Sunday, September 6, 2026
Join WhatsApp Group
HomeLocal Newsಕೂರೋಕೆ ಜಾಗ ಇಲ್ರಿ... ನಿಂತೇ ಇರ್ತೀವಿ ಬಿಡಿ!

ಕೂರೋಕೆ ಜಾಗ ಇಲ್ರಿ… ನಿಂತೇ ಇರ್ತೀವಿ ಬಿಡಿ!

ಸಾವಿರಾರು ಜನರ ಸಂಚಾರದ ನಡುವೆಯೂ ಮೂಲಸೌಕರ್ಯ ಕೊರತೆ

ಯಲ್ಲಾಪುರ: ಉತ್ತರ ಕನ್ನಡ ಜಿಲ್ಲೆಯ ಪ್ರಮುಖ ಸಾರಿಗೆ ಕೇಂದ್ರಗಳಲ್ಲಿ ಒಂದಾದ ಯಲ್ಲಾಪುರ ಹೊಸ ಬಸ್ ನಿಲ್ದಾಣದಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ ಪ್ರಯಾಣಿಕರನ್ನು ತೀವ್ರವಾಗಿ ಕಾಡುತ್ತಿದೆ. ಪ್ರತಿದಿನ ನೂರಾರು ಬಸ್‌ಗಳು ಆಗಮನ-ನಿರ್ಗಮನ ಮಾಡುತ್ತಿದ್ದು, ಸಾವಿರಾರು ಪ್ರಯಾಣಿಕರು ಇಲ್ಲಿ ಬಸ್‌ಗಾಗಿ ಕಾಯುತ್ತಿದ್ದರೂ, ಸಮರ್ಪಕ ಆಸನ ವ್ಯವಸ್ಥೆ ಇಲ್ಲದ ಕಾರಣ ಹೆಚ್ಚಿನವರು ಗಂಟೆಗಟ್ಟಲೆ ನಿಂತೇ ಕಾಯುವ ಅನಿವಾರ್ಯತೆ ಎದುರಿಸುತ್ತಿದ್ದಾರೆ.

ಬಸ್ ನಿಲ್ದಾಣದಲ್ಲಿ ಇರುವ ಕೆಲವೇ ಕಲ್ಲಿನ ಆಸನಗಳು ಸದಾ ಜನರಿಂದ ತುಂಬಿರುತ್ತವೆ. ಉಳಿದ ಪ್ರಯಾಣಿಕರು ನಿಂತೇ ಬಸ್‌ಗಾಗಿ ಕಾಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ವೃದ್ಧರು, ಗರ್ಭಿಣಿಯರು, ಪುಟ್ಟ ಮಕ್ಕಳೊಂದಿಗೆ ಬರುವ ತಾಯಂದಿರು ಹಾಗೂ ಅನಾರೋಗ್ಯ ಪೀಡಿತರು ಈ ಸಮಸ್ಯೆಯಿಂದ ಹೆಚ್ಚು ಸಂಕಷ್ಟ ಅನುಭವಿಸುತ್ತಿದ್ದಾರೆ.

ಪ್ರಯಾಣಿಕರಿಗೆ ಅನುಕೂಲವಾಗುವಂತೆ ಬಸ್ ಸಿಬ್ಬಂದಿಯ ಕಾರ್ಯಕ್ಕೆ ಅಡ್ಡಿಯಾಗದ ರೀತಿಯಲ್ಲಿ ಹೆಚ್ಚುವರಿ ಆಸನಗಳನ್ನು ಅಳವಡಿಸಬೇಕೆಂಬುದು ಸಾರ್ವಜನಿಕರ ಪ್ರಮುಖ ಬೇಡಿಕೆಯಾಗಿದೆ. ಹೊಸ ಬಸ್ ನಿಲ್ದಾಣ ಆರಂಭವಾಗಿ ಹಲವು ವರ್ಷಗಳು ಕಳೆದರೂ ಈ ಸಮಸ್ಯೆ ಬಗೆಹರಿಯದಿರುವುದು ಅಸಮಾಧಾನಕ್ಕೆ ಕಾರಣವಾಗಿದೆ.

ಇನ್ನೊಂದು ಪ್ರಮುಖ ಕೊರತೆಯೆಂದರೆ, ಪ್ರಯಾಣಿಕರು ತಮ್ಮ ದೂರು ಅಥವಾ ಸಲಹೆಗಳನ್ನು ದಾಖಲಿಸಲು ಎಲ್ಲರಿಗೂ ಕಾಣುವಂತೆ ಸಲಹಾ ಪೆಟ್ಟಿಗೆ (Suggestion Box) ಕೂಡ ಇಲ್ಲ ಎನ್ನುವುದು ಸಾರ್ವಜನಿಕರ ಆರೋಪ. ಪ್ರಯಾಣಿಕರ ಅಭಿಪ್ರಾಯ ಸಂಗ್ರಹಿಸುವ ಸರಳ ವ್ಯವಸ್ಥೆಯೂ ಇಲ್ಲದಿರುವುದು ಸಾರಿಗೆ ಸಂಸ್ಥೆಯ ಪ್ರಯಾಣಿಕ ಸ್ನೇಹಿ ಆಡಳಿತದ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಸರ್ಕಾರ ಮತ್ತು ಸಾರಿಗೆ ಸಂಸ್ಥೆ ಪ್ರಯಾಣಿಕರ ಅನುಕೂಲಕ್ಕಾಗಿ ಹಲವು ಯೋಜನೆಗಳನ್ನು ಜಾರಿಗೆ ತರುತ್ತಿರುವುದಾಗಿ ಹೇಳಲಾಗುತ್ತಿದ್ದರೂ, ಯಲ್ಲಾಪುರದಂತಹ ಪ್ರಮುಖ ಬಸ್ ನಿಲ್ದಾಣದಲ್ಲಿ ಮೂಲಸೌಕರ್ಯಗಳೇ ಅಪೂರ್ಣವಾಗಿರುವುದು ವಿಪರ್ಯಾಸ ಎಂದು ಸಾರ್ವಜನಿಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಪ್ರಯಾಣಿಕರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಹೆಚ್ಚುವರಿ ಆಸನಗಳು, ಸ್ವಚ್ಛತಾ ವ್ಯವಸ್ಥೆ, ಸಲಹಾ ಪೆಟ್ಟಿಗೆಯನ್ನು ಎದುರಿಗೇ ಇಡುವುದೂ ಸೇರಿದಂತೆ ಅಗತ್ಯ ಮೂಲಸೌಲಭ್ಯಗಳನ್ನು ಶೀಘ್ರವೇ ಕಲ್ಪಿಸಿ, ಯಲ್ಲಾಪುರ ಬಸ್ ನಿಲ್ದಾಣವನ್ನು ನಿಜವಾದ ಪ್ರಯಾಣಿಕ ಸ್ನೇಹಿ ಕೇಂದ್ರವನ್ನಾಗಿ ರೂಪಿಸಬೇಕೆಂಬುದು ಸಾರ್ವಜನಿಕರ ಆಗ್ರಹ.

ವರದಿ: ಮಹಾಬಲೇಶ್ವರ ಭಟ್ಟ, ಶಿಗೇಪಾಲ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad
Ad

Most Popular

error: Content is protected !!
Share