್ತೋಲೆಗೆ ತಾತ್ಕಾಲಿಕ ತಡೆ ನೀಡಿರುವುದನ್ನು ತಮ್ಮ ಸಾಧನೆ ಎಂದು ಬಿಂಬಿಸುವುದು ಸರಿಯಲ್ಲ ಎಂದು ಬಿಜೆಪಿ ಯಲ್ಲಾಪುರ ಮಂಡಳದ ಅಧ್ಯಕ್ಷ ಪ್ರಸಾದ ಹೆಗಡೆ ಹೇಳಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಸುತ್ತೋಲೆಗೆ ತಡೆ ನೀಡಿರುವುದು ಕೇವಲ ಕಣ್ಣೊರೆಸುವ ತಂತ್ರ ಎಂಬ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಹೇಳಿಕೆಗೆ ಯಲ್ಲಾಪುರ ಕ್ಷೇತ್ರದ ಶಾಸಕರು ಆಕ್ಷೇಪ ವ್ಯಕ್ತಪಡಿಸಿರುವುದನ್ನು ಖಂಡಿಸಿದ್ದಾರೆ.
ರಾಜ್ಯ ಸರ್ಕಾರದ ಈ ನಿರ್ಧಾರದ ವಿರುದ್ಧ ಬಿಜೆಪಿ ಜಿಲ್ಲೆಯಾದ್ಯಂತ ಪ್ರತಿಭಟನೆ ನಡೆಸಿದ್ದು, ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಈ ವಿಚಾರ ಮುಂದಿನ ದಿನಗಳಲ್ಲಿ ದೊಡ್ಡ ಆಂದೋಲನವಾಗಿ ರೂಪುಗೊಂಡರೆ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಕಾಂಗ್ರೆಸ್ಗೆ ಹಿನ್ನಡೆಯಾಗಬಹುದು ಎಂಬ ಕಾರಣಕ್ಕೆ ಸರ್ಕಾರ ತಾತ್ಕಾಲಿಕವಾಗಿ ಹಿಂದೆ ಸರಿದಿದೆ ಎಂದು ಪ್ರಸಾದ ಹೆಗಡೆ ಆರೋಪಿಸಿದ್ದಾರೆ.
ಚಳಿಗಾಲದ ಅಧಿವೇಶನದಲ್ಲಿ ಈ ಕುರಿತು ಕಾನೂನು ತಿದ್ದುಪಡಿ ತರಲಾಗುವುದಾದರೆ, ಅದನ್ನು ಸಂಬಂಧಿಸಿದ ಇಲಾಖೆಯ ಸಚಿವರು ಅಥವಾ ಮುಖ್ಯಮಂತ್ರಿಗಳೇ ಸ್ಪಷ್ಟಪಡಿಸಬೇಕಿತ್ತು. ಕೇವಲ ತಾತ್ಕಾಲಿಕ ತಡೆ ನೀಡಿರುವುದನ್ನು ಸಮಸ್ಯೆಗೆ ಶಾಶ್ವತ ಪರಿಹಾರ ದೊರೆತಂತೆ ಬಿಂಬಿಸುವುದು ಸರಿಯಲ್ಲ ಎಂದು ಅವರು ಹೇಳಿದ್ದಾರೆ.
ರಾಜ್ಯದಲ್ಲಿನ ಅತಿಕ್ರಮಣ ಸಮಸ್ಯೆಗೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಬೇಕು. ಬಳಿಕ ಸಂಸದರ ನಿಯೋಗದ ಮೂಲಕ ಈ ವಿಚಾರವನ್ನು ಮುಂದಕ್ಕೆ ಕೊಂಡೊಯ್ಯಬೇಕು. ಈ ಪ್ರಕ್ರಿಯೆಯನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವರು ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಕಾಂಗ್ರೆಸ್ ಸರ್ಕಾರದ ಆದೇಶಗಳು ಪದೇಪದೇ ಬದಲಾಗುತ್ತಿದ್ದು, ಇದರಿಂದ ಬಡವರು ಸಂಕಷ್ಟಕ್ಕೆ ಸಿಲುಕುತ್ತಿದ್ದಾರೆ ಎಂದು ಟೀಕಿಸಿರುವ ಪ್ರಸಾದ ಹೆಗಡೆ, ಇ-ಸ್ವತ್ತು 2.0 ಹಾಗೂ ಆಸ್ತಿ ತೆರಿಗೆಗೆ ಸಂಬಂಧಿಸಿದ ಸಮಸ್ಯೆಗಳಿಗೆ ಸರ್ಕಾರ ಶಾಶ್ವತ ಪರಿಹಾರ ಒದಗಿಸಬೇಕು ಎಂದು ಒತ್ತಾಯಿಸಿದ್ದಾರೆ.


